ಬೆಂಗಳೂರು : ಐಪಿಎಸ್ ಅಧಿಕಾರಿ ಡಿ.ರೂಪ ವಿರುದ್ಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ದಾಖಲಿಸಿದ್ದ ಮಾನಹಾನಿ ಪ್ರಕರಣವನ್ನು ರದ್ದುಪಡಿಸಲು ಇಂದು ಹೈಕೋರ್ಟ್ ನಿರಾಕರಿಸಿತು. ಇದರಿಂದಾಗಿ ಡಿ.ರೂಪಾ ಅವರಿಗೆ ಹಿನ್ನಡೆಯಾಗಿದೆ.
ತಮ್ಮ ವಿರುದ್ಧದ ಪ್ರಕರಣ ರದ್ದು ಕೋರಿ ಡಿ.ರೂಪಾ ಮೌದ್ಗಿಲ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಸಚ್ಚಿನ್ ಶಂಕರ್ ಮಗದಂ ಅವರಿದ್ದ ನ್ಯಾಯಪೀಠ ವಿಚಾರಣೆ ನಡೆಸಿದ್ದು, ಪ್ರಕರಣ ರದ್ದುಗೊಳಿಸಲು ನಿರಾಕರಿಸಿ ಅರ್ಜಿ ವಜಾಗೊಳಿಸಿ ಆದೇಶಿಸಿದೆ. ಹೈಕೋರ್ಟ್ ಆದೇಶದಿಂದಾಗಿ ರೂಪಾ ಮೌದ್ಗಿಲ್ ಪ್ರಕರಣದ ವಿಚಾರಣೆ ಎದುರಿಸಬೇಕಾದ ಅನಿವಾರ್ಯತೆ ಉಂಟಾಗಿದೆ.
ಪ್ರಕರಣದ ಹಿನ್ನೆಲೆ:ಡಿ.ರೂಪಾ ಮೌದ್ಗಿಲ್ ಅವರು 2023ರ ಫೆ.18 ಮತ್ತು 19ರಂದು ತಮ್ಮ ಫೇಸ್ಬುಕ್ ಖಾತೆಯಲ್ಲಿ ನನ್ನ ವಿರುದ್ಧ ಕೀಳು ಅಭಿರುಚಿಯಿಂದ ಕೂಡಿದ ಆರೋಪ ಮಾಡಿದ್ದಾರೆ. ವಿದ್ಯುನ್ಮಾನ ಮಾಧ್ಯಮದಲ್ಲೂ ಹೇಳಿಕೆ ನೀಡಿದ್ದಾರೆ. ಆ ಆರೋಪಗಳು ನನ್ನ ವ್ಯಕ್ತಿತ್ವಕ್ಕೆ ಧಕ್ಕೆ ಉಂಟು ಮಾಡುವಂತಿವೆ. ನನ್ನ ತೇಜೋವಧೆ ಮಾಡುವ ದುರುದ್ದೇಶದಿಂದಲೇ ರೂಪಾ ಈ ಕೃತ್ಯ ಎಸಗಿದ್ದು, ಅದು ನನ್ನ ಖಾಸಗಿ, ಸಾಮಾಜಿಕ ಮತ್ತು ವೃತ್ತಿ ಬದುಕಿನ ಮೇಲೆ ಗಂಭೀರ ಪರಿಣಾಮ ಬೀರಿದೆ. ಅಲ್ಲದೆ, ಮಾನಸಿಕ ಹಿಂಸೆ ಅನುಭವಿಸಿದ್ದೇನೆ ಎಂದು ಆರೋಪಿಸಿ ರೋಹಿಣಿ ಸಿಂಧೂರಿ ಮಾ.3 ರಂದು ಅಧೀನ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು.