ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಭವಿಷ್ಯದಲ್ಲಿ ಚಿಕಿತ್ಸೆಗೆ ಬೇಕಾಗಬಹುದಾದ ಹಾಸಿಗೆಗಳ ಸಂಭಾವ್ಯ ಅಂದಾಜು ಸಲ್ಲಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.
ಸರ್ಕಾರಕ್ಕೆ ಕೋವಿಡ್ ಚಿಕಿತ್ಸೆಗೆ ಲಭ್ಯವಿರುವ ಹಾಸಿಗೆಗಳ ವಿವರ ಕೇಳಿದ ಹೈಕೋರ್ಟ್
ಕೋವಿಡ್ ಚಿಕಿತ್ಸೆಗೆ ಲಭ್ಯವಿರುವ ಹಾಸಿಗೆಗಳ ವಿವರವನ್ನು ಸರ್ಕಾರಕ್ಕೆ ಹೈಕೋರ್ಟ್ ಕೇಳಿದೆ.
ಕೊರೊನಾ ನಿಯಂತ್ರಣ ಹಾಗೂ ಚಿಕಿತ್ಸೆಗೆ ಸಂಬಂಧಿಸಿದಂತೆ ಸಲ್ಲಿಸಿರುವ ವಿವಿಧ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಈ ವೇಳೆ ರಾಜ್ಯ ಸರ್ಕಾರದ ಪರ ವಕೀಲರು ಪೀಠಕ್ಕೆ ಮಾಹಿತಿ ನೀಡಿ, ಕೊರೊನಾ ಸೋಂಕಿತರ ಚಿಕಿತ್ಸೆಗೆ ರಾಜ್ಯದಲ್ಲಿ 48,848 ಹಾಸಿಗೆಗಳನ್ನು ಮೀಸಲಿಡಲಾಗಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದೆ. ಪ್ರತಿನಿತ್ಯ 10 ಸಾವಿರ ಹೊಸ ಪ್ರಕರಣಗಳು ಪತ್ತೆಯಾಗುತ್ತಿವೆ. ಹೀಗಾಗಿ ಹೆಚ್ಚಿನ ಸಿದ್ಧತೆಗಳನ್ನು ಮಾಡಿಕೊಳ್ಳಬೇಕಿದೆ ಎಂದು ತಿಳಿಸಿದರು.
ಹೇಳಿಕೆ ದಾಖಲಿಸಿಕೊಂಡ ಪೀಠ, ವಿಪತ್ತು ನಿರ್ವಹಣಾ ಕಾಯ್ದೆಯ ಅಡಿ ಪರಿಸ್ಥಿತಿ ನಿಭಾಯಿಸಲು ಎಲ್ಲ ಕ್ರಮಗಳನ್ನು ಕೈಗೊಳ್ಳಬೇಕು. ಈ ಸಂಬಂಧ ರಾಜ್ಯ ಸರ್ಕಾರ ಯಾವೆಲ್ಲ ಕ್ರಮಗಳನ್ನು ಕೈಗೊಳ್ಳುತ್ತಿದೆ ಮತ್ತು ಭವಿಷ್ಯದಲ್ಲಿ ಎಷ್ಟು ಹಾಸಿಗೆಗಳ ಅಗತ್ಯವಿದೆ ಎಂಬ ಸಂಭಾವ್ಯ ಅಂದಾಜು ಮಾಹಿತಿಯನ್ನು ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿ ವಿಚಾರಣೆ ಮುಂದೂಡಿತು.