ಬೆಂಗಳೂರು: ಭ್ರಷ್ಟಾಚಾರ ಪ್ರಕರಣದ ವಿಚಾರಣೆ ವೇಳೆ ಎಸಿಬಿಯ ಮುಖ್ಯಸ್ಥರನ್ನು ತರಾಟೆಗೆ ತೆಗೆದುಕೊಂಡ ಹಿನ್ನೆಲೆ ಹೈಕೋರ್ಟ್ ನ್ಯಾಯಮೂರ್ತಿ ಹೆಚ್. ಪಿ ಸಂದೇಶ್ ಅವರಿಗೆ ವರ್ಗಾವಣೆ ಬೆದರಿಕೆ ಹಾಕಿದ ಪ್ರಕರಣದ ಬಗ್ಗೆ ಎಸ್ ಐ ಟಿ ( ವಿಶೇಷ ತನಿಖಾ ತಂಡ ) ತನಿಖೆ ನಡೆಸಲು ಸರ್ಕಾರಕ್ಕೆ ಆದೇಶಿಸಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ವಿಭಾಗೀಯ ಪೀಠ ವಜಾ ಮಾಡಿದೆ.
ತುಮಕೂರಿನ ನ್ಯಾಯವಾದಿ ರಮೇಶ್ ನಾಯಕ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸೋಮವಾರ ನಡೆಸಿದ ಹೈಕೋರ್ಟ್ನ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ ಮತ್ತು ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರಿದ್ದ ವಿಭಾಗೀಯ ಪೀಠವು ಅರ್ಜಿಯು ವಿಚಾರಣೆಗೆ ಯೋಗ್ಯವಲ್ಲವೆಂದು ಅಭಿಪ್ರಾಯಿಸಿದೆ.
ಹೈಕೋರ್ಟ್ನ ನ್ಯಾಯಮೂರ್ತಿಯವರನ್ನು ವರ್ಗಾವಣೆ ಮಾಡುವ ಅಧಿಕಾರ ಯಾರಿಗೆ ಇದೆ ಎಂದು ನಿಮಗೆ ತಿಳಿದಿಲ್ಲವೇ?. ಭ್ರಷ್ಟಾಚಾರ ನಿಗ್ರಹ ದಳ ಎಸಿಬಿಗೆ ನ್ಯಾಯಾಧೀಶರ ವರ್ಗಾವಣೆ ಮಾಡುವ ಅಧಿಕಾರವಿಲ್ಲ. ಸಂವಿಧಾನದ ಪ್ರಕಾರ, ನ್ಯಾಯಾಂಗದ ಸ್ವಾತಂತ್ರ್ಯವು ಅತ್ಯಂತ ಪವಿತ್ರವಾಗಿದೆ ಎನ್ನುವುದು ಗೊತ್ತಿಲ್ಲವೆ ಎಂದು ವಿಭಾಗೀಯ ಪೀಠವು ಅರ್ಜಿದಾರರನ್ನು ಪ್ರಶ್ನಿಸಿದೆ.
ನ್ಯಾಯಮೂರ್ತಿಯವರನ್ನು ವರ್ಗಾವಣೆ ಮಾಡಿಸುವುದು ಇರಲಿ, ನ್ಯಾಯಾಂಗವನ್ನ ಇಂತಹವರಿಂದ ಮುಟ್ಟಲೂ ಸಹ ಸಾಧ್ಯವಿಲ್ಲ ಎಂದು ವಿಭಾಗೀಯ ಪೀಠವು ಅಭಿಪ್ರಾಯಪಟ್ಟಿದೆ. ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ ನ್ಯಾಯಮೂರ್ತಿಗಳಿಗೆ ವರ್ಗಾವಣೆ ಬೆದರಿಕೆಯೊಡ್ಡಿದ ಪ್ರಕರಣವನ್ನು ವಿಶೇಷ ತನಿಖಾ ತಂಡದ ತನಿಖೆಗೆ ವಹಿಸುವುದರ ಜೊತೆಗೆ ನ್ಯಾಯಮೂರ್ತಿ ಹೆಚ್. ಪಿ ಸಂದೇಶ್ ಅವರಿಗೆ ಸೂಕ್ತ ಭದ್ರತೆ ಒದಗಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರ್ಟ್ ಗೆ ಮನವಿ ಮಾಡಲಾಗಿತ್ತು.