ಬೆಂಗಳೂರು :ನಗರದಲ್ಲಿ ಹೆಚ್ಚುತ್ತಿರುವ ಶಬ್ದ ಮಾಲಿನ್ಯ ನಿಯಂತ್ರಣಕ್ಕೆ ಕೋರಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
ಈ ಕುರಿತು ನಗರದ ಗಿರೀಶ್ ಭಾರದ್ವಾಜ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಬಳಿಕ ಪ್ರತಿವಾದಿಗಳಾದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಗೃಹ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ರಾಜ್ಯ ಪೊಲೀಸ್ ಮಹಾನಿರ್ದೇಶಕರು, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಹಾಗೂ ನಗರ ಪೊಲೀಸ್ ಆಯುಕ್ತರಿಗೆ ನೋಟಿಸ್ ಜಾರಿ ಮಾಡಿತು. ಹಾಗೆಯೇ ಪ್ರತಿವಾದಿಗಳು ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ, ವಿಚಾರಣೆಯನ್ನು 2021ರ ಜ.11ಕ್ಕೆ ಮುಂದೂಡಿತು.
ಇದನ್ನೂ ಓದಿ :ರಾಜ್ಯದಲ್ಲಿಂದು 998 ಮಂದಿಗೆ ಸೋಂಕು ದೃಢ: 11 ಸೋಂಕಿತರು ಕೋವಿಡ್ಗೆ ಬಲಿ
ಅರ್ಜಿದಾರರ ಕೋರಿಕೆ :
ರಾಜಕೀಯ ಪಕ್ಷಗಳು, ದೇವಸ್ಥಾನಗಳು, ಮಸೀದಿಗಳು, ಚರ್ಚ್ಗಳು, ಗುರುದ್ವಾರಗಳು ಸೇರಿದಂತೆ ಎಲ್ಲಾ ಧಾರ್ಮಿಕ ಕೇಂದ್ರಗಳಲ್ಲಿ ಬಳಸುತ್ತಿರುವ ಲೌಡ್ ಸ್ಪೀಕರ್ಗಳು ಶಬ್ದ ಮಾಲಿನ್ಯ ಉಂಟು ಮಾಡುತ್ತಿವೆ. ಇದಕ್ಕೆ ವಾಹನಗಳಲ್ಲಿ ಬಳಕೆ ಮಾಡುತ್ತಿರುವ ಕರ್ಕಶ ಸದ್ದು ಮತ್ತು ಕಾರ್ಖಾನೆಗಳು ಕೂಡ ಪೂರಕವಾಗಿವೆ.
ಹೆಚ್ಚುತ್ತಿರುವ ಶಬ್ದ ಮಾಲಿನ್ಯದಿಂದಾಗಿ ಜನರ ಆರೋಗ್ಯ ಹಾಳಾಗುತ್ತಿದ್ದು, ಮಾನಸಿಕ ಮತ್ತು ದೈಹಿಕ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಸೃಷ್ಟಿಸುತ್ತಿರುವ ಶಬ್ದ ಮಾಲಿನ್ಯವು ಸಂವಿಧಾನದತ್ತವಾದ ಜೀವಿಸುವ ಹಕ್ಕನ್ನು ಕಸಿದುಕೊಳ್ಳುತ್ತಿದೆ. ಶಬ್ದ ಮಾಲಿನ್ಯ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿರುವ ನಿರ್ದೇಶಗಳನ್ನು ರಾಜ್ಯ ಸರ್ಕಾರ ಪಾಲಿಸುತ್ತಿಲ್ಲ. ಹಾಗೆಯೇ ಶಬ್ದ ಮಾಲಿನ್ಯ ನಿಯಂತ್ರಣ ಕಾಯ್ದೆಯನ್ನೂ ಪರಿಣಾಮಕಾರಿಯಾಗಿ ಜಾರಿ ಮಾಡಿಲ್ಲ. ಇದರಿಂದಾಗಿ ಅತಿ ಹೆಚ್ಚು ಶಬ್ದ ಉಂಟುಮಾಡುವ ಲೌಡ್ ಸ್ಪೀಕರ್ ಬಳಕೆಗೆ ನಿಯಂತ್ರಣವಿಲ್ಲದಂತಾಗಿದೆ. ಆದ್ದರಿಂದ ಕಾಯ್ದೆ ಮತ್ತು ಸುಪ್ರೀಂ ಕೋರ್ಟ್ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ. ಅರ್ಜಿದಾರರ ಪರ ವಕೀಲ ಬಿ.ಎನ್. ಜಗದೀಶ್ ವಾದ ಮಂಡಿಸಿದರು.