ಬೆಂಗಳೂರು: ತುಮಕೂರು ಗ್ರಾಮಾಂತರ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಸರ್ಕಾರಿ ಶಾಲಾ ಮಕ್ಕಳಿಗೆ ನಕಲಿ ವಿಮೆ ಪಾಲಿಸಿ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ, ಶಾಸಕ ಡಿ.ಸಿ. ಗೌರಿಶಂಕರ ಸ್ವಾಮಿ ವಿರುದ್ಧ ದಾಖಲಿಸಿರುವ ಎಫ್ಐಆರ್ ರದ್ದುಗೊಳಿಸಲು ಹೈಕೋರ್ಟ್ ನಿರಾಕರಿಸಿದೆ.
ಶಾಸಕ ಗೌರಿಶಂಕರ್ ವಿರುದ್ಧದ ಎಫ್ಐಆರ್ ರದ್ದುಗೊಳಿಸಲು ನಿರಾಕರಿಸಿದ ಹೈಕೋರ್ಟ್
ಸರ್ಕಾರಿ ಶಾಲಾ ಮಕ್ಕಳಿಗೆ ನಕಲಿ ವಿಮೆ ಪಾಲಿಸಿ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ತುಮಕೂರು ಗ್ರಾಮಾಂತರ ಠಾಣೆ ಪೊಲೀಸರು ಶಾಸಕ ಡಿ.ಸಿ. ಗೌರಿಶಂಕರ ಸ್ವಾಮಿ ವಿರುದ್ಧ ಎಫ್ಐಆರ್ ದಾಖಲಿಸಿದ್ದರು. ಇದನ್ನು ರದ್ದುಗೊಳಿಸುವಂತೆ ಹೈಕೋರ್ಟ್ಗೆ ಮನವಿಯನ್ನು ಸಲ್ಲಿಸಲಾಗಿತ್ತು. ಈ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ.
ಪ್ರಕರಣದ ಸಂಬಂಧ ತುಮಕೂರು ಗ್ರಾಮಾಂತರ ಠಾಣೆ ಪೊಲೀಸರು ದಾಖಲಿಸಿರುವ ಎಫ್ಐಆರ್ ರದ್ದುಪಡಿಸುವಂತೆ ಶಾಸಕ ಡಿ.ಸಿ. ಗೌರಿಶಂಕರ ಸ್ವಾಮಿ ಮನವಿಯನ್ನು ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜಾನ್ ಮೈಕಲ್ ಕುನ್ಹ ಅವರಿದ್ದ ಏಕಸದಸ್ಯಪೀಠ ಅರ್ಜಿ ವಜಾಗೊಳಿಸಿ ಆದೇಶಿಸಿದೆ.
ಪ್ರಕರಣದ ಹಿನ್ನೆಲೆ: 2018ರಲ್ಲಿ ನಡೆದಿದ್ದ ಸಾರ್ವತ್ರಿಕ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ತುಮಕೂರು ಗ್ರಾಮಾಂತರ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಗೌರಿಶಂಕರ ಸ್ವಾಮಿ ಸ್ಪರ್ಧಿಸಿದ್ದರು. ಈ ಸಂದರ್ಭದಲ್ಲಿ ಕ್ಷೇತ್ರದ ವ್ಯಾಪ್ತಿಯಲ್ಲಿ ಇರುವ ಸುಮಾರು ಐವತ್ತು ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಅಂದಾಜು 40 ಸಾವಿರ ನಕಲಿ ವಿಮೆ ಪಾಲಿಸಿ ನೀಡಿದ್ದಾರೆ. ಇದರಲ್ಲಿ 16 ಸಾವಿರ ವಿದ್ಯಾರ್ಥಿಗಳಿಗೆ ನಕಲಿ ಸಮೂಹ ವಿಮೆ ಪಾಲಿಸಿ ನೀಡಿದ್ದಾರೆ ಎಂದು ಆರೋಪಿಸಿ ರಮೇಶ್ ಬೆಟ್ಟಯ್ಯ ಎಂಬುವವರು ಪ್ರಧಾನಮಂತ್ರಿ ಹಾಗೂ ಮುಖ್ಯಮಂತ್ರಿಗೆ ದೂರು ಸಲ್ಲಿಸಿದ್ದರು. ದೂರಿನ ಮೇರೆಗೆ ಕ್ರಮ ಜರುಗಿಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗೆ ಸೂಚನೆ ನೀಡಲಾಗಿತ್ತು. ಅದರಂತೆ 2020 ರ ಜುಲೈ 18 ರಂದು ತುಮಕೂರು ಗ್ರಾಮಾಂತರ ಠಾಣೆ ಪೊಲೀಸರು ಗೌರಿಶಂಕರ್ ವಿರುದ್ಧ ಎಫ್ಐಆರ್ ದಾಖಲಿಸಿದ್ದರು. ಈ ಎಫ್ಐಆರ್ ನ್ನು ರದ್ದುಪಡಿಸುವಂತೆ ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿತ್ತು.