ಬೆಂಗಳೂರು:ರಿಯಲ್ ಎಸ್ಟೇಟ್ ವ್ಯವಹಾರಕ್ಕೆ ಸಂಬಂಧಿಸಿದಂತೆ 400 ಕೋಟಿ ರೂಪಾಯಿ ಬೃಹತ್ ಮೊತ್ತದ ಚೆಕ್ ಬೌನ್ಸ್ ಪ್ರಕರಣದಲ್ಲಿ ದಾಖಲಿಸಲಾಗಿರುವ ಕ್ರಿಮಿನಲ್ ಮೊಕದ್ದಮೆ ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ. ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ ಎಂಬೆಸ್ಸಿ ಗ್ರೂಪ್ನ ಅಧ್ಯಕ್ಷರೂ ಆಗಿರುವ ಜಿತೇಂದ್ರ ವೀರ್ವಾನಿ ಮತ್ತು ಇತರರು ತಮ್ಮ ಮೇಲಿನ ಪ್ರಕರಣ ರದ್ದುಪಡಿಸಬೇಕೆಂದು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ಚೆಕ್ ಬೌನ್ಸ್ ಪ್ರಕರಣದಲ್ಲಿ ಇವರ ವಿರುದ್ದ ಬೆಂಗಳೂರಿನ 21ನೇ ಎಸಿಎಂಎಂ ನ್ಯಾಯಾಲಯದಲ್ಲಿ ಮೊಕದ್ದಮೆ ದಾಖಲಾಗಿದೆ. ದುಬೈ ಮೂಲದ 80 ವರ್ಷದ ಹಿರಿಯ ನಾಗರೀಕರಾದ ಪರ್ಧನಾನಿ ಚತುರ್ಭುಜ ಬಸ್ಸಾರ್ ಮಲ್ ಎಂಬುವರು ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ್ದರು. ಈ ಬಗ್ಗೆ ವಿಚಾರಣೆ ನಡೆಸಿ ತೀರ್ಪು ನೀಡಿರುವ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ, ಈ ವ್ಯವಹಾರದಲ್ಲಿ ನ್ಯಾಯಾಲಯ ಮಧ್ಯಪ್ರವೇಶಿಸಲು ಬಯಸುವುದಿಲ್ಲ ಎಂದು ತಿಳಿಸಿ ವೀರ್ವಾನಿ ಮತ್ತು ಇತರರು ಸಲ್ಲಿಸಿದ್ದ ರಿಟ್ ಅರ್ಜಿಯನ್ನು ವಜಾಗೊಳಿಸಿದೆ.