ಬೆಂಗಳೂರು:ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ( ಬಿಬಿಎಂಪಿ) ವ್ಯಾಪ್ತಿಯ ವಿವಿಧ ವಿಧಾನಸಭಾ ಕ್ಷೇತ್ರಗಳ ವಾರ್ಡ್ ಮರು ವಿಂಗಡಣೆ ಮಾಡಿ ಸರ್ಕಾರ ಹೊರಡಿಸಿರುವ ಅಧಿಸೂಚನೆ ರದ್ದು ಪಡಿಸುವಂತೆ ಕೋರಿ ಶಾಸಕರಾದ ಸೌಮ್ಯರೆಡ್ಡಿ, ಜಮೀರ್ ಅಹ್ಮದ್ ಖಾನ್ ಮತ್ತಿತರರು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ರದ್ದು ಪಡಿಸಿದೆ.
ಅರ್ಜಿಗಳ ವಿಚಾರಣೆ ನಡೆಸಿ ನ್ಯಾಯಮೂರ್ತಿ ಹೇಮಂತ ಚಂದನ ಗೌಡರ್ ಅವರಿದ್ದ ನ್ಯಾಯಪೀಠ ಈ ಅರ್ಜಿಗಳನ್ನು ವಜಾಗೊಳಿಸುತ್ತಿರುವುದಾಗಿ ತಿಳಿಸಿದೆ. ಅಲ್ಲದೆ, ಸೆ.21ರಂದು ಆದೇಶ ಹೊರಡಿಸುವುದಾಗಿ ತಿಳಿಸಿ ವಿಚಾರಣೆ ಮುಂದೂಡಿತು.
ಬಿಬಿಎಂಪಿ ವಾರ್ಡ್ ಮರು ವಿಂಗಡಣೆ: ಚಾಮರಾಜಪೇಟೆ, ಜಯನಗರ, ಶಿವಾಜಿ ನಗರ ಮತ್ತಿತರ ಕಡೆ ವಿರೋಧ ಪಕ್ಷದ ಶಾಸಕರು ಇರುವ ಕ್ಷೇತ್ರಗಳ ವಾರ್ಡ್ಗಳಲ್ಲಿ ಮತದಾರರ ಸಂಖ್ಯೆ ಕಡಿಮೆಯಿದೆ. ಕೆಲವು ವಾರ್ಡ್ಗಳಲ್ಲಿ ಮತದಾರರ ಸಂಖ್ಯೆ 34 ಸಾವಿರ ಇದ್ದರೆ, ಕೆಲವು ವಾರ್ಡ್ಗಳಲ್ಲಿ 39 ಸಾವಿರ ಇದ್ದಾರೆ. ಇನ್ನು ಕೆಲವು ಕಡೆ ವಾರ್ಡ್ಗಳನ್ನು ಎರಡು ವಿಧಾನಸಭಾ ಕ್ಷೇತ್ರಗಳ ನಡುವೆ ವಿಭಜಿಸಲಾಗಿದೆ ಎಂದು ಅರ್ಜಿಗಳಲ್ಲಿ ಆರೋಪಿಸಲಾಗಿತ್ತು.
ವಿಧಾನಸಭಾ ಕ್ಷೇತ್ರಗಳ ಭೌಗೋಳಿಕ ವಿಸ್ತೀರ್ಣ ಹಾಗೂ ಜನಸಂಖ್ಯೆ ಹೆಚ್ಚಳದ ಆಧಾರದಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ 243 ವಾರ್ಡ್ಗಳನ್ನು ಹೆಚ್ಚಳ ಮಾಡಲಾಗಿದೆ. 2011ರ ಜನಗಣತಿ ಆಧರಿಸಿ ಪ್ರತಿ ವಾರ್ಡ್ಗೆ ಜನಸಂಖ್ಯೆ ನಿಗದಿಪಡಿಸಲಾಗಿದೆ. ಪ್ರತಿಯೊಂದು ವಿಧಾನಸಭಾ ಕ್ಷೇತ್ರದ ವಾರ್ಡ್ ವಿಂಗಡಣೆಯಲ್ಲಿ ಶೇ.10ರಷ್ಟು ಜನಸಂಖ್ಯೆ ಏರಿಳಿತದ ಅನುಪಾತ ಅನುಸರಿಸಲಾಗಿದೆ.
ಅದರಂತೆ, 34 ಸಾವಿರದಿಂದ 39 ಸಾವಿರ ಜನಸಂಖ್ಯೆಯ ಆಧಾರದಲ್ಲಿ ವಾರ್ಡ್ಗಳನ್ನು ವಿಂಗಡಣೆ ಮಾಡಲಾಗಿದೆ. ಕೆಲವು ಕಡೆ ಭೌಗೋಳಿಕ ವಿಸ್ತೀರ್ಣ ಹೆಚ್ಚಿದ್ದು, ಜನಸಂಖ್ಯೆ ಕಡಿಮೆ ಇದೆ. ಇನ್ನೂ ಕೆಲವೆಡೆ ಭೌಗೋಳಿಕ ವಿಸ್ತೀರ್ಣ ದೊಡ್ಡದಾಗಿದ್ದು, ಜನಸಂಖ್ಯೆ ಕಡಿಮೆ. ವಾರ್ಡ್ಗಳ ಮರುವಿಂಗಡಣೆಗೆ 2011ರ ಜನಸಂಖ್ಯೆಯನ್ನು ಆಧರಿಸಲಾಗಿದೆ ಎಂದು ಅರ್ಜಿದಾರರು ತಮ್ಮ ಅರ್ಜಿಯಲ್ಲಿ ಆರೋಪಿಸಿದ್ದರು.
ವಾರ್ಡ್ ಪುನರ್ ವಿಂಗಡಣೆ ವೇಳೆ ಜನಸಂಖ್ಯೆ ಪ್ರಮಾಣವನ್ನು ಪರಿಗಣಿಸುವಲ್ಲಿ ಸರ್ಕಾರ ತಾರತಮ್ಯ ಎಸಗಿದೆ. ಈ ಮೂಲಕ ಬಿಬಿಎಂಪಿ ಕಾಯಿದೆ-2020ರ ಸೆಕ್ಷನ್ 7 ಅನ್ನು ಉಲ್ಲಂಘಿಸಲಾಗಿದೆ. ವಾರ್ಡ್ ಪುನರ್ ವಿಂಗಡಣೆಯಲ್ಲಿ ರಾಜಕೀಯ ದುರುದ್ದೇಶವಿದೆ ಎಂಬ ಅರ್ಜಿದಾರರ ತಮ್ಮ ಅರ್ಜಿಯಲ್ಲಿ ತಿಳಿಸಿದ್ದರು.
ಸರ್ಕಾರದ ಪರ ಅಡ್ವೋಕೇಟ್ ಜನರಲ್ ಪ್ರಭುಲಿಂಗ ಕೆ.ನಾವದಗಿ ವಾದಿಸಿ, ಪಾಲಿಕೆ ನಿಯಮಗಳ ಪ್ರಕಾರ ವಾರ್ಡ್ ಪುನರ್ ವಿಂಗಡಣೆ ಮಾಡಲಾಗಿದೆ. ಎಲ್ಲ ನಿಯಮಗಳನ್ನು ಅನುಸರಿಸಲಾಗಿದೆ. ವಾರ್ಡ್ಗಳಲ್ಲಿ ಮತದಾರರ ಸಂಖ್ಯೆಯಲ್ಲಿ ಶೇ.10 ವರೆಗೂ ಏರಿಳಿತವಾಗಿದ್ದು, ಅರ್ಜಿಯನ್ನು ವಜಾಗೊಳಿಸಬೇಕು ಎಂದು ನ್ಯಾಪೀಠಕ್ಕೆ ಮನವಿ ಮಾಡಿದರು.
ರಾಜ್ಯ ಚುನಾವಣಾ ಆಯೋಗದ ಪರ ವಾದ ಮಂಡಿಸಿದ್ದ ಹಿರಿಯ ವಕೀಲ ಕೆ ಎನ್ ಫಣೀಂದ್ರ, ಅರ್ಜಿದಾರರ ಪರ ವಕೀಲರು ಮತ್ತೆ ಮತ್ತೆ ತಕರಾರು ತೆಗೆಯುವುದು ಸಮಂಜಸವಲ್ಲ. ಈಗ ನಿಗದಿಪಡಿಸಲಾಗಿರುವ ಕ್ಷೇತ್ರ ಪುನರ್ ವಿಂಗಡಣೆಯ ಅನುಸಾರವೇ ಚುನಾವಣೆ ನಡೆಸಬೇಕು. ಏನಾದರೂ ಆಕ್ಷೇಪಣೆ ಅಥವಾ ಲೋಪದೋಷಗಳು ಇದ್ದಲ್ಲಿ ಅದನ್ನು ಮುಂದಿನ ಚುನಾವಣೆಯಲ್ಲಿ ಸರಿಪಡಿಸಿಕೊಳ್ಳಬಹುದು. ಚುನಾಯಿತ ಪ್ರತಿನಿಧಿಗಳಿಲ್ಲದೆ ಪಾಲಿಕೆಯನ್ನು ಕಾರ್ಯಾಂಗದ ಕೈಯಲ್ಲಿ ನಡೆಸಿಕೊಂಡು ಹೋಗುವುದು ಸೂಕ್ತವಲ್ಲ ಎಂದು ವಾದ ಮಂಡಿಸಿದ್ದರು.
(ಇದನ್ನೂ ಓದಿ: ಬಿಬಿಎಂಪಿ ವಾರ್ಡ್ ಪುನರ್ ವಿಂಗಡಣೆ ಸಮರ್ಥಿಸಿಕೊಂಡ ಸರ್ಕಾರ)