ಬೆಂಗಳೂರು:ಖಾಸಗಿ ಆಸ್ಪತ್ರೆಗಳು ಸರ್ಕಾರ ನಿಗದಿ ಪಡಿಸಿರುವ ದರಗಳನ್ನು ಒಪ್ಪಿಕೊಂಡಿರುವುದಿಲ್ಲ. ಇಂಥ ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ತಕ್ಷಣವೇ ಭಾರತೀಯ ವೈದ್ಯ ಸಂಘ ಜೊತೆಗೆ ಸಭೆ ನಡೆಸಿ ಖಾಸಗಿ ಆಸ್ಪತ್ರೆಯ ಪ್ರತಿನಿಧಿಗಳನ್ನು ಕರೆದು ತಕ್ಷಣವೇ ಸಮಸ್ಯೆ ಬಗೆಹರಿಸಬೇಕು ಎಂದು ಮಾಜಿ ಸಚಿವ ಎಚ್.ಕೆ.ಪಾಟೀಲ್ ಸಿಎಂ ಯಡಿಯೂರಪ್ಪಗೆ ಪತ್ರ ಬರೆದಿದ್ದಾರೆ.
ಸಿಎಂ ಯಡಿಯೂರಪ್ಪಗೆ ಪತ್ರ ಬರೆದಿರುವ ಅವರು, ಮಹಾಮಾರಿ ಕೊರೊನಾ ವೈರಸ್ ಸಂಬಂಧ ರಾಜ್ಯ ಸರ್ಕಾರ ಮಹತ್ವದ ಹೊಣೆಗಾರಿಕೆಯನ್ನು ಮತ್ತು ಜವಾಬ್ದಾರಿಯನ್ನು ನಿರ್ವಹಿಸಬೇಕಾಗಿದೆ. ಈ ಜವಾಬ್ದಾರಿಗಳನ್ನು ನಿರ್ವಹಿಸುವ ಸಂದರ್ಭದಲ್ಲಿ ಸರ್ಕಾರ ಪಾರದರ್ಶಕ, ಭ್ರಷ್ಟಾಚಾರ ಮುಕ್ತ ಮತ್ತು ಸಮಯೋಚಿತ ಜನಪರ ನಿರ್ಧಾರಗಳನ್ನು ಕಾಲಕಾಲಕ್ಕೆ ತೆಗೆದುಕೊಳ್ಳಬೇಕಾಗಿದೆ ಎಂದು ತಿಳಿಸಿದ್ದಾರೆ.
ವಿಶ್ವದಾದ್ಯಂತ ಮಹಾಮಾರಿ ಕೊರೊನಾ ವೈರಸ್ (ಕೋವಿಡ್-19) ನಿಂದ ಪರಿಸ್ಥಿತಿ ಆಘಾತಕಾರಿ ಹಂತ ತಲುಪುತ್ತಿದೆ. ಕರ್ನಾಟಕದಲ್ಲಿಯೂ ಸಹ ಅತ್ಯಂತ ಗಂಭೀರವಾದ ಪರಿಸ್ಥಿತಿ ಈಗ ನಿರ್ಮಾಣವಾಗುತ್ತಿರುವ ಸಂದರ್ಭದಲ್ಲಿ ಅತ್ಯಂತ ತುರ್ತಾಗಿ ಕೆಲವು ಕ್ರಮಗಳನ್ನು ಕೈಗೊಳ್ಳಬೇಕಾಗಿದೆ ಎಂದು ಸಲಹೆ ನೀಡಿದ್ದಾರೆ.