ಬೆಂಗಳೂರು :ರಸ್ತೆ ಗುಂಡಿ ಮುಚ್ಚಲು ನೆಪಗಳನ್ನು ಹೇಳುತ್ತಿರುವ ಬಿಬಿಎಂಪಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಹೈಕೋರ್ಟ್, ಪಾಲಿಕೆಯ ಮುಖ್ಯ ಎಂಜಿನಿಯರ್ಗೆ ತೀವ್ರ ತರಾಟೆ ತೆಗೆದುಕೊಂಡಿದೆ.
ರಸ್ತೆ ಗುಂಡಿಗಳನ್ನು ಮುಚ್ಚಲು ಪಾಲಿಕೆ ಹಾಗೂ ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ 2015ರಲ್ಲಿ ಬೆಂಗಳೂರಿನ ವಿಜಯನ್ ಮೆನನ್ ಎಂಬುವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಹಾಗೂ ಸಚಿನ್ ಶಂಕರ್ ಮಗದಮ್ ಅವರಿದ್ಧ ವಿಭಾಗೀಯ ಪೀಠ ಇಂದು ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ನ್ಯಾಯಾಲಯದ ನಿರ್ದೇಶನದಂತೆ ಖುದ್ದು ಹಾಜರಾಗಿದ್ದ ಬಿಬಿಎಂಪಿ ಮುಖ್ಯ ಎಂಜಿನಿಯರ್ ವಿ.ಎಸ್ ಪ್ರಹ್ಲಾದ್, ರಸ್ತೆ ಗುಂಡಿಗಳನ್ನು ಮುಚ್ಚುವ ವಿಚಾರಕ್ಕೆ ಸಂಬಂಧಿಸಿದಂತೆ ಕಾರಣಗಳನ್ನು ನೀಡಲು ಮುಂದಾದರು.
ಇದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಪೀಠ, ಎಸಿ ಕಚೇರಿಯಲ್ಲಿ ಕೂರುವ ನಿಮಗೆ ಜನರ ಕಷ್ಟ ಅರ್ಥವಾಗುವುದಿಲ್ಲ. ಬರೀ ಕಾರಣಗಳನ್ನು ಹೇಳುತ್ತೀರಿ. ಕಳೆದ ವಾರ ಮಹಿಳೆಯೊಬ್ಬರು ರಸ್ತೆ ಗುಂಡಿ ತಪ್ಪಿಸಲು ಹೋಗಿ ಸಾವನ್ನಪ್ಪಿದ್ದಾರೆ. ಇದಕ್ಕಿಂತ ಹೀನಾಯ ಸ್ಥಿತಿ ಮತ್ತೇನಿದೆ ಎಂದು ಕಟುವಾಗಿ ಪ್ರಶ್ನಿಸಿತು.
ಅಲ್ಲದೇ, ನಿಮ್ಮನ್ನು ನ್ಯಾಯಾಂಗ ಆದೇಶದ ಮೂಲಕ ಇಂದೇ ಸೇವೆಯಿಂದ ಅಮಾನತು ಮಾಡಿ ಜೈಲಿಗೆ ಕಳುಹಿಸುತ್ತೇವೆ. ಇಲ್ಲವೇ ಸರ್ಕಾರಕ್ಕೆ ನಿಮ್ಮನ್ನು ಅಮಾನತು ಮಾಡಲು ಹಾಗೂ ನಿಮ್ಮ ವಿರುದ್ಧ ಎಫ್ಐಆರ್ ದಾಖಲಿಸಲು ನಿರ್ದೇಶಿಸುತ್ತೇವೆ. ನ್ಯಾಯಾಲಯದ ಆದೇಶಗಳನ್ನು ಪಾಲಿಸದ ನೀವು ನೆಪಗಳನ್ನೇ ಹೇಳಿಕೊಂಡು ಬರುತ್ತಿದ್ದೀರಿ. ನಿಮ್ಮ ನಿರ್ಲಕ್ಷ್ಯಕ್ಕೆ ಜನರು ಬೀದಿಯಲ್ಲಿ ಬಿದ್ದು ಸಾಯಬೇಕೆ? ನಗರದ ರಸ್ತೆಗಳೆಲ್ಲ ಗುಂಡಿಮಯವಾಗಿವೆ ಎಂದು ಪೀಠ ತೀವ್ರ ಆಕ್ರೋಶ ವ್ಯಕ್ತಪಡಿಸಿತು.
ಇದನ್ನೂ ಓದಿ:ಬೆಂಗಳೂರಲ್ಲಿ ರಸ್ತೆಗುಂಡಿ ತಪ್ಪಿಸಲು ಹೋಗಿ ಭೀಕರ ಅಪಘಾತ: ಶಿಕ್ಷಕಿ ತಲೆ ಮೇಲೆ ಹರಿದ ಗೂಡ್ಸ್ ವಾಹನ
ಈ ವೇಳೆ ಪಾಲಿಕೆ ಮುಖ್ಯ ಎಂಜಿನಿಯರ್ ವಿ.ಎಸ್ ಪ್ರಹ್ಲಾದ್ ಪೀಠಕ್ಕೆ ಕೈಮುಗಿದು ಕ್ರಮ ಜರುಗಿಸದಂತೆ ಕೋರಿದರು. ಸರ್ಕಾರದ ಪರ ವಕೀಲ ವಿ. ಶ್ರೀನಿಧಿ ಕೂಡ ಕಠಿಣ ಕ್ರಮ ಜರುಗಿಸದಂತೆ ಹಲವು ಬಾರಿ ಮನವಿ ಮಾಡಿದರು. ಅಲ್ಲದೇ, ಈ ಕುರಿತು ಹಿರಿಯ ಅಧಿಕಾರಿಗಳು ತಾವೇ ಖುದ್ದಾಗಿ ಚರ್ಚಿಸಿ ಸಮಸ್ಯೆ ಸರಿಪಡಿಸಲು ಯತ್ನಿಸುತ್ತೇನೆ ಎಂದು ಭರವಸೆ ನೀಡಿದರು.
ಅಂತಿಮವಾಗಿ ವಕೀಲರ ಮನವಿ ಪರಿಗಣಿಸಿದ ಪೀಠ, ನಿಮ್ಮ ಮಾತಿನ ಮೇಲೆ ಭರವಸೆ ಇಟ್ಟು 1 ವಾರ ಕಾಲಾವಕಾಶ ನೀಡುತ್ತೇವೆ. ಆದರೆ, ಮುಂದಿನ ವಿಚಾರಣೆ ವೇಳೆ ಕಾರಣಗಳನ್ನು ನೀಡಬಾರದು. ರಸ್ತೆ ಗುಂಡಿಗಳನ್ನು ಯಾರು, ಹೇಗೆ ಮುಚ್ಚುತ್ತಾರೆ ಎಂಬುದು ನಮಗೆ ಮುಖ್ಯವಲ್ಲ. ರಸ್ತೆಗಳು ಗುಣಮಟ್ಟದಿಂದ ಕೂಡಿರಬೇಕು.
ಈ ನಿಟ್ಟಿನಲ್ಲಿ ಯಾವೆಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ. ರಸ್ತೆ ಗುಂಡಿ ಮುಚ್ಚಲು ಯಾವ ತಂತ್ರಜ್ಞಾನ ಅನುಸರಿಸಲಾಗುತ್ತಿದೆ ಎಂಬ ಕುರಿತು ಮಾಹಿತಿ ನೀಡಬೇಕು. ಹಾಗೆಯೇ, ಮುಂದಿನ ವಿಚಾರಣೆ ಸಂದರ್ಭದಲ್ಲಿಯೂ ಪಾಲಿಕೆ ಮುಖ್ಯ ಎಂಜಿನಿಯರ್ ಹಾಜರಿರಬೇಕು ಎಂದು ನಿರ್ದೇಶಿಸಿ, ವಿಚಾರಣೆಯನ್ನು ಫೆ.15ಕ್ಕೆ ಮುಂದೂಡಿತು.
ಇದೇ ವೇಳೆ ಅರ್ಜಿದಾರರ ಪರ ವಕೀಲರು ಪೀಠಕ್ಕೆ ಮಾಹಿತಿ ನೀಡಿ, ಬಿಬಿಎಂಪಿ ರಸ್ತೆ ಗುಂಡಿ ರಿಪೇರಿ ಮಾಡಲಿಕ್ಕೇ 1 ಸಾವಿರ ಕೋಟಿ ರೂ. ಖರ್ಚು ಮಾಡಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಯಾವ ಲೆಕ್ಕದಲ್ಲಿ ಎಂಬುದು ತಿಳಿಯುತ್ತಿಲ್ಲ ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ಅಷ್ಟೊಂದು ಹಣ ರಸ್ತೆ ರಿಪೇರಿ ಮಾಡಿಲಿಕ್ಕೋ ಅಥವಾ ನಿರ್ಮಾಣ ಮಾಡಲಿಕ್ಕೋ ಎಂದು ಅಚ್ಚರಿ ವ್ಯಕ್ತಪಡಿಸಿತು.
ಇದನ್ನೂ ಓದಿ:ಅತೃಪ್ತ ಸಿ.ಎಂ.ಇಬ್ರಾಹಿಂ ಮನವೊಲಿಕೆಗೆ ಆಪ್ತನ ಮೂಲಕ ಸಿದ್ದರಾಮಯ್ಯ ಯತ್ನ!