ಬೆಂಗಳೂರು : ಅಕ್ಟೋಬರ್ 1 ರಿಂದ ರಾಜ್ಯಾದ್ಯಂತ ಭೂಮಿಯ ಪರಿಷ್ಕೃತ ನೂತನ “ಮಾರ್ಗಸೂಚಿ ದರ” (ಗೈಡೆನ್ಸ್ ವ್ಯಾಲ್ಯೂ) ಜಾರಿಯಾಗಲಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಇಂದು ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ನೋಂದಣಿ ಇಲಾಖೆ ಕಾನೂನಿನ ಪ್ರಕಾರ, ಪ್ರತಿ ವರ್ಷ ಮಾರ್ಗಸೂಚಿ ದರ ಪರಿಷ್ಕರಣೆಯಾಗಬೇಕು. ಆದರೆ, ಕಳೆದ ಐದು ವರ್ಷದಿಂದ ಪರಿಷ್ಕರಣೆಯಾಗಿಲ್ಲ. ಇದರಿಂದ ಹಲವು ಕಡೆಗಳಲ್ಲಿ ಭೂಮಿ ಮಾರಾಟಗಾರರು ಮತ್ತು ರೈತರಿಗೆ ಅನ್ಯಾಯವಾಗಿದ್ದರೆ, ಇದು ಕಪ್ಪು ಹಣ ವಹಿವಾಟಿಗೂ ಕಾರಣವಾಗಿದೆ. ಹೀಗಾಗಿ ನೂತನ ಮಾರ್ಗಸೂಚಿ ದರ ಜಾರಿಯಾಗಲಿದೆ ಎಂದು ತಿಳಿಸಿದರು.
ಮಾರ್ಗಸೂಚಿ ದರ ಯಾವ ಯಾವ ಪ್ರದೇಶಗಳಲ್ಲಿ ಎಷ್ಟು ಹೆಚ್ಚಳ ಮಾಡಲಾಗಿದೆ. ಈ ಪರಿಷ್ಕರಣೆಗೆ ಯಾವ ನಿಯಮಗಳನ್ನು ಅನ್ವಯಿಸಲಾಗಿದೆ ಎಂಬ ಮಾಹಿತಿ ನೀಡಿದ ಸಚಿವರು, “ಮಾರುಕಟ್ಟೆ ದರಕ್ಕೂ ಮಾರ್ಗಸೂಚಿ ದರಕ್ಕೂ ಸಾಮ್ಯತೆ ಇರುವ ಪ್ರದೇಶಗಳಲ್ಲಿ ಮಾರ್ಗಸೂಚಿ ದರವನ್ನು ಶೇ.10 ರಷ್ಟು ಏರಿಕೆ ಮಾಡಲಾಗಿದೆ. ಮಾರ್ಗಸೂಚಿ ದರಕ್ಕಿಂತ ಮಾರುಕಟ್ಟೆ ದರ 200 ಪಟ್ಟು ಹೆಚ್ಚಿರುವ ಪ್ರದೇಶಗಳಲ್ಲಿ ಪರಿಷ್ಕೃತ ದರವನ್ನು ಶೇ. 20 ರಿಂದ ಶೇ.25 ರಷ್ಟು ಹೆಚ್ಚಿಸಲಾಗಿದೆ. ಇನ್ನು ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಭಾಗದಲ್ಲಿ ಮಾರುಕಟ್ಟೆ ದರ ಮಾರ್ಗಸೂಚಿ ದರಕ್ಕಿಂತ 500 ಪಟ್ಟು ಹೆಚ್ಚಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಭೂಮಿಗಳಿಗೆ ಮಾರ್ಗಸೂಚಿ ದರ 5 ರಿಂದ 10 ಲಕ್ಷ ಇದ್ದರೆ, ಮಾರುಕಟ್ಟೆ ದರ 10 ಕೋಟಿಗೂ ಅಧಿಕವಿದೆ. ಇಂತಹ ಪ್ರದೇಶಗಳಲ್ಲಿ ನೂತನ ಮಾರ್ಗಸೂಚಿ ದರವನ್ನು ಶೇ. 50ರಷ್ಟು ಹೆಚ್ಚಿಸಲಾಗಿದೆ ಎಂದರು.
ಮಾರುಕಟ್ಟೆ ದರಕ್ಕಿಂತ ಮಾರ್ಗಸೂಚಿ ದರ ಹೆಚ್ಚಾಗಿದ್ದರೆ, ಅಂತಹ ಭಾಗದಲ್ಲಿ ಮಾರ್ಗಸೂಚಿ ದರವನ್ನು ಮತ್ತಷ್ಟು ಕಡಿಮೆ ಮಾಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಮಾರ್ಗಸೂಚಿ ದರ ಶೇ.0 ಯಿಂದ ಶೇ.50ರ ವರೆಗೆ ಪ್ರತಿಯೊಂದು ಪ್ರದೇಶಕ್ಕೂ ಸಂಬಂಧಿಸಿದಂತೆ ಪ್ರಕರಣದಿಂದ ಪ್ರಕರಣಕ್ಕೆ ಹೆಚ್ಚಾಗಲಿದೆ. ಅಕ್ಟೋಬರ್ 1 ರಂದು ಮೊದಲ ಹಂತವಾಗಿ ಬೆಂಗಳೂರಿನ ಪರಿಷ್ಕೃತ ದರ ಜಾರಿಯಾಗಲಿದೆ. ಉಳಿದಂತೆ ಪ್ರತಿ ಜಿಲ್ಲೆಯಲ್ಲಿ ಅಲ್ಲಿನ “ಉಪ ಸಮಿತಿ” ಜೊತೆ ಚರ್ಚಿಸಿ ನೂತನ ಮಾರ್ಗಸೂಚಿ ದರವನ್ನು ಹಂತಹಂತವಾಗಿ ಜಾರಿಗೊಳಿಸಲಿದೆ. ಒಟ್ಟಾರೆಯಾಗಿ ಪರಿಷ್ಕೃತ ಮಾರ್ಗಸೂಚಿ ದರ ಸರಾಸರಿ ಶೇ.25 ರಿಂದ ಶೇ.30 ರಷ್ಟು ಹೆಚ್ಚಾಗಲಿದೆ” ಎಂದು ಸಚಿವರು ಮಾಹಿತಿ ನೀಡಿದರು.