ಬೆಂಗಳೂರು:ಕೊರೊನ ವೈರಸ್ ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯನ್ನು ರದ್ದುಪಡಿಸಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ಇತ್ಯರ್ಥಪಡಿಸಿದೆ. ಈ ವೇಳೆ ಪರೀಕ್ಷೆಯನ್ನು ರದ್ದುಪಡಿಸಲು ನಿರಾಕರಿಸಿರುವ ಹೈಕೋರ್ಟ್, ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಅನುಸರಿಸುವಂತೆ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಗೆ ಸೂಚಿಸಿದೆ.
ರಾಜ್ಯದಲ್ಲಿ ಕೊರೊನ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಸಂದರ್ಭದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯನ್ನು ರದ್ದುಪಡಿಸಬೇಕು ಎಂದು ಕೋರಿ ವಕೀಲ ಲೋಕೇಶ್ ಮತ್ತಿತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯನ್ಯಾಯಮೂರ್ತಿ ಎಎಸ್ ಓಕಾ ಅವರಿದ್ದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಕೆಲಕಾಲ ಅರ್ಜಿದಾರರ ಪರ ವಕೀಲರು ಮತ್ತು ಸರ್ಕಾರದ ಪರ ವಕೀಲರ ವಾದ ಆಲಿಸಿದ ಪೀಠ, ಅರ್ಜಿ ಇತ್ಯರ್ಥಪಡಿಸಿ ಆದೇಶಿಸಿತು.
ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು ಲಿಖಿತ ಮಾಹಿತಿ ನೀಡಿ, ಜೂ. 25ರಿಂದ ಆರಂಭವಾಗಲಿರುವ ಎಸ್ಎಸ್ಎಲ್ಸಿ ಪರೀಕ್ಷೆಗಳನ್ನು ನಡೆಸಲು ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಪರೀಕ್ಷೆ ನಡೆಸುವ ವೇಳೆ ವಿದ್ಯಾರ್ಥಿಗಳು, ಶಿಕ್ಷಕರು, ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗಕ್ಕೆ ಕೊರೊನಾ ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಪರೀಕ್ಷಾ ಕೇಂದ್ರದಲ್ಲಿ ಮಾಸ್ಕ್, ಸ್ಯಾನಿಟೈಸರ್, ಆರೋಗ್ಯ ತಪಾಸಣೆ ಮತ್ತು ಸಾರಿಗೆ ವ್ಯವಸ್ಥೆ ಮಾಡಲಾಗಿದೆ.