ಬೆಂಗಳೂರು: ಬಿಡಿಎ ನೌಕರರ ಕಲ್ಯಾಣ ಸಂಘಕ್ಕೆ ಬೆಂಗಳೂರಿನ ದೊಡ್ಡಕಲ್ಲಸಂದ್ರದಲ್ಲಿ 33 ಎಕರೆ ಭೂಮಿಯನ್ನು ಹಂಚಿಕೆ ಮಾಡಿದ್ದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಕ್ರಮವನ್ನು ಹೈಕೋರ್ಟ್ ಎತ್ತಿಹಿಡಿದಿದೆ.
ಭೂಮಿ ಹಂಚಿಕೆ ಕಾನೂನು ಬಾಹಿರವಾಗಿದೆ ಮತ್ತು ಕಡಿಮೆ ಮೊತ್ತಕ್ಕೆ ಹಂಚಿಕೆ ಮಾಡಲಾಗಿದೆ ಎಂದು ಆರೋಪಿಸಿ ಬಿ. ವಿ. ಶಿವಸ್ವಾಮಿ ಎಂಬುವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ನೇತೃತ್ವದ ವಿಭಾಗೀಯ ಪೀಠ ಅರ್ಜಿದಾರರ ಆರೋಪಗಳನ್ನು ತಳ್ಳಿಹಾಕಿದೆ.
ಪೀಠ ತನ್ನ ತೀರ್ಪಿನಲ್ಲಿ, ಬಿಡಿಎ ವತಿಯಿಂದ ಹಂಚಿಕೆ ಮಾಡಲಾಗಿದ್ದ ಭೂಮಿಯಲ್ಲಿ ಸಂಘದ 759 ಸದಸ್ಯರಿಗೆ ನಿವೇಶನಗಳನ್ನು ಹಂಚಿಕೆ ಮಾಡಲಾಗಿದೆ. ಅರ್ಜಿದಾರರು ಆರೋಪಿಸಿರುವಂತೆ ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟಾಗಿಲ್ಲ. ಹೀಗಾಗಿ, ಭೂಮಿ ಹಂಚಿಕೆ ನ್ಯಾಯಬದ್ಧವಾಗಿದೆ ಎಂದು ಅಭಿಪ್ರಾಯಪಟ್ಟಿದೆ.