ಬೆಂಗಳೂರು: ಜಾತಿ ಗಣತಿ ವರದಿಗೆ ರಾಜ್ಯದ ಎರಡು ಪ್ರಬಲ ಸಮುದಾಯಗಳು ತೀವ್ರ ವಿರೋಧ ವ್ಯಕ್ತಪಡಿಸುತ್ತಿರುವ ಮಧ್ಯೆಯೇ ವರದಿ ಸ್ವೀಕರಿಸಲು ಸಿಎಂ ಸಿದ್ದರಾಮಯ್ಯ ಮುಂದಾಗಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್ ಪೋಸ್ಟ್ ಮಾಡಿರುವ ಅವರು, ನಮ್ಮ ಹೆಮ್ಮೆಯ ನಾಯಕರಾದ ರಾಹುಲ್ ಗಾಂಧಿಯವರ ನಿಲುವಿಗೆ ನನ್ನ ಪೂರ್ಣ ಸಹಮತವಿದೆ. ದೇಶಾದ್ಯಂತ ಜಾತಿಗಣತಿ ನಡೆದು, ಅದರ ವರದಿಯ ಆಧಾರದ ಮೇಲೆ "ಸರ್ವರಿಗೂ ಸಮಪಾಲು - ಸರ್ವರಿಗೂ ಸಮಬಾಳು" ದಕ್ಕಿದಾಗಲೇ ದೇಶಕ್ಕೆ ದೊರೆತ ಸ್ವಾತಂತ್ರ್ಯ ಸಾರ್ಥಕವಾಗಲಿದೆ ಎಂಬುದು ನನ್ನ ಭಾವನೆ. ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ನಡೆಸಿದ ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿ ಸ್ವೀಕರಿಸಿ, ಅವಕಾಶಗಳಿಂದ ವಂಚಿತವಾದ ಸಮುದಾಯಗಳಿಗೆ ನ್ಯಾಯ ಕೊಡಿಸುವ ನನ್ನ ನಿರ್ಧಾರ ಅಚಲವಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಕಾಂತರಾಜು ವರದಿ ಸಲ್ಲಿಕೆಗೆ ದಿನಗಣನೆ ಆರಂಭವಾಗಿದ್ದು, ಹಿಂದುಳಿದ ವರ್ಗಗಳ ಆಯೋಗ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಈ ತಿಂಗಳಾಂತ್ಯದೊಳಗೆ ವರದಿ ಸಲ್ಲಿಕೆ ಮಾಡಲಿದ್ದಾರೆ. ಇತ್ತ ಲಿಂಗಾಯತ ಹಾಗೂ ಒಕ್ಕಲಿಗರ ಸಮುದಾಯದ ಸ್ವಾಮೀಜಿಗಳು, ರಾಜಕೀಯ ನಾಯಕರು ವರದಿ ಸಲ್ಲಿಕೆಗೆ ಬಗ್ಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಅವೈಜ್ಞಾನಿಕ ವರದಿಯನ್ನು ಯಾವುದೇ ಕಾರಣಕ್ಕೂ ಸ್ವೀಕರಿಸಬಾರದು ಎಂದು ಎರಡೂ ಪ್ರಬಲ ಸಮುದಾಯಗಳು ಒತ್ತಾಯಿಸಿವೆ. ಸರ್ಕಾರದ ಡಿಸಿಎಂ ಸೇರಿ ಹಲವು ಸಚಿವರುಗಳೇ ಜಾರಿ ಗಣತಿ ವರದಿ ವಿರೋಧ ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗುತ್ತಿದೆ.