ಬೆಂಗಳೂರು:ಬೆಳಗಾವಿ ಮತ್ತು ಕಲಬುರಗಿ ಮಹಾನಗರ ಪಾಲಿಕೆಗೂ ಚುನಾವಣೆ ನಡೆಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರ ಮತ್ತು ರಾಜ್ಯ ಚುನಾವಣಾ ಆಯೋಗಕ್ಕೆ ಆದೇಶಿಸಿದೆ.
ನಗರ ಸ್ಥಳೀಯ ಸಂಸ್ಥೆಗಳಿಗೆ ಕಾಲಮಿತಿಯೊಳಗೆ ಚುನಾವಣೆ ನಡೆಸಲು ರಾಜ್ಯ ಸರ್ಕಾರ ಹಾಗೂ ಚುನಾವಣಾ ಆಯೋಗಕ್ಕೆ ಅಗತ್ಯ ನಿರ್ದೇಶನ ನೀಡುವ ಸಂಬಂಧ ಹೈಕೋರ್ಟ್ ದಾಖಲಿಸಿಕೊಂಡಿರುವ ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಇಂದು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಕೆಲ ಕಾಲ ವಾದ-ಪ್ರತಿವಾದ ಆಲಿಸಿದ ಪೀಠ ಕಲಬುರಗಿ, ಬೆಳಗಾವಿ ಮಹಾನಗರ ಪಾಲಿಕೆಗಳಿಗೆ ಚುನಾವಣೆ ನಡೆಸಲು ಸಮಯ ನಿಗದಿಪಡಿಸಿ ಆದೇಶಿಸಿತು.
ವಾರ್ಡ್ ಮರು ವಿಂಗಡಣೆ-ಮೀಸಲು ಪಟ್ಟಿ ಪ್ರಕಟಿಸಲು ಗಡುವು
ಕಲಬುರಗಿ ಮಹಾನಗರ ಪಾಲಿಕೆಗೆ ಸಂಬಂಧಿಸಿದಂತೆ ವಾರ್ಡ್ ಮರು ವಿಂಡಗಣೆ ಮತ್ತು ಮೀಸಲು ಪಟ್ಟಿ ಪ್ರಕಟಿಸಿಲ್ಲ. ಹೀಗಾಗಿ ರಾಜ್ಯ ಸರ್ಕಾರ ವಿಳಂಬ ಮಾಡದೆ ಮುಂದಿನ 6 ವಾರಗಳಲ್ಲಿ ವಾರ್ಡ್ ಮರು ವಿಂಗಡಣೆ ಅಧಿಸೂಚನೆ ಪ್ರಕಟಿಸಬೇಕು. ಅದಾದ ಎರಡು ತಿಂಗಳಲ್ಲಿ ಮೀಸಲು ಅಧಿಸೂಚನೆ ಪ್ರಕಟಿಸಬೇಕು. ನಂತರದ ಮೂರು ತಿಂಗಳಲ್ಲಿ ಮತದಾರರ ಪಟ್ಟಿ ಪ್ರಕಟಿಸಬೇಕು. ನಂತರದ 45 ದಿನಗಳಲ್ಲಿ ಚುನಾವಣಾ ವೇಳಾಪಟ್ಟಿ ಪ್ರಕಟಿಸಬೇಕು ಎಂದು ಆದೇಶಿಸಿತು.
ಬೆಳಗಾವಿ ಮಹಾನಗರ ಪಾಲಿಕೆಗೆ ಸಂಬಂಧಿಸಿದಂತೆ ವಾರ್ಡ್ ಮರು ವಿಂಗಡಣೆ ಪ್ರಕ್ರಿಯೆ ಪೂರ್ಣಗೊಂಡಿದೆಯಾದರೂ ಮೀಸಲು ಅಧಿಸೂಚನೆ ಪ್ರಕಟಿಸಿಲ್ಲ. ಹೀಗಾಗಿ ಸರ್ಕಾರ ಮುಂದಿನ ಎರಡು ತಿಂಗಳಲ್ಲಿ ಅಂತಿಮ ಮೀಸಲು ಅಧಿಸೂಚನೆ ಹೊರಡಿಸಬೇಕು. ಅದಾದ 45 ದಿನಗಳಲ್ಲಿ ಚನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಬೇಕು ಎಂದು ಆದೇಶಿಸಿತು.