ಬೆಂಗಳೂರು: ಸಿಲಿಕಾನ್ ಸಿಟಿ ಮಾತ್ರವಲ್ಲದೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 15 ದಿನಗಳ ಕಾಲ ಲಾಕ್‌ಡೌನ್ ವಿಧಿಸುವ ಅಗತ್ಯವಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ.
ಬೆಂಗಳೂರು ಮಾತ್ರವಲ್ಲದೆ ಬೇರೆ ಜಿಲ್ಲೆಗಳಲ್ಲೂ 15 ದಿನ ಲಾಕ್‌ಡೌನ್ ಮಾಡಿ: ಖಂಡ್ರೆ - Eshwar khandre tweet about covid lockdown
ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ರಾಜ್ಯದಲ್ಲಿ ಮತ್ತೊಮ್ಮೆ ಕನಿಷ್ಠ 15 ದಿನಗಳ ಕಾಲ ಕಠಿಣ ಲಾಕ್‌ಡೌನ್ ವಿಧಿಸಿ, ಪರಿಸ್ಥಿತಿ ನಿಯಂತ್ರಣಕ್ಕೆ ತನ್ನಿ ಎಂದು ಸಿಎಂಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಆಗ್ರಹಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಮುಖ್ಯಮಂತ್ರಿಗಳೇ, ಕೇವಲ ಬೆಂಗಳೂರು ಅಷ್ಟೇ ಅಲ್ಲ ರಾಜ್ಯದ ಗಡಿ ಭಾಗದಲ್ಲಿ ವಿಪರೀತ ಸೋಂಕಿತ ಪ್ರಕರಣಗಳು, ಸಾವು ಹೆಚ್ಚಾಗಿ ಕಂಡು ಬರುತ್ತಿದೆ. ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ ಜಿಲ್ಲೆಗಳಲ್ಲಿ ಪರಿಸ್ಥಿತಿ ಕೈ ಮೀರುತ್ತಿದೆ. ಹೀಗಾಗಿ ರಾಜ್ಯದಲ್ಲಿ ಮತ್ತೊಮ್ಮೆ ಕನಿಷ್ಠ 15 ದಿನಗಳ ಕಾಲ ಕಠಿಣ ಲಾಕ್‌ಡೌನ್ ವಿಧಿಸಿ, ಪರಿಸ್ಥಿತಿ ನಿಯಂತ್ರಣಕ್ಕೆ ತನ್ನಿ. ಸರ್ಕಾರ ಈ ಲಾಕ್‌ಡೌನ್ ಅವಧಿಯಲ್ಲಿ ಹಿಂದಿನ ಲೋಪದೋಷ ಸರಿಪಡಿಸಿಕೊಂಡು ಮುಂದೆ ಸಮರ್ಥವಾಗಿ ಸೋಂಕು ನಿವಾರಿಸಲು ಎಲ್ಲಾ ರೀತಿಯ ತಯಾರಿ ನಡೆಸಲಿ ಎಂದು ವಿನಂತಿಸುತ್ತೇನೆ ಎಂದಿದ್ದಾರೆ.
ರಾಜ್ಯ ಸರ್ಕಾರ ಬುಧವಾರದಿಂದ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಯಲ್ಲಿ ಲಾಕ್‌ಡೌನ್ ಜಾರಿಗೊಳಿಸಿ ಆದೇಶ ಹೊರಡಿಸಿದ್ದು, ಕೊರೊನಾ ನಿಯಂತ್ರಣಕ್ಕೆ ಮುಂದಾಗಿದೆ. ಆದರೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇದೇ ಪರಿಸ್ಥಿತಿ ಉಂಟಾಗುತ್ತಿದ್ದು, ಇಲ್ಲಿ ಸಹ ಲಾಕ್‌ಡೌನ್ ಜಾರಿಗೊಳಿಸಿ ಮಹಾಮಾರಿ ಸೋಂಕು ಹರಡುವುದನ್ನು ತಡೆಯಲು ಸಾಧ್ಯ ಎಂದು ಈಶ್ವರ್ ಖಂಡ್ರೆ ಸಲಹೆ ನೀಡಿದ್ದಾರೆ.
TAGGED:
khandre tweet