ಬೆಂಗಳೂರು: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ ಅಧ್ಯಕ್ಷರನ್ನು ನೇಮಿಸುವ ಪ್ರಕ್ರಿಯೆ ಮುಂದುವರಿಸಬಹುದು ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.
ಈ ಮೂಲಕ ಅಧ್ಯಕ್ಷರ ನೇಮಕಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಂತಾಗಿದೆ. ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರು ಮತ್ತು ಸದಸ್ಯರ ನೇಮಕಾತಿಗೆ ಮಾರ್ಗಸೂಚಿಗಳನ್ನು ರೂಪಿಸಿ 2020ರ ಜೂ.19ರಂದು ರಾಜ್ಯ ಸರ್ಕಾರ ಹೊರಡಿಸಿರುವ ಅಧಿಸೂಚನೆ ಪ್ರಶ್ನಿಸಿ ಆರ್. ಆಂಜನೇಯರೆಡ್ಡಿ ಹಾಗೂ ಇತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ನೇತೃತ್ವದ ವಿಭಾಗೀಯ ಪೀಠ ಈ ನಿರ್ದೇಶನ ನೀಡಿದೆ.
ವಿಚಾರಣೆ ವೇಳೆ, ಸರ್ಕಾರದ ಪರ ವಕೀಲರು ಮೆಮೊ ಸಲ್ಲಿಸಿ ಅಧ್ಯಕ್ಷರು ಮತ್ತು ಸದಸ್ಯರ ನೇಮಕಾತಿಗೆ ಕೇದ್ರದ ‘ಜಲ (ಸಂರಕ್ಷಣೆ ಮತ್ತು ಮಾಲಿನ್ಯ ನಿಯಂತ್ರಣ) ಕಾಯ್ದೆ, ಸುಪ್ರೀಂಕೋರ್ಟ್ ಮಾರ್ಗಸೂಚಿಗಳ ಪ್ರಕಾರ ಶೈಕ್ಷಣಿಕ ಅರ್ಹತೆ, ಸೇವಾ ಅನುಭವ ಇತ್ಯಾದಿಗಳನ್ನು ನಿಗದಿಪಡಿಸಲಾಗಿದೆ ಎಂದು ಪೀಠಕ್ಕೆ ತಿಳಿಸಿದರು. ಅಲ್ಲದೇ ಹೆಚ್ಚುವರಿ ಅಡ್ವೋಕೇಟ್ ಜನರಲ್ ಧ್ಯಾನ್ ಚಿನ್ನಪ್ಪ ವಾದ ಮಂಡಿಸಿ ನಿಯಮಗಳನ್ನು ಪಾಲಿಸಿರುವ ಕುರಿತು ಸ್ಪಷ್ಟನೆ ನೀಡಿದರು.
ಹೇಳಿಕೆ ದಾಖಲಿಸಿಕೊಂಡ ಪೀಠ, ಜಲ ಕಾಯ್ದೆಯ ನಿಯಮಗಳನ್ನು ಮತ್ತು ಸುಪ್ರೀಂಕೋರ್ಟ್ ಮಾರ್ಗಸೂಚಿಗಳನ್ವಯ ಅಭ್ಯರ್ಥಿಯ ಶೈಕ್ಷಣಿಕ ಅರ್ಹತೆ ಮತ್ತು ಪ್ರಾಯೋಗಿಕ ಅನುಭವದ ಬಗ್ಗೆ ಪರಿಶೀಲಿಸಬೇಕು. ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಅಧ್ಯಕ್ಷರ ನೇಮಕಾತಿ ಪ್ರಕ್ರಿಯೆಯನ್ನು ಮುಂದುವರಿಸಬೇಕು. ಈಗಾಗಲೇ ನೇಮಕಾತಿಗೆ ಜಾಹಿರಾತು ಪ್ರಕಟಣೆ ಹೊರಡಿಸಿದ್ದರೆ, ನ್ಯಾಯಾಲಯ ಈಗ ನೀಡಿರುವ ವಿವರಣೆಗಳನ್ನು ಸೇರಿಸಿ ಹೊಸ ಪ್ರಕಟಣೆ ಹೊರಡಿಸಬೇಕು. ನೇಮಕಾತಿ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಬೇಕು ಎಂದು ತಾಕೀತು ಮಾಡಿ ವಿಚಾರಣೆಯನ್ನು ಮಾ.5ಕ್ಕೆ ಮುಂದೂಡಿತು.
ಇದನ್ನು ಓದಿ:ವಿದ್ಯಾವಂತ ಪತ್ನಿಗೂ ಜೀವನಾಂಶ ನೀಡಬೇಕು : ಹೈಕೋರ್ಟ್ ಮಹತ್ವದ ತೀರ್ಪು