ಬೆಂಗಳೂರು:ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿದ್ದ ಕ್ರಮ ಪ್ರಶ್ನಿಸಿದ್ದ ಅರ್ಜಿ ಇತ್ಯರ್ಥಪಡಿಸಿರುವ ಹೈಕೋರ್ಟ್, ಈ ಕುರಿತಂತೆ ಸಂತ್ರಸ್ತೆ ಪ್ರತ್ಯೇಕವಾಗಿ ಸಲ್ಲಿಸಿದ್ದ 2 ಅರ್ಜಿಗಳನ್ನು ಸಂಬಂಧಪಟ್ಟ ಏಕ ಸದಸ್ಯ ಪೀಠಕ್ಕೆ ವರ್ಗಾಯಿಸಿದೆ.
ಗೃಹ ಸಚಿವರ ಸೂಚನೆ ಮೇರೆಗೆ ಎಸ್ಐಟಿ ರಚಿಸಿದ್ದ ನಗರ ಪೊಲೀಸ್ ಆಯುಕ್ತರ ಆದೇಶ ಪ್ರಶ್ನಿಸಿ ವಕೀಲೆ ಗೀತಾ ಮಿಶ್ರಾ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಹಾಗೂ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆ ಸಲ್ಲಿಸಿದ್ದ 2 ಪ್ರತ್ಯೇಕ ತಕರಾರು ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ವಾದ-ಪ್ರತಿವಾದ ಆಲಿಸಿದ ಪೀಠವು, ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ತನಿಖೆಗೆ ಎಸ್‌ಐಟಿ ರಚಿಸಿರುವ ಆದೇಶದ ಸಿಂಧ್ವುತ್ವ ಪ್ರಶ್ನಿಸಿ ಪಿಐಎಲ್ ಸಲ್ಲಿಸಲಾಗಿದೆ. ಇದೇ ಎಸ್ಐಟಿ ರಚನೆ ಸಿಂಧುತ್ವ ಪ್ರಶ್ನಿಸಿ ಪ್ರಕರಣದ ಸಂತ್ರಸ್ತೆಯೂ ತಕರಾರು ಅರ್ಜಿ ಸಲ್ಲಿಸಿದ್ದಾರೆ. ಹೀಗಾಗಿ, ಪಿಐಎಲ್ ವಿಚಾರಣೆ ಮುಂದುವರಿಸುವ ಅಗತ್ಯವಿಲ್ಲ ಎಂದು ಪಿಐಎಲ್ ಅರ್ಜಿಯನ್ನು ಇತ್ಯರ್ಥಪಡಿಸಿತು.
ಇನ್ನು ಸಂತ್ರಸ್ತೆ ಎಸ್‌ಐಟಿ ರಚನೆ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ಹಾಗೂ ರಮೇಶ್ ಜಾರಕಿಹೊಳಿ ಸದಾಶಿವನಗರ ಪೊಲೀಸ್ ಠಾಣೆಗೆ ನೀಡಿದ ದೂರು ಆಧರಿಸಿ ದಾಖಲಿಸಿರುವ ಎಫ್‌ಐಆರ್ ರದ್ದು ಕೋರಿ ಸಂತ್ರಸ್ತೆ ಸಲ್ಲಿಸಿರುವ 2 ತಕರಾರು ಅರ್ಜಿಗಳನ್ನು ವಿಚಾರಣೆಗೆ ಏಕ ಸದಸ್ಯ ಪೀಠದ ಮಂದೆ ನಿಗದಿಪಡಿಸಬೇಕು ಎಂದು ಆದೇಶಿಸಿತು.
ಸಂತ್ರಸ್ತೆ ಪರ ಹಿರಿಯ ವಕೀಲೆ ಇಂದಿರಾ ಜೈಸಿಂಗ್ ವಾದಿಸಿ, ರಮೇಶ್ ಜಾರಕಿಹೊಳಿ ವಿರುದ್ಧದ ತನಿಖಾ ವರದಿಯನ್ನು ಮ್ಯಾಜಿಸ್ಟ್ರೇಟ್ ಕೋರ್ಟ್‌ಗೆ ಸಲ್ಲಿಸಲು ಎಸ್‌ಐಟಿಗೆ ಅನುಮತಿ ನೀಡಿರುವ ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ ನೀಡಿದೆ. ಎಸ್‌ಐಟಿ ತನಿಖಾ ವರದಿ ಆಧರಿಸಿ ಯಾವುದೇ ಕ್ರಮ ಜರುಗಿಸುವಂತಿಲ್ಲ ಹಾಗೂ ಅರ್ಜಿಗಳನ್ನು ಶೀಘ್ರವಾಗಿ ಇತ್ಯರ್ಥಪಡಿಸುವಂತೆ ನಿರ್ದೇಶಿಸಿದೆ ಎಂದರು.