ಬೆಂಗಳೂರು: ಬಳ್ಳಾರಿ ಜಿಲ್ಲೆ ವಿಭಜಿಸಿ ಹೊಸದಾಗಿ ರಚಿಸರುವ ವಿಜಯನಗರ ಜಿಲ್ಲೆಯಿಂದ ಕಂಪ್ಲಿ ತಾಲೂಕನ್ನು ಕೈಬಿಟ್ಟಿರುವ ಕ್ರಮ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ಸಂಬಂಧ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
ಈ ಕುರಿತು ಕಂಪ್ಲಿ ಸೇರ್ಪಡೆ ಹೋರಾಟ ಸಮಿತಿ ಅಧ್ಯಕ್ಷ ಕೆ.ಎಸ್ ಚಾಂದ್ ಬಾಷಾ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಇಂದು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಕೆಲಕಾಲ ಅರ್ಜಿದಾರರ ಪರ ವಕೀಲ ಕೆ. ರಾಘವೇಂದ್ರ ರಾವ್ ವಾದ ಆಲಿಸಿದ ಪೀಠ, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ, ಕಂದಾಯ ಭೂಮಾಪನ ಇಲಾಖೆ ಕಾರ್ಯದರ್ಶಿ, ಕಲಬುರಗಿ ಪ್ರಾದೇಶಿಕ ಆಯುಕ್ತ, ಬಳ್ಳಾರಿ ಜಿಲ್ಲಾಧಿಕಾರಿ ಸೇರಿ ಎಲ್ಲ ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿತು.
ಅಲ್ಲದೇ, 6 ವಾರಗಳಲ್ಲಿ ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿತು.
ಇನ್ನು ಅರ್ಜಿ ಇತ್ಯರ್ಥವಾಗುವವರೆಗೆ ವಿಜಯನಗರ ಜಿಲ್ಲೆ ರಚನೆ ಅಧಿಸೂಚನೆಗೆ ತಡೆ ನೀಡಬೇಕು ಎಂಬ ಅರ್ಜಿದಾರರ ಪರ ವಕೀಲರ ಮಧ್ಯಂತರ ಮನವಿಯನ್ನು ಪುರಸ್ಕರಿಸಲು ಪೀಠ ನಿರಾಕರಿಸಿತು.