ಬೆಂಗಳೂರು:ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ನಿರಾಕರಿಸುವ ಖಾಸಗಿ ಆಸ್ಪತ್ರೆಗಳ ವೈದ್ಯರು ಹಾಗೂ ಸಿಇಓ ಗಳನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಜರುಗಿಸುವಂತೆ ರಾಜ್ಯ ಮಾನವ ಹಕ್ಕುಗಳ ಆಯೋಗ, ಸರ್ಕಾರಕ್ಕೆ ಸೂಚನೆ ನೀಡಿದೆ.
ಕೊರೊನಾ ಸೋಂಕಿತರಿಗೆ ಚಿಕಿತ್ಸೆ ಕೊಡಲು ನಿರಾಕರಿಸುವ ವೈದ್ಯರನ್ನ ಬಂಧಿಸಿ: ಮಾನವ ಹಕ್ಕುಗಳ ಆಯೋಗ ಸೂಚನೆ - ಕೊರೊನಾ ಸೋಂಕಿತರಿಗೆ ಚಿಕಿತ್ಸೆ
ಮಾನವ ಹಕ್ಕುಗಳ ಉಲ್ಲಂಘನೆ ಕುರಿತು ಮಾಜಿ ಸಚಿವ ಹೆಚ್ ಕೆ ಪಾಟೀಲ್ ಅವರು ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು ಸಲ್ಲಿಸಿದ್ದರು. ದೂರು ಆಲಿಸಿದ ಆಯೋಗದ ಅಧ್ಯಕ್ಷ ನ್ಯಾಯಮೂರ್ತಿ ಡಿಹೆಚ್ ವಘೇಲಾ ನೇತೃತ್ವದ ಪೀಠ, ಆಸ್ಪತ್ರೆಗೆ ದಾಖಲಿಸಿಕೊಳ್ಳಲು ಹಾಗೂ ಚಿಕಿತ್ಸೆ ನೀಡಲು ನಿರಾಕರಿಸುವ ಖಾಸಗಿ ಆಸ್ಪತ್ರೆಗಳ ವೈದ್ಯರು ಹಾಗೂ ಸಿಇಓ ಗಳನ್ನು ಕಾನೂನು ರೀತಿ ಬಂಧಿಸಿ ಕ್ರಮ ಜರುಗಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ.
ಕೊರೊನಾ ಸೋಂಕಿನಿಂದ ಮೃತಪಟ್ಟವರ ಗೌರವಯುತ ಅಂತ್ಯ ಸಂಸ್ಕಾರ, ಸೋಂಕಿತರಿಗೆ ತುರ್ತು ಸಂದರ್ಭಗಳಲ್ಲಿ ಆ್ಯಂಬುಲೆನ್ಸ್ ವ್ಯವಸ್ಥೆ ಮತ್ತು ರೋಗಿಗಳನ್ನು ಆಸ್ಪತ್ರೆಗಳಿಗೆ ದಾಖಲಿಸುವ ವಿಚಾರದಲ್ಲಿ ಎದುರಾಗಿರುವ ಸಮಸ್ಯೆಗಳು ಮತ್ತು ಮಾನವ ಹಕ್ಕುಗಳ ಉಲ್ಲಂಘನೆ ಕುರಿತು ಮಾಜಿ ಸಚಿವ ಹೆಚ್ ಕೆ ಪಾಟೀಲ್ ಅವರು ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು ಸಲ್ಲಿಸಿದ್ದರು. ಈ ದೂರನ್ನು ಆಯೋಗದ ಅಧ್ಯಕ್ಷ ನ್ಯಾಯಮೂರ್ತಿ ಡಿಹೆಚ್ ವಘೇಲಾ ನೇತೃತ್ವದ ಪೀಠ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಆರೋಗ್ಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಕ್ತರ್ ಹಾಜರಿದ್ದರು. ಇವರಿಂದ ವಿವರಣೆ ಪಡೆದ ಆಯೋಗ, ಆಸ್ಪತ್ರೆಗೆ ದಾಖಲಿಸಿಕೊಳ್ಳಲು ಹಾಗೂ ಚಿಕಿತ್ಸೆ ನೀಡಲು ನಿರಾಕರಿಸುವ ಖಾಸಗಿ ಆಸ್ಪತ್ರೆಗಳ ವೈದ್ಯರು ಹಾಗೂ ಸಿಇಓ ಗಳನ್ನು ಕಾನೂನು ರೀತಿ ಬಂಧಿಸಿ ಕ್ರಮ ಜರುಗಿಸಬೇಕು. ಅಂತ್ಯಕ್ರಿಯೆ ಶಿಷ್ಟಾಚಾರಗಳ ಬಗ್ಗೆ ವ್ಯಾಪಕ ಪ್ರಚಾರ ನೀಡಬೇಕು. ಶವಸಂಸ್ಕಾರಕ್ಕೆ ಅಗತ್ಯ ಮೂಲ ಸೌಕರ್ಯಗಳನ್ನು ಒದಗಿಸಬೇಕು. ಈ ಸಂಬಂಧ ಮಂಗಳವಾರದಿಂದ ಯಾವುದೇ ದೂರುಗಳು ಬರದಂತೆ ನೋಡಿಕೊಳ್ಳಬೇಕು ಎಂದು ತಾಕೀತು ಮಾಡಿದೆ.