ಬೆಂಗಳೂರು :ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಮತ್ತು ದಲಿತರ ಮೀಸಲಾತಿಗೆ ಸಂಬಂಧಿಸಿದಂತೆ ಆಕ್ಷೇಪಾರ್ಹ ಕಿರುನಾಟಕ (ಸ್ಕಿಟ್) ಪ್ರದರ್ಶಿಸಿದ ಆರೋಪದ ಮೇಲೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ ಬೆಂಗಳೂರು ಜೈನ್ ಯೂನಿವರ್ಸಿಟಿ ಸೆಂಟರ್ ಫಾರ್ ಮ್ಯಾನೇಜ್‌ಮೆಂಟ್ ಸ್ಟಡೀಸ್‌ನ ಏಳು ವಿದ್ಯಾರ್ಥಿಗಳ ವಿರುದ್ಧದ ದಾಖಲಾಗಿದ್ದ ಪ್ರಕರಣಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿ ಆದೇಶಿಸಿದೆ.
ಪ್ರಕರಣ ಸಂಬಂಧ ತಮ್ಮ ವಿರುದ್ಧದ ಎಫ್‌ಐಆರ್ ಹಾಗೂ ಅಧೀನ ನ್ಯಾಯಾಲಯದ ವಿಚಾರಣೆ ಪ್ರಕ್ರಿಯೆ ರದ್ದು ಕೋರಿ ನೈಮಾ ಅಕ್ತರ್ ನಜಾರಿಯಾ ಸೇರಿ ಏಳು ಮಂದಿ ವಿದ್ಯಾರ್ಥಿಗಳು ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಪೀಠ ಈ ಆದೇಶ ಮಾಡಿದೆ.
ಪ್ರಕರಣದ ಹಿನ್ನೆಲೆ:2023ರ ಫೆಬ್ರವರಿ 8ರಂದು ಕಾಲೇಜು ವತಿಯಿಂದ ನಗರದ ನಿಮ್ಹಾನ್ಸ್ ಕನ್ವೆಂನ್ಷನ್ ಸೆಂಟರ್‌ನಲ್ಲಿ ಹಮ್ಮಿಕೊಂಡಿದ್ದ ಯುವಜನೋತ್ಸವದ ನಿಮಿತ್ತ ಅರ್ಜಿದಾರ ವಿದ್ಯಾರ್ಥಿಗಳು ಸಮಾಜದಲ್ಲಿ ಚಾಲ್ತಿಯಲ್ಲಿರುವ ಮೀಸಲು ವ್ಯವಸ್ಥೆ ಕುರಿತು ವಿಡಂಬನಾತ್ಮಕ ಕಿರುನಾಟಕ (ಮ್ಯಾಡ್- ಆ್ಯಡ್ ಸ್ಕಿಟ್) ಪ್ರದರ್ಶನ ನೀಡಿದ್ದರು. ಅದರಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಮತ್ತು ದಲಿತರ ಬಗ್ಗೆ ಆಕ್ಷೇಪಾರ್ಹ ಸಂಭಾಷಣೆಗಳನ್ನು ವಿದ್ಯಾರ್ಥಿಗಳು ಹೇಳಿದ್ದರು ಎನ್ನಲಾಗಿತ್ತು. ಕಿರುನಾಟಕದ ವಿಡಿಯೋ ಸಾಮಾಜಿಕ ಜಾಲಾತಾಣದಲ್ಲಿ ಹರಿದಾಡಿದ್ದು, ಅದಕ್ಕೆ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದರು.
ಘಟನೆ ಕುರಿತಂತೆ ರಾಜ್ಯ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು 2023ರ ಫೆಬ್ರವರಿ 10ರಂದು ಜಯನಗರ ಸಿದ್ಧಾಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರು ಸ್ವೀಕರಿಸಿದ್ದ ಪೊಲೀಸರು, ಎಸ್‌ಸಿ-ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಎಫ್‌ಐಆರ್ ದಾಖಲಿಸಿ, ವಿದ್ಯಾರ್ಥಿಗಳನ್ನು ಬಂಧಿಸಿದ್ದರು. ನಂತರ ಜಾಮೀನು ಮೇಲೆ ಅವರು ಬಿಡುಗಡೆಯಾಗಿದ್ದರು. ಪ್ರಕರಣವು ನಗರದ 70ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದೆ.