ಬೆಂಗಳೂರು:ಮೂಡಿಗೆರೆ ಬಿಜೆಪಿ ಶಾಸಕ ಎಂ.ಪಿ ಕುಮಾರಸ್ವಾಮಿ, ಪತ್ನಿ ಸವಿತಾ ವಿರುದ್ಧ ಕೌಟುಂಬಿಕ ನ್ಯಾಯಾಲಯದಲ್ಲಿ ಮಂಜೂರಾಗಿದ್ದ ವಿಚ್ಛೇದನ ಪ್ರಕರಣಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಈ ಆದೇಶದಿಂದ ಕುಮಾರಸ್ವಾಮಿ ಮುಂದಾಗಿದ್ದಾರೆ ಎನ್ನಲಾದ ಎರಡನೇ ಮದುವೆಗೆ ಬ್ರೇಕ್ ಬಿದ್ದಂತಾಗಿದೆ.
ಮೈಸೂರಿನ ಕೌಟುಂಬಿಕ ನ್ಯಾಯಾಲಯ ಎಂ.ಪಿ ಕುಮಾರಸ್ವಾಮಿ ದಂಪತಿಗೆ ಮಂಜೂರು ಮಾಡಿದ್ದ ವಿಚ್ಛೇದನ ಪ್ರಶ್ನಿಸಿ ಪತ್ನಿ ಸವಿತಾ ಅವರು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿರುವ ಮುಖ್ಯ ನ್ಯಾಯಮೂರ್ತಿ ಆಲೋಕ್ ಆರಾಧೆ ಮತ್ತು ಎಸ್. ವಿಶ್ವಜಿತ್ ಶೆಟ್ಟಿ ಅವರಿದ್ದ ವಿಭಾಗೀಯ ಪೀಠ, ಕೌಟುಂಬಿಕ ನ್ಯಾಯಾಲಯಕ್ಕೆ ತಡೆಯಾಜ್ಞೆ ನೀಡಿದೆ. ಅಲ್ಲದೇ, ಪ್ರತಿವಾದಿಯಾಗಿರುವ ಎಂ.ಪಿ.ಕುಮಾರಸ್ವಾಮಿ ಅವರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಯನ್ನು ಮುಂದೂಡಿದೆ. ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಅರ್ಜಿದಾರರಿಗೆ ಪತಿಯಿಂದ ವಿಚ್ಛೇದನ ಪಡೆಯುವ ಇಚ್ಛೆ ಇಲ್ಲ. ಪ್ರತಿವಾದಿಯಾಗಿರುವವರು 2ನೇ ಮದುವೆಯಾಗುವ ಸಾಧ್ಯತೆ ಇದೆ. ಹಾಗಾಗಿ ವಿಚ್ಛೇದನ ಆದೇಶಕ್ಕೆ ತಡೆ ನೀಡುವಂತೆ ನ್ಯಾಯಾಲಯಕ್ಕೆ ವಿವರಿಸಿದರು. ವಾದ ಆಲಿಸಿದ ನ್ಯಾಯಪೀಠ ಕೌಟುಂಬಿಕ ನ್ಯಾಯಾಲಯ ನೀಡಿದ್ದ ಆದೇಶಕ್ಕೆ ತಡೆ ನೀಡಲಾಗಿದೆ.
ಪ್ರಕರಣದ ಹಿನ್ನೆಲೆ:2016ರಲ್ಲಿ ಎಂ.ಪಿ ಕುಮಾರಸ್ವಾಮಿ ಅವರ ಅಕ್ರಮ ಸಂಬಂಧ ವಿಚಾರವಾಗಿ ಆಕ್ಷೇಪ ವ್ಯಕ್ತಪಡಿಸಿದ ಕಾರಣ ಶಾಸಕ ಎಂ.ಪಿ.ಕುಮಾರಸ್ವಾಮಿ ಅವರು ಪತ್ನಿ ಸವಿತಾ ಅವರ ಮೇಲೆ ಸಾರ್ವಜನಿಕರ ಎದುರೇ ಹಲ್ಲೆಗೆ ಮುಂದಾಗಿದ್ದರು. ಇದಾದ ಬಳಿಕ ಪ್ರಕರಣ ಮೈಸೂರಿನ ಕೌಟುಂಬಿಕ ನ್ಯಾಯಾಲಯದ ಮೆಟ್ಟಿಲೇರಿತ್ತು. ವಿಚಾರಣೆ ನಡೆಸಿದ್ದ ನ್ಯಾಯಾಲಯ ವಿಚ್ಛೇದನ ಮಂಜೂರು ಮಾಡಿತ್ತು. ಇದನ್ನು ಪ್ರಶ್ನಿಸಿ ಸವಿತಾ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.