ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆ ವೇಳೆ ವಿಜಯನಗರ ಹರಪ್ಪನಹಳ್ಳಿ ಪಟ್ಟಣದಲ್ಲಿ ನಡೆದಿದ್ದ ಬಿಜೆಪಿ ಪ್ರಚಾರದ ವೇಳೆ ಮತದಾರರಿಗೆ ಆಮಿಷ ನೀಡುವ ರೀತಿಯಲ್ಲಿ ಭಾಷಣ ಮಾಡಿದ್ದ ಆರೋಪ ಸಂಬಂಧ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ವಿರುದ್ಧ ದಾಖಲಾಗಿದ್ದ ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದ ತನಿಖೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿ ಆದೇಶಿಸಿದೆ.
ತಮ್ಮ ವಿರುದ್ಧ ಹರಪನಹಳ್ಳಿ ಠಾಣಾ ಪೊಲೀಸರು ದಾಖಲಿಸಿರುವ ಪ್ರಕರಣ ಹಾಗೂ ಅದರ ತನಿಖೆಯನ್ನು ರದ್ದುಪಡಿಸುವಂತೆ ಕೋರಿ ನಡ್ಡಾ ಕ್ರಿಮಿನಲ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ ಈ ಮಧ್ಯಂತರ ಆದೇಶ ಮಾಡಿ ವಿಚಾರಣೆಯನ್ನು ಜುಲೈ 21ಕ್ಕೆ ಮಂದೂಡಿದೆ.
ಪ್ರಕರಣದ ಹಿನ್ನೆಲೆ ಏನು?ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ 2023ರ ಮೇ 7ರಂದು ವಿಜಯನಗರ ಜಿಲ್ಲೆಯ ಹರಪ್ಪನಹಳ್ಳಿ ಪಟ್ಟಣದ ಐ.ಬಿ. ವೃತ್ತದಲ್ಲಿ ಬಿಜೆಪಿ ಪ್ರಚಾರ ಸಭೆ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಜೆ.ಪಿ.ನಡ್ಡಾ ಮಾತನಾಡಿ, ಡಬಲ್ ಇಂಜಿನ್ ಸರ್ಕಾರ ಬಂದ್ರೆ ಕೇಂದ್ರದ ಯೋಜನೆಗಳೆಲ್ಲ ರಾಜ್ಯದಲ್ಲಿ ಮಂದುವರಿಯುತ್ತವೆ. ಚುನಾವಣೆಯಲ್ಲಿ ಬಿಜೆಪಿ ಸೋತರೆ ಕೇಂದ್ರ ಸರ್ಕಾರದಿಂದ ಸಿಗುವ ಯೋಜನೆಗಳಿಂದ ಮತದಾರರು ವಂಚಿತರಾಗಲಿದ್ದೀರಿ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕಿಸಾನ್ ಸಮ್ಮಾನ್ ನಿಧಿ ಯೋಜನೆ, ಪ್ರಧಾನ ಮಂತ್ರಿ ಆವಾಸ್ ಯೋಜನೆ ಸೇರಿದಂತೆ ಕೇಂದ್ರದ ಹಲವು ಯೋಜನೆಗಳು ಬಂದ್ ಆಗಲಿವೆ. ನಮಗೆ ಅಭಿವೃದ್ಧಿ ಬೇಕಾದ್ರೆ ಬಿಜೆಪಿ ಗೆಲ್ಲಿಸಬೇಕು ಎಂದು ಹೇಳಿಕೆ ನೀಡಿದ್ದರು.