ಬೆಂಗಳೂರು:ವೇತನ ಪರಿಷ್ಕರಣೆಗೆ ಆಗ್ರಹಿಸಿ ಸಾರಿಗೆ ನೌಕರರ ಸಮಾನ ಮನಸ್ಕರ ವೇದಿಕೆ ನಾಳೆಯಿಂದ (ಮಾರ್ಚ್ 24 ರಿಂದ) ಹಮ್ಮಿಕೊಂಡಿದ್ದ ಮುಷ್ಕರಕ್ಕೆ ಹೈಕೋರ್ಟ್ ತಾತ್ಕಾಲಿಕ ಬ್ರೇಕ್ ಹಾಕಿದೆ. ಪ್ರಸ್ತುತ ರಾಜ್ಯಾದ್ಯಂತ ಮಕ್ಕಳ ಪರೀಕ್ಷೆಗಳು ನಡೆಯುತ್ತಿವೆ. ಈ ಸಂದರ್ಭದಲ್ಲಿ ಸಾರಿಗೆ ಮುಷ್ಕರ ಹಮ್ಮಿಕೊಂಡಲ್ಲಿ ಮಕ್ಕಳ ಭವಿಷ್ಯಕ್ಕೆ ತೊಂದರೆಯಾಗಲಿದೆ. ಈ ನಿಟ್ಟಿನಲ್ಲಿ ಮುಷ್ಕರ ನಡೆಸುವುದು ಸರಿಯಾದ ಕ್ರಮ ಅಲ್ಲ ಎಂದು ನ್ಯಾಯಪೀಠ ತಿಳಿಸಿದೆ.
ಸಾರಿಗೆ ನೌಕರರು ಕರೆದಿದ್ದ ಮುಷ್ಕರವನ್ನು ಪ್ರಶ್ನಿಸಿ ಶಿವಮೊಗ್ಗ ಜಿಲ್ಲೆಯ ಹರೊಗೊಲಿಗೆ ಗ್ರಾಮದ ಹೆಚ್.ಎಂ.ವೆಂಕಟೇಶ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಮುಖ್ಯನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ಅಶೋಕ್ ಎಸ್.ಕಿಣಗಿ ಅವರಿದ್ದ ನ್ಯಾಯಪೀಠ, ಮಕ್ಕಳ ಪರೀಕ್ಷಾ ದೃಷ್ಟಿಯಿಂದ ಮುಂದಿನ ಮೂರು ವಾರಗಳ ಕಾಲ ಮುಷ್ಕರ ನಡೆಸದಂತೆ ಸೂಚನೆ ನೀಡಿ ವಿಚಾರಣೆ ಮುಂದೂಡಿತು. ಇದೇ ವೇಳೆ ಮುಷ್ಕರಕ್ಕೆ ಕರೆ ನೀಡಿದ್ದ ಸಾರಿಗೆ ನೌಕರರ ಸಮಾನ ವೇದಿಕೆಗೆ ನೋಟಿಸ್ ಜಾರಿ ಮಾಡಿತು.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಕಾನೂನು ಪ್ರಕಾರ ನಡೆಯುವ ಮುಷ್ಕರಕ್ಕೆ ಅಡ್ಡಿಪಡಿಸುವುದಿಲ್ಲ. ಆದರೆ, ಪ್ರಸ್ತುತ ಕರೆದಿರುವ ಮುಷ್ಕರದಿಂದ ಸಾರ್ವಜನಿಕ ಸಾರಿಗೆ ವ್ಯವಸ್ಥೆ ಸಂಪೂರ್ಣ ಸ್ಥಗಿತಗೊಳ್ಳಲಿದೆ. ಇದರಿಂದ ಸಾಮಾನ್ಯ ಜನ ಹಾಗೂ ವಿದ್ಯಾರ್ಥಿಗಳು ಮತ್ತು ವೈದ್ಯಕೀಯ ಸಿಬ್ಬಂದಿ ಸೇರಿದಂತೆ ಸಾಮಾನ್ಯ ಜನರಿಗೆ ತೀವ್ರ ತೊಂದರೆ ಆಗಲಿದೆ. ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ವಿವಿಧ ತರಗತಿಗಳಿಗೆ ಪರೀಕ್ಷೆಗಳು ನಡೆಯುತ್ತಿವೆ. ಈ ಸಂದರ್ಭದಲ್ಲಿ ಬಸ್ ಮುಷ್ಕರ ನಡೆದರೆ ಮಕ್ಕಳು ಶಾಲೆಗೆ ತಲುಪಲು ಸಾಧ್ಯವಾಗುವುದಿಲ್ಲ. ಇದರಿಂದ ಸಮಯಕ್ಕೆ ಸರಿಯಾಗಿ ಪರೀಕ್ಷೆಗಳಿಗೆ ಹಾಜರಾಗುವ ಅವಕಾಶವನ್ನು ತಪ್ಪಿಸಿಕೊಳ್ಳುವಂತಾಗಲಿದೆ. ಅವರ ಶೈಕ್ಷಣಿಕ ಭವಿಷ್ಯದ ಮೇಲೆ ಪರಿಣಾಮ ಬೀರಲಿದೆ ಎಂದು ನ್ಯಾಯಪೀಠಕ್ಕೆ ವಿವರಿಸಿದರು.