ಕರ್ನಾಟಕ

karnataka

ETV Bharat / state

IBPS Exam: ಬ್ಯಾಂಕಿಂಗ್ ಪರೀಕ್ಷೆಯಲ್ಲಿ ಕನ್ನಡಿಗರಿಗೆ ಅನ್ಯಾಯ, ಕೇಂದ್ರದ ದ್ವಂದ್ವ ನೀತಿ ಖಂಡನೀಯ: ಕಸಾಪ ಅಧ್ಯಕ್ಷ ಡಾ. ಮಹೇಶ ಜೋಶಿ

ಬ್ಯಾಂಕಿಂಗ್ ಪರೀಕ್ಷೆಯಲ್ಲಿ ಕನ್ನಡ ಭಾಷೆಗೆ ಅವಕಾಶ ಕಲ್ಪಿಸದೇ ಇರುವುದು ಖಂಡನೀಯ ಎಂದು ಕಸಾಪ ಅಧ್ಯಕ್ಷ ಡಾ. ಮಹೇಶ ಜೋಶಿ ವಾಗ್ದಾಳಿ ನಡೆಸಿದ್ದಾರೆ.

Etv Bharat
Etv Bharat

By ETV Bharat Karnataka Team

Published : Aug 23, 2023, 7:34 PM IST

ಬೆಂಗಳೂರು :ಪರಿಷತ್ತು ಸಮಸ್ತ ಕನ್ನಡಿಗರ ಪರವಾಗಿ ಮಾಡಿರುವ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕನ್ನಡಿಗರಿಗೆ ಅವಕಾಶ ನೀಡಬೇಕು ಎನ್ನುವ ಬೇಡಿಕೆಯ ನಂತರವೂ ಕೇಂದ್ರ ಸರ್ಕಾರ ಐಬಿಪಿಎಸ್‌ ಪರೀಕ್ಷೆಯನ್ನು ಕನ್ನಡದಲ್ಲಿ ಬರೆಯಲು ಅವಕಾಶ ನೀಡಿಲ್ಲ ಎನ್ನುವುದು ಖೇದದ ಸಂಗತಿ. ಇದನ್ನು ಕನ್ನಡ ಸಾಹಿತ್ಯ ಪರಿಷತ್ತು ಸಹಿಸುವುದಿಲ್ಲ ಎಂದು ಕಸಾಪ ಅಧ್ಯಕ್ಷ ನಾಡೋಜ ಡಾ.ಮಹೇಶ ಜೋಶಿ ಕಿಡಿಕಾರಿದ್ದಾರೆ.

ಈ ಕುರಿತು ಪ್ರಕಟಣೆ ಹೊರಡಿಸಿರುವ ಅವರು, ಬ್ಯಾಂಕಿಂಗ್ ಪರೀಕ್ಷೆಯಲ್ಲಿ ಕನ್ನಡ ಭಾಷೆಗೆ ಅವಕಾಶ ಕಲ್ಪಿಸದೇ ಇರುವುದು ಸಮಸ್ತ ಕನ್ನಡ ನಾಡಿಗೆ ಮಾಡುತ್ತಿರುವ ಅವಮಾನ. ಕನ್ನಡಿಗರ ಬೇಡಿಕೆಗೆ ಕವಡೆ ಕಾಸಿನ ಕಿಮ್ಮತ್ತು ನೀಡದಿರುವ ಕೇಂದ್ರ ಸರ್ಕಾರದ ಅಡಿಯಲ್ಲಿ ಇರುವ ಐಬಿಪಿಎಸ್‌ (ಇನ್ಸ್ಟಿಟ್ಯೂಟ್‌ ಫಾರ್‌ ಬ್ಯಾಂಕಿಂಗ್‌ ಝೋನಲ್‌ ಸೆಲೆಕ್ಷನ್‌) ಪರೀಕ್ಷೆಯನ್ನು ಹಿಂದಿ ಅಥವಾ ಇಂಗ್ಲಿಷ್‌ ಭಾಷೆಯಲ್ಲಿ ನಡೆಸುವ ಮೂಲಕ ಮಲತಾಯಿ ಧೋರಣೆ ತೋರುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕೇವಲ ಹಿಂದಿ ಅಥವಾ ಇಂಗ್ಲಿಷ್ ಭಾಷೆಗಳಲ್ಲಿ ನಡೆಸುವ ಮೂಲಕ ಕನ್ನಡ ಸೇರಿದಂತೆ ದೇಶದ ಇತರ ಎಲ್ಲಾ ಪ್ರಾದೇಶಿಕ ಭಾಷಿಕರಿಗೆ ಅನ್ಯಾಯವಾಗುತ್ತಿದೆ. ಕೇವಲ ಹಿಂದಿ ಅಥವಾ ಇಂಗ್ಲಿಷ್​ ಭಾಷೆಯಲ್ಲಿ ಬ್ಯಾಂಕಿಂಗ್‌ ಪರೀಕ್ಷೆಯನ್ನು ನಡೆಸುವುದರಿಂದ ಸಾಮಾನ್ಯ ಜನರು ಅವಕಾಶ ವಂಚಿತರಾಗುತ್ತಿದ್ದಾರೆ. ಈ ಕುರಿತು ಕನ್ನಡ ಸಾಹಿತ್ಯ ಪರಿಷತ್ತು ಕೇಂದ್ರ ಸರ್ಕಾರ ಸೇರಿದಂತೆ ಇತರ ನೇಮಕಾತಿ ಸಂಸ್ಥೆಗಳಿಗೆ ಪ್ರಾದೇಶಿಕ ಭಾಷೆಗಳ ಮಹತ್ವ ಮತ್ತು ಅವುಗಳನ್ನು ಕಡೆಗಣಿಸದೇ ಇರುವಂತೆ ಎಚ್ಚರಿಕೆಯನ್ನು ನೀಡುತ್ತಲೇ ಬಂದಿದೆ. ಆದರೂ ಭಾಷಾ ಗೊಂದಲಕ್ಕೆ ಕಾರಣವಾಗುವಂತೆ ರಾಷ್ಟ್ರೀಯ ಪರೀಕ್ಷೆಯಲ್ಲಿ ಹಿಂದಿಯೇತರ ಭಾಷೆಗಳ ಕಡೆಗಣನೆ ಮಾಡಲಾಗುತ್ತಿದೆ ಎಂದಿದ್ದಾರೆ.

ದೇಶದಲ್ಲಿರುವ ಹಿಂದಿ ಭಾಷಿಗರು ಹಿಂದಿಯಲ್ಲೇ ಪರೀಕ್ಷೆ ತೆಗೆದುಕೊಳ್ಳಬಹುದಾದರೆ, ಕನ್ನಡಿಗರು ಹಾಗೂ ದೇಶದ ಇನ್ನಿತರ ಮಾತೃಭಾಷಿಗರಿಗೂ ಅವರದೇ ಭಾಷೆಯಲ್ಲಿ ಪರೀಕ್ಷೆ ಬರೆಯುವ ಅವಕಾಶ ಇರಬೇಕು. ತಮ್ಮ ಮಾತೃಭಾಷೆಯನ್ನು ಬಿಟ್ಟು ಇಂಗ್ಲಿಷ್ ಭಾಷೆಯಲ್ಲಿ ಪರೀಕ್ಷೆ ಬರೆಯುವ ಅನಿವಾರ್ಯ ವಾತಾವರಣ ತಂದಿರುವುದು ಖಂಡನೀಯ. ಹಿಂದಿ ಹೇರಿಕೆ ಹಾಗೂ ಹಿಂದಿಯೇತರರನ್ನು ದ್ವಿತೀಯ ದರ್ಜೆಯ ನಾಗರಿಕರಂತೆ ಕನಿಷ್ಠ ದೃಷ್ಟಿಯಿಂದ ಕಾಣುವ ಮನಸ್ಸುಗಳು ಇಂತಹ ಕೃತ್ಯಕ್ಕೆ ಕೈ ಹಾಕುತ್ತಿವೆ. ಕರ್ನಾಟಕದಲ್ಲಿನ ಬ್ಯಾಂಕುಗಳಲ್ಲಿ ಕನ್ನಡಕ್ಕೆ ಅವಕಾಶ ಇಲ್ಲದೆ, ಇತರ ಭಾಷೆಗೆ ಅವಕಾಶವಿದೆ ಎನ್ನುವುದು ಸಹಿಸಲಾರದ ಸಂಗತಿಯಾಗಿದೆ.

ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿರುವ 953 ಗುಮಾಸ್ತ ಹುದ್ದೆಗಳಿಗೆ ಮತ್ತು ಬ್ಯಾಂಕಿಂಗ್‌ ಸಿಬ್ಬಂದಿ ಆಯ್ಕೆಗೆ ಐಬಿಪಿಎಸ್‌ ಅರ್ಜಿ ಆಹ್ವಾನಿಸಿದ್ದನ್ನು ಪರಿಷತ್ತು ಸ್ವಾಗತಿಸುತ್ತದೆ. ಆದರೆ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸದೇ ಇರುವುದನ್ನು ನೇರವಾಗಿ ಖಂಡಿಸುತ್ತದೆ. ಕನ್ನಡಕ್ಕೆ ಕಿಮ್ಮತ್ತು ಕೊಡದ ಕೇಂದ್ರ ಸರ್ಕಾರಕ್ಕೆ ಈಗಾಗಲೇ ಪರಿಷತ್ತು ಕನ್ನಡ ಭಾಷೆಯ ಮಹತ್ವ, ಭಾಷೆಯ ಇತಿಹಾಸವನ್ನು ತಿಳಿಸುವ ಕೆಲಸ ಮಾಡಿದೆ. ಜೊತೆಗೆ ಕೇಂದ್ರದ ಅಧೀನದಲ್ಲಿ ಬರುವ ಬ್ಯಾಂಕಿಂಗ್‌ ಸೇರಿದಂತೆ ಇತರ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕನ್ನಡದಲ್ಲಿ ಉತ್ತರ ಬರೆಯಲು ಅವಕಾಶ ಕಲ್ಪಿಸಬೇಕೆಂದು ಬೇಡಿಕೆಯನ್ನು ಮುಂದಿಡಲಾಗಿತ್ತು ಎಂದು ಡಾ. ಮಹೇಶ್​ ಜೋಶಿ ಹೇಳಿದ್ದಾರೆ.

ಕಾನೂನು ಹೋರಾಟಕ್ಕೆ ಚಿಂತನೆ : ಕೇಂದ್ರ ಸರ್ಕಾರದ ಮಲತಾಯಿ ಧೋರಣೆಯನ್ನು ಸಾಕಷ್ಟು ಬಾರಿ ಕನ್ನಡ ಸಾಹಿತ್ಯ ಪರಿಷತ್ತು ಪ್ರಶ್ನಿಸುತ್ತಲೇ ಬಂದಿದೆ. ಆದರೂ ದಪ್ಪ ಚರ್ಮದ ಅಧಿಕಾರಿಗಳಿಗೆ ಕನ್ನಡಿಗರ ನೋವು ಅರ್ಥವಾಗುವುದಿಲ್ಲ. ಕನ್ನಡ ಸಾಹಿತ್ಯ ಪರಿಷತ್ತು ಈ ಹಿಂದೆ ಕೇಂದ್ರ ಸಚಿವರುಗಳಾದ ನಿರ್ಮಲಾ ಸೀತಾರಾಮನ್, ಪ್ರಹ್ಲಾದ್ ಜೋಶಿ ಸೇರಿದಂತೆ ಇತರರಿಗೆ ಪತ್ರ ಬರೆಯುವ ಮೂಲಕ ಕನ್ನಡಿಗರಿಗೆ ಬ್ಯಾಂಕಿಂಗ್‌ ಪರೀಕ್ಷೆಗಳನ್ನು ಕನ್ನಡದಲ್ಲೂ ಬರೆಯಲು ಅವಕಾಶ ನೀಡಲು ಕೋರಿತ್ತು. ಆಗ ಕನ್ನಡಿಗರಿಗೆ ಅನ್ಯಾಯವಾಗದಂತೆ ನೋಡಿಕೊಳ್ಳುವ ಭರವಸೆಯನ್ನು ಪರಿಷತ್ತಿಗೆ ನೀಡಲಾಗಿತ್ತು. ಆದರೆ ಐಬಿಪಿಎಸ್‌ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡದಿರುವುದು ಅನ್ಯಾಯ. ಅದಕ್ಕೆ ಕನ್ನಡ ಸಾಹಿತ್ಯ ಪರಿಷತ್ತು ಕಾನೂನು ಹೋರಾಟಕ್ಕೆ ಚಿಂತನೆ ಮಾಡುತ್ತಿದೆ ಎಂದು ಡಾ. ಮಹೇಶ ಜೋಶಿ ತಿಳಿಸಿದ್ದಾರೆ.

ಇದನ್ನೂ ಓದಿ :ರಾಮಮೂರ್ತಿಯವರ ಪತ್ನಿ ಕಮಲಮ್ಮನವರನ್ನು ಸಾಂಸ್ಕೃತಿಕ ರೂವಾರಿಯಾಗಿ ನೇಮಿಸಬೇಕು: ಮುಖ್ಯಮಂತ್ರಿ ಚಂದ್ರು

ABOUT THE AUTHOR

...view details