ಬೆಂಗಳೂರು: ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ವಸತಿ ಯೋಜನೆ ಗುತ್ತಿಗೆ ನೀಡುವ ಸಲುವಾಗಿ ರಾಮಲಿಂಗಂ ಕನಸ್ಟ್ರಕ್ಷನ್ ಕಂಪೆನಿಯಿಂದ ಕೋಟ್ಯಂತರ ರು.ಗಳ ಅವ್ಯವಹಾರದ ಆರೋಪದಲ್ಲಿ ಏಳನೇ ಆರೋಪಿಯಾಗಿದ್ದ ಐಎಎಸ್ ಅಧಿಕಾರಿ ಡಾ. ಜಿ ಸಿ ಪ್ರಕಾಶ್ ಅವರಿಗೆ ವಿಶೇಷ ನ್ಯಾಯಾಲಯವು ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಮೈಸೂರಿನ ಪ್ರಾದೇಶಿಕ ಆಯುಕ್ತರಾಗಿರುವ ಪ್ರಕಾಶ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಧೀಶ ಬಿ.ಜಯಂತ ಕುಮಾರ್ ಅವರು ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಒಂದು ಲಕ್ಷ ರು.ಗಳ ವೈಯಕ್ತಿಕ ಬಾಂಡ್, ಒಬ್ಬರ ಭದ್ರತೆ ನೀಡಬೇಕು. ಅಲ್ಲದೆ, ಮುಂದಿನ ಮೂರು ವಾರಗಳಲ್ಲಿ ಅರ್ಜಿದಾರರು ತನಿಖಾಧಿಕಾರಿಯ ಮುಂದೆ ಹಾಜರಾಗಬೇಕು. ಅರ್ಜಿದಾರರು ನಾಪತ್ತೆಯಾಗುವಂತಿಲ್ಲ. ಸಾಕ್ಷ್ಯ ನಾಶ ಮಾಡುವಂತಿಲ್ಲ ಅಥವಾ ಸಾಕ್ಷಿಗಳಿಗೆ ಬೆದರಿಕೆ ಹಾಕುವಂತಿಲ್ಲ. ಅಗತ್ಯವೆನಿಸಿದಾಗ ತನಿಖಾಧಿಕಾರಿಯ ಮುಂದೆ ಹಾಜರಾಗಬೇಕು. ಅರ್ಜಿದಾರರು ತಿಂಗಳಲ್ಲಿ ಒಂದು ಭಾನುವಾರ ತನಿಖಾಧಿಕಾರಿಯ ಮುಂದೆ ಹಾಜರಾಗಿ, ಸಹಿ ಹಾಕಬೇಕು ಎಂಬ ಷರತ್ತುಗಳನ್ನು ವಿಧಿಸಲಾಗಿದೆ.