ಬೆಂಗಳೂರು: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರ ನೇಮಕಾತಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ರೂಪಿಸಿರುವ ಮಾರ್ಗಸೂಚಿಗಳಲ್ಲಿ ಮಧ್ಯಪ್ರವೇಶಿಸಲು ಹೈಕೋರ್ಟ್ ನಿರಾಕರಿಸಿದೆ.
ಇದೇ ವೇಳೆ ಮಂಡಳಿ ಅಧ್ಯಕ್ಷರ ನೇಮಕ ಪ್ರಕ್ರಿಯೆಯಲ್ಲಿ ಸುಪ್ರೀಂಕೋರ್ಟ್ ನಿರ್ದೇಶನಗಳು ಉಲ್ಲಂಘನೆಯಾದರೆ ಅದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಬಹುದು ಎಂದು ಸ್ಪಷ್ಟಪಡಿಸಿದೆ.
ಕೆಎಸ್ಪಿಸಿಬಿ ಅಧ್ಯಕ್ಷರ ನೇಮಕ ಮಾಡಲು ರಾಜ್ಯ ಸರ್ಕಾರ ರೂಪಿಸಿರುವ ಮಾರ್ಗಸೂಚಿಗಳು ಸುಪ್ರೀಂಕೋರ್ಟ್ ನಿರ್ದೇಶನಗಳಿಗೆ ವಿರುದ್ಧವಾಗಿವೆ ಎಂದು ಆಕ್ಷೇಪಿಸಿ ನಗರದ ವಕೀಲೆ ಗೀತಾ ಮಿಶ್ರಾ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಜಿ.ಆರ್.ಮೋಹನ್ ವಾದ ಮಂಡಿಸಿ, ಸುಪ್ರೀಂಕೋರ್ಟ್ ನಿರ್ದೇಶನದ ಅನುಸಾರ ರಾಜ್ಯ ಸರ್ಕಾರ ಮಾರ್ಗಸೂಚಿ ರೂಪಿಸಿಲ್ಲ. ಅಧ್ಯಕ್ಷರ ನೇಮಕಕ್ಕೆ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ರಚಿಸಿರುವ ಶೋಧನಾ ಸಮಿತಿಯಲ್ಲಿ ಇರುವ ಸದಸ್ಯರೇ ಆಯ್ಕೆ ಸಮಿತಿಯಲ್ಲಿಯೂ ಇದ್ದಾರೆ. ಶೋಧನಾ ಸಮಿತಿ ಮತ್ತು ಆಯ್ಕೆ ಸಮಿತಿಗಳು ಪ್ರತ್ಯೇಕವಾಗಿರಬೇಕು. ಹೀಗಾಗಿ ಸರ್ಕಾರದ ಮಾರ್ಗಸೂಚಿಗಳನ್ನು ರದ್ದುಪಡಿಸಬೇಕು ಎಂದು ಕೋರಿದರು.
ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ಶೋಧನಾ ಸಮಿತಿ ಮತ್ತು ಆಯ್ಕೆ ಸಮಿತಿಗಳು ಪ್ರತ್ಯೇಕವಾಗಿರಬೇಕು ಎಂದು ಕಾನೂನಿನಲ್ಲಿ ಉಲ್ಲೇಖಿಸಿಲ್ಲ. ಹೀಗಾಗಿ ಸರ್ಕಾರದ ಮಾರ್ಗಸೂಚಿಗಳಲ್ಲಿ ಮಧ್ಯಪ್ರವೇಶಿಸುವುದು ಸೂಕ್ತವಲ್ಲ. ಒಂದು ವೇಳೆ ಅಧ್ಯಕ್ಷರ ನೇಮಕ ಪ್ರಕ್ರಿಯೆಯಲ್ಲಿ ಸುಪ್ರೀಂ ನಿರ್ದೇಶನಗಳನ್ನು ಉಲ್ಲಂಘಿಸಿದರೆ ಅದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಬಹುದು ಎಂದು ಅಭಿಪ್ರಾಯಪಟ್ಟು ಅರ್ಜಿ ಇತ್ಯರ್ಥಪಡಿಸಿತು.