ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವ ಕುರಿತಂತೆ ಹಿಂದುಳಿದ ವರ್ಗಗಳ ಆಯೋಗ ಸಲ್ಲಿಸಿರುವ ಮಧ್ಯಂತರ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲು ಸರ್ಕಾರ ಆಕ್ಷೇಪ ವ್ಯಕ್ತ ಪಡಿಸಿದೆ. ಪಂಚಮಸಾಲಿ ಲಿಂಗಾಯತರಿಗೆ 2ಎ ಮೀಸಲಾತಿ ನೀಡುವ ಸಂಬಂಧ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸಲ್ಲಿಸಿರುವ ವರದಿಯನ್ನು ಕಾನೂನು ಬಾಹಿರ ಎಂದು ಘೋಷಿಸುವಂತೆ ಕೋರಿ ಬೆಂಗಳೂರಿನ ಡಿ.ಜಿ ರಾಘವೇಂದ್ರ ಎಂಬುವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.
ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಮೊಹಮ್ಮದ್ ನವಾಜ್ ಮತ್ತು ನ್ಯಾ. ಶಿವಶಂಕರೇಗೌಡ ಅವರಿದ್ದ ವಿಭಾಗೀಯ ಪೀಠ ಗುರುವಾರ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಸರ್ಕಾರದ ಪರವಾಗಿ ಹಾಜರಾಗಿದ್ದ ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವದಗಿ, ಹಿಂದುಳಿದ ವರ್ಗಗಳ ಆಯೋಗದಿಂದ ಸರ್ಕಾರಕ್ಕೆ ಮುಚ್ಚಿದ ಲಕೋಟೆಯಲ್ಲಿ ಮಧ್ಯಂತರ ವರದಿ ಸಲ್ಲಿಕೆಯಾಗಿದೆ. ಸರ್ಕಾರ ಈ ವರದಿಯನ್ನು ಪರಿಶೀಲನೆ ನಡೆಸುವ ಹಂತದಲ್ಲಿದೆ. ಆದರೆ, ಈವರೆಗೂ ಯಾವುದೆ ಕ್ರಮ ಕೈಗೊಂಡಿಲ್ಲ. ಜತೆಗೆ, ಇದು ಅತ್ಯಂತ ಸೂಕ್ಷ್ಮ ವಿಚಾರವಾಗಿದ್ದು, ನ್ಯಾಯಾಲಯಕ್ಕೆ ಸಲ್ಲಿಸುವುದಕ್ಕೆ ಅಗತ್ಯವಿಲ್ಲ ಎಂದು ವಿವರಿಸಿದರು. ಅಲ್ಲದೆ, ಈ ಸಂಬಂಧ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡಬೇಕು ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದರು.
ಅರ್ಜಿದಾರರ ಪರ ವಕೀಲ ಮಂಜುನಾಥ್, ಹಿಂದುಳಿದ ವರ್ಗಗಳ ಆಯೋಗದಿಂದ ಮಧ್ಯಂತರ ವರದಿ ಸಲ್ಲಿಕೆಯಾಗಿದೆ. ಈ ಸಂಬಂಧ ಮಾಧ್ಯಮಗಳಿಗೆ ಶಾಸಕರೊಬ್ಬರು ತಿಳಿಸಿದ್ದು, 2ಎ ಅಡಿಯಲ್ಲಿ ಮೀಸಲಾತಿ ನೀಡುವುದು ಖಚಿತ ಎಂದು ತಿಳಿಸಿದ್ದಾರೆ. ಹೀಗಾಗಿ ವರದಿಯನ್ನು ನ್ಯಾಯಾಲಯದ ಮುಂದೆ ಮಂಡಿಸುವುದಕ್ಕೆ ಸೂಚನೆ ನೀಡಬೇಕು ಎಂದು ನ್ಯಾಯಪೀಠಕ್ಕೆ ವಿವರಿಸಿದರು. ವಾದ ಆಲಿಸಿದ ನ್ಯಾಯಪೀಠ, ವಿಚಾರಣೆಯನ್ನು ಜನವರಿ ಮೊದಲ ವಾರಕ್ಕೆ ಮುಂದೂಡಿತು.
ಅರ್ಜಿಯಲ್ಲಿ ಏನಿದೆ?ಹಿಂದುಳಿದ ವರ್ಗಗಳ ಆಯೋಗ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವ ಬೇಡಿಕೆಯನ್ನು 2000ರಲ್ಲಿಯೇ ತಿರಸ್ಕರಿಸಿದ್ದು, ಪಂಚಮಸಾಲಿ ಉಪ ಜಾತಿಯನ್ನು 2ಎಗೆ ಸೇರಿಸಲು ನಿರಾಕರಿಸಿದೆ. ಈಗ ಹಿಂದುಳಿದ ವರ್ಗಗಳ ಆಯೋಗದ ಮಧ್ಯಂತರ ವರದಿ ಆಧರಿಸಿದ 2ಎ ಅಡಿಯಲ್ಲಿ ಮೀಸಲಾತಿ ನೀಡುವ ಕ್ರಮಕ್ಕೆ ಮುಂದಾಗಿದ್ದು, ಇದು ಕಾನೂನುಬಾಹಿರ. ಅಲ್ಲದೆ, ಹಿಂದುಳಿದ ವರ್ಗಗಳ ಆಯೋಗದ ಇತ್ತೀಚೆಗೆ ಸರ್ಕಾರಕ್ಕೆ ಸಲ್ಲಿಸಿರುವ ಮಧ್ಯಂತರ ವರದಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಸರ್ಕಾರಕ್ಕೆ ಸೂಚನೆ ನೀಡಬೇಕು ಎಂದು ಅರ್ಜಿಯಲ್ಲಿ ಕೋರಿದ್ದರು.