ಬೆಂಗಳೂರು: ಮಂಗಳೂರಿನ ಪಚ್ಚನಾಡಿ ಭೂಭರ್ತಿ ಘಟಕದಲ್ಲಿ ಬಹಳ ದಿನಗಳಿಂದ ಉಳಿದಿರುವ ತ್ಯಾಜ್ಯ ವಿಲೇವಾರಿ ಮಾಡುವಲ್ಲಿ ವಿಳಂಬ ಮಾಡುತ್ತಿರುವ ಮಂಗಳೂರು ಮಹಾನಗರ ಪಾಲಿಕೆ ವರ್ತನೆಗೆ ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್, ವಿಲೇವಾರಿ ಕಾರ್ಯವನ್ನು ಶೀಘ್ರವಾಗಿ ಆರಂಭಿಸದಿದ್ದರೆ ಪಾಲಿಕೆ ಆಯುಕ್ತರು ಮುಂದಿನ ವಿಚಾರಣೆಗೆ ಖುದ್ದು ಹಾಜರಾಗಬೇಕು ಎಂದು ನಿರ್ದೇಶಿಸಿದೆ.
ಮಂಗಳೂರಿನ ಪಚ್ಚನಾಡಿ ಘನತ್ಯಾಜ್ಯ ಭೂಭರ್ತಿ ಘಟಕದ ಅನಾಹುತಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ಪೀಠ ಈ ಸೂಚನೆ ನೀಡಿದೆ.
ವಿಚಾರಣೆ ವೇಳೆ ಮಂಗಳೂರು ನಗರಪಾಲಿಕೆ ಪರ ಎಎಜಿ ಧ್ಯಾನ್ ಚಿನ್ನಪ್ಪ ವಾದ ಮಂಡಿಸಿ, ಘಟಕದಲ್ಲಿ ಬಹಳ ದಿನಗಳಿಂದ ಉಳಿದಿರುವ ತ್ಯಾಜ್ಯ ವಿಲೇವಾರಿಗೆ ಗುತ್ತಿಗೆದಾರನ್ನು ಗುರುತಿಸಲಾಗಿದ್ದು, ಮಾತುಕತೆ ಸಹ ನಡೆದಿದೆ. ಟೆಂಡರ್ ಪ್ರಕ್ರಿಯೆಯಷ್ಟೇ ಬಾಕಿ ಉಳಿದಿದೆ. 50 ಕೋಟಿಗಿಂತ ಹೆಚ್ಚಿನ ಮೊತ್ತದ ಟೆಂಡರ್ಗೆ ಹಣಕಾಸು ಇಲಾಖೆ ಅನುಮೋದನೆ ಬೇಕಾಗಿದ್ದು, ಈ ಸಂಬಂಧ ಕಡತವನ್ನು ಹಣಕಾಸು ಇಲಾಖೆಗೆ ಕಳುಹಿಸಲಾಗಿದೆ. ಅನುಮೋದನೆ ದೊರೆಯುತ್ತಲೇ ಟೆಂಡರ್ ಪೂರ್ಣಗೊಳಿಸಿ ತ್ಯಾಜ್ಯ ವಿಲೇವಾರಿ ಕಾರ್ಯ ಆರಂಭಿಸಲಾಗುವುದು ಎಂದು ಪೀಠಕ್ಕೆ ಭರವಸೆ ನೀಡಿದರು.