ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ರಾಜಕಾಲುವೆ ಒತ್ತುವರಿ ತೆರವಿಗೆ ಸಂಬಂಧಿಸಿದಂತೆ ವಿಳಂಬ ಧೋರಣೆ ಅನುಸರಿಸುತ್ತಿರುವ ಪಾಲಿಕೆ ಕ್ರಮಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್, ಈ ಸಂಬಂಧ ನ್ಯಾಯಾಲಯವೇ ಸೂಕ್ತ ಆದೇಶ ನೀಡಬೇಕಾಗುತ್ತದೆ ಎಂದು ಎಚ್ಚರಿಗೆ ನೀಡಿದೆ.
ಬೆಂಗಳೂರು ನಗರದಲ್ಲಿ ರಸ್ತೆಗುಂಡಿಗಳ ಮುಚ್ಚುವುದಕ್ಕೆ ಸಂಬಂಧಿಸಿದಂತೆ ವಿಜಯನ್ ಮೆನನ್ ಮತ್ತಿತರರು ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯನ್ಯಾಯಮೂರ್ತಿ ಆಲೋಕ್ ಆರಾಧೆ ಅವರ ನೇತೃತ್ವದ ವಿಭಾಗೀಯ ಪೀಠ ಈ ಎಚ್ಚರಿಕೆ ನೀಡಿದ್ದು, ವಿಚಾರಣೆಯನ್ನು ಅಕ್ಟೋಬರ್ 25ಕ್ಕೆ ಮುಂದೂಡಿದೆ.
(ಓದಿ: ಒತ್ತುವರಿ ತೆರವು ವೇಳೆ ನಲಪಾಡ್ ವಾಗ್ವಾದ : ತೆರವು ತಡೆಯಲು ಯತ್ನ, ಬಗ್ಗದ ಪಾಲಿಕೆ ಅಧಿಕಾರಿಗಳು)
ವಿಚಾರಣೆ ವೇಳೆ ಬಿಬಿಎಂಪಿ ಪರ ವಕೀಲರು, ಕಳೆದ ವಿಚಾರಣೆ ಬಳಿಕ 10 ಒತ್ತುವರಿಗಳನ್ನು ತೆರವುಗೊಳಿಸಲಾಗಿದೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು. ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಪೀಠ, ಸೆ.19ರಂದು 612 ಒತ್ತುವರಿಗಳಿವೆ ಎಂದು ತಿಳಿಸಲಾಗಿತ್ತು. ಈವರೆಗೂ ಕೇವಲ 10 ಒತ್ತುವರಿಗಳನ್ನ ಮಾತ್ರ ತೆರವು ಮಾಡಲಾಗಿದೆ. ಉಳಿದ ಒತ್ತುವರಿಗಳು ತೆರವಿಗೆ ಮುಂದಾಗಿಲ್ಲ. ಈ ರೀತಿ ವಿಳಂಬ ಮಾಡಿದರೆ ಒತ್ತುವರಿ ತೆರವು ಮಾಡುವುದಕ್ಕೆ ಸಾಧ್ಯವಾಗುವುದಿಲ್ಲ. ಈ ಸಂಬಂಧ ಸೂಕ್ತ ಆದೇಶ ಹೊರಡಿಸಲಾಗುವುದು ಎಂದು ಎಚ್ಚರಿಕೆ ನೀಡಿತು.
221 ರಸ್ತೆ ಗುಂಡಿ ಮುಚ್ಚಲಾಗಿದೆ:ನಗರದ ಪ್ರಮುಖ ರಸ್ತೆಗಳಲ್ಲಿದ್ದ 221 ರಸ್ತೆ ಗುಂಡಿಗಳನ್ನು ಈಗಾಗಲೇ ಮುಚ್ಚಲಾಗಿದೆ. ಇನ್ನುಗಳಿದ ಗುಂಡಿಗಳನ್ನು ಹಂತ ಹಂತವಾಗಿ ಮುಚ್ಚಲಾಗುವುದು ಎಂದು ನ್ಯಾಯಪೀಠಕ್ಕೆ ಬಿಬಿಎಂಪಿ ವಕೀಲರು ವಿವರಿಸಿದರು. ಅಲ್ಲದೆ, ನಗರದ ಇತರೆ 227 ರಸ್ತೆಗಳಲ್ಲಿ ಡಾಂಬರೀಕರಣ ಮಾಡುವ ಕಾರ್ಯ ಈಗಾಗಲೇ ಪ್ರಾರಂಭಿಸಲಾಗಿದೆ. ಮಹದೇವಪುರ ವಲಯದ ರಸ್ತೆಗಳಲ್ಲಿ ಈವರೆಗೂ 5 ಕಿಲೋಮೀಟರ್ ವರೆಗೂ ಡಾಂಬರು ಹಾಕಲಾಗಿದೆ ಎಂದು ವಿವರಿಸಿದರು. ವಾದ ಆಲಿಸಿದ ನ್ಯಾಯಪೀಠ ವಿಚಾರಣೆ ಮುಂದೂಡಿತು.
(ಓದಿ: ನಾಮಕಾವಸ್ಥೆ ರಾಜಕಾಲುವೆ ಒತ್ತುವರಿ ಕಾರ್ಯಾಚರಣೆ: ಪ್ರಭಾವಿಗಳ ಆಸ್ತಿಗಿಲ್ಲ ಕುತ್ತು?)