ಬೆಂಗಳೂರು: ಸೇಫ್ ಸಿಟಿ ಯೋಜನೆಯ ಟೆಂಡರ್ ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ಇತ್ಯರ್ಥಪಡಿಸಿದೆ. ಹಾಗೆಯೇ ಎಫ್ಐಆರ್ ಇಲ್ಲದೆ ಪ್ರಕರಣವೊಂದನ್ನು ತನಿಖಾ ಸಂಸ್ಥೆಗೆ ವರ್ಗಾಯಿಸಲು ಬರುವುದಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದೆ.
ಸೇಫ್ ಸಿಟಿ ಪ್ರಾಜೆಕ್ಟ್ ಟೆಂಡರ್ ಯೋಜನೆ ಅವ್ಯವಹಾರಗಳ ಆರೋಪಗಳ ಕುರಿತು ಸಿಬಿಐ ತನಿಖೆ ನಡೆಸಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ನಗರದ ವಕೀಲೆ ಗೀತಾ ಮಿಶ್ರಾ ಪಿಐಎಲ್ ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ನೇತೃತ್ವದ ವಿಭಾಗೀಯ ಪೀಠ ಇತ್ಯರ್ಥಪಡಿಸಿದೆ.
ಇದನ್ನು ಓದಿ: ಪೇಟಿಎಂನಲ್ಲಿ 2 ನಿಮಿಷದೊಳಗೆ 2 ಲಕ್ಷ ರೂ. ತನಕ ಸಾಲ: ದಾಖಲಾತಿ, ಮರುಪಾವತಿ ವಿವರ ಹೀಗಿದೆ...
ಅಲ್ಲದೇ, ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಎಫ್‌ಐಆರ್ ದಾಖಲಾಗಿಲ್ಲ. ಎಫ್ಐಆರ್ ದಾಖಲಾಗದ ಪ್ರಕರಣವನ್ನು ಯಾವುದೇ ತನಿಖಾ ಸಂಸ್ಥೆಗೆ ಒಪ್ಪಿಸಲು ಬರುವುದಿಲ್ಲ. ಆದ್ದರಿಂದ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂಬ ಅರ್ಜಿದಾರರ ಮನವಿ ಪರಿಗಣಿಸಲು ಸಾಧ್ಯವಿಲ್ಲ. ನ್ಯಾಯಾಲಯ ಆದೇಶ ನೀಡಬಹುದಾದ ಯಾವ ಅಂಶಗಳೂ ಅರ್ಜಿಯಲ್ಲಿಲ್ಲ ಎಂದು ಅಭಿಪ್ರಾಯಪಟ್ಟು ಅರ್ಜಿ ವಿಚಾರಣೆ ಮುಗಿಸಿದೆ.
ಇದಕ್ಕೂ ಮುನ್ನ ಸರ್ಕಾರದ ಪರ ವಕೀಲರು ಮೆಮೋ ಸಲ್ಲಿಸಿ, ಅರ್ಜಿಯಲ್ಲಿ ಆಕ್ಷೇಪಿಸಲಾಗಿರುವ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ಟೆಂಡರ್ ಆಹ್ವಾನ ಹಾಗೂ ಪರಿಶೀಲನಾ ಸಮಿತಿ ಮುಖ್ಯಸ್ಥರಾಗಿದ್ದ ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಐಎಂಎ ಹಗರಣದಲ್ಲಿ ಆರೋಪಿಯಾಗಿದ್ದಾರೆ ಎಂಬುದು ಅರ್ಜಿದಾರರ ಆಕ್ಷೇಪ. ಆದರೆ, ಹೇಮಂತ್ ನಿಂಬಾಳ್ಕರ್ ಅವರನ್ನು ಡಿ.31ರಂದು ವರ್ಗಾವಣೆಗೊಳಿಸಲಾಗಿದೆ. ಹೀಗಾಗಿ ಅರ್ಜಿಯ ಹೆಚ್ಚಿನ ವಿಚಾರಣೆ ಅಗತ್ಯವಿಲ್ಲ ಎಂದು ವಿವರಿಸಿದರು.