ಬೆಂಗಳೂರು : ರಾಜ್ಯ ಸರ್ಕಾರದ ಮಹಾತ್ವಕಾಂಕ್ಷೆಯ ಯುವನಿಧಿ ಯೋಜನೆಗೆ ಅರ್ಹ ಫಲಾನುಭವಿಗಳ ಹೆಸರುಗಳನ್ನು ಸೇವಾ ಸಿಂಧು ಪೋರ್ಟಲ್ ಮೂಲಕ ನಿರೀಕ್ಷೆಯಂತೆ ನಿರುದ್ಯೋಗ ಪದವೀಧರ, ಡಿಪ್ಲೊಮಾ ನಿರುದ್ಯೋಗಿಗಳು ಹೆಸರು ನೋಂದಾಯಿಸಿಕೊಂಡಿಲ್ಲ. ಇದರ ಹಿನ್ನೆಲೆ ಜಾಗೃತಿ ಮೂಡಿಸಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಭಿವೃದ್ಧಿ ಹಾಗೂ ಜೀವನೋಪಾಯ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ವಿಕಾಸಸೌಧದಲ್ಲಿ ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾ ಅಧಿಕಾರಿಗಳೊಂದಿಗೆ ನಡೆಸಿದ ವಿಡಿಯೋ ಕಾನ್ಫರೆನ್ಸ್ ನಲ್ಲಿ ಸಚಿವರು ಮಾತನಾಡಿದರು. ಕೆಲವು ಜಿಲ್ಲೆಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಯುವನಿಧಿ ಯೋಜನೆಗೆ ನೋಂದಣಿ ಆಗದಿರುವುದಕ್ಕೆ ಅಧಿಕಾರಿಗಳಿಂದ ವಿವರಣೆ ಹಾಗೂ ರಾಜ್ಯದ ಎಲ್ಲಾ ಜಿಲ್ಲೆಗಳ ಅಂಕಿ- ಸಂಖ್ಯೆಯ ಮಾಹಿತಿ ಪಡೆದು, ಅಧಿಕಾರಿಗಳು ಹೆಚ್ಚು ಸಕ್ರಿಯರಾಗುವಂತೆ ತಿಳಿಸಿದರು.
ಪದವಿ ಕಾಲೇಜು, ಡಿಪ್ಲೊಮಾ, ಇಂಜಿನಿಯರಿಂಗ್, ವೈದ್ಯಕೀಯ ಕಾಲೇಜುಗಳ ಮುಖ್ಯಸ್ಥರು, ಪ್ರಾಂಶುಪಾಲರ ಜೊತೆಗೆ ಕೂಡಲೇ ಸಭೆ ನಡೆಸಿ, ಗರಿಷ್ಠ ಪ್ರಮಾಣದಲ್ಲಿ ನೋಂದಣಿ ಮಾಡಿಸಬೇಕು. ಸರ್ಕಾರದ ಈ ಯೋಜನೆ ಪರಿಣಾಮಕಾರಿ ಅನುಷ್ಠಾನವಾಗಲು ಶಕ್ತಿ ಮೀರಿ ಪ್ರಯತ್ನ ಮಾಡಬೇಕು. ನಗರಸಭೆ, ಪುರಸಭೆ, ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್, ಗ್ರಾಮ ಪಂಚಾಯತಿ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಮೂಲಕ ವ್ಯಾಪಕ ಪ್ರಚಾರ ನಡೆಸಬೇಕು. ಯೋಜನೆಯಿಂದ ಸಿಗುವ ಲಾಭದ ಬಗ್ಗೆ ಮನವರಿಕೆ ಮಾಡುವಂತೆ ಅಧಿಕಾರಿಗಳಿಗೆ ಸಚಿವರು ಸಲಹೆ ನೀಡಿದರು.