ಬೆಂಗಳೂರು: ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾಗಿ ಹೆಚ್ಚುವರಿ ಹೊಣೆ ಹೊಂದಿದ್ದ ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಮೋಹನ್ ಅವರನ್ನು ಅದೇ ಹುದ್ದೆಗೆ ನೇಮಕಗೊಳಿಸಿ ರಾಜ್ಯ ಸರ್ಕಾರ ಆದೇಶ ಪ್ರಕಟಿಸಿದೆ. ಪ್ರವೀಣ್ ಸೂದ್ರಿಂದ ತೆರವಾದ ಸ್ಥಾನಕ್ಕೆ ಅಲೋಕ್ ಮೋಹನ್ ಅವರನ್ನು ರಾಜ್ಯ ಸರ್ಕಾರ ಮೇ 21ರಂದು ನೇಮಕಗೊಳಿಸಿತ್ತು. ಅಗ್ನಿಶಾಮಕ ಮತ್ತು ತುರ್ತು ಸೇವೆ ಹಾಗೂ ಗೃಹರಕ್ಷಕ ದಳದ ಡಿಜಿಯಾಗಿದ್ದ ಅಲೋಕ್ ಮೋಹನ್ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾಗಿ ಹೆಚ್ಚುವರಿ ಹೊಣೆಗಾರಿಕೆ ಹೊತ್ತಿದ್ದರು.
ಪ್ರಸ್ತುತ ಅಗ್ನಿಶಾಮಕ ಮತ್ತು ತುರ್ತು ಸೇವೆ ಹಾಗೂ ಗೃಹರಕ್ಷಕ ದಳದ ಡಿಜಿ ಸ್ಥಾನದಿಂದ ಬಿಡುಗಡೆಗೊಳಿಸಿ, ರಾಜ್ಯ ಪೊಲೀಸ್ ಮಹಾ ನಿರ್ದೇಶಕ (ಡಿಜಿ & ಐಜಿಪಿ) ಸ್ಥಾನದಲ್ಲಿ ಮುಂದುವರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಪ್ರಕಟಿಸಿದೆ.
ಸೇವಾ ಹಿರಿತನದ ಆಧಾರದ ಮೇಲೆ 87ನೇ ಬ್ಯಾಚ್‌ನ ಅಧಿಕಾರಿ ಹಾಗೂ ರಾಜ್ಯ ಅಗ್ನಿಶಾಮಕ ದಳ ಮತ್ತು ಗೃಹ ರಕ್ಷಕದಳದ ಮುಖ್ಯಸ್ಥರಾಗಿದ್ದ ಅಲೋಕ್ ಮೋಹನ್ ಅವರನ್ನು ರಾಜ್ಯ ಪೊಲೀಸ್ ಡಿಜಿ ಮತ್ತು ಐಜಿಪಿಯಾಗಿ ಆಯ್ಕೆ ಮಾಡಲಾಗಿತ್ತು. ಮೇ 22 ರಂದು ಇವರು ಅಧಿಕಾರ ವಹಿಸಿಕೊಂಡಿದ್ದರು.
ಐಪಿಎಸ್ ಅಧಿಕಾರಿ ಅಲೋಕ್ ಮೋಹನ್ ಹಿನ್ನೆಲೆ :ಬಿಹಾರ ರಾಜ್ಯದ ಪಾಟ್ನಾ ಮೂಲದವರಾದ ಡಾ. ಅಲೋಕ್ ಮೋಹನ್, 1965ರ ಏಪ್ರಿಲ್ 18ರಂದು ಜನಿಸಿದರು. ಉತ್ತರಾಖಂಡದ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಎಂಎಸ್‌ಸಿ, ಭಾರತೀಯ ಆಂತರಿಕ ಭದ್ರತೆ ವಿಷಯದಲ್ಲಿ ಪಿಎಚ್‌ಡಿ ಪದವಿ ಪಡೆದುಕೊಂಡಿದ್ದಾರೆ.
ಕರ್ನಾಟಕದ ಕರಾವಳಿ, ಉತ್ತರ ಕರ್ನಾಟಕ ಭಾಗದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಅಲೋಕ್ ಮೋಹನ್, ಸಿಐಡಿ ಡಿಜಿಪಿ, ಬೆಂಗಳೂರು ಸಿಸಿಬಿಯ ಜಂಟಿ ಪೊಲೀಸ್ ಆಯುಕ್ತ, ಬಳಿಕ ಮಂಗಳೂರು ಪಶ್ಚಿಮ ವಲಯ ಐಜಿಪಿಯಾಗಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. ಎಡಿಜಿಪಿ ಆಡಳಿತ ಹಾಗೂ ಕಾರಾಗೃಹ ಮತ್ತು ಅಗ್ನಿಶಾಮಕ ದಳ ಡಿಜಿಪಿಯಾಗಿಯೂ ಕಾರ್ಯ ನಿರ್ವಹಿಸಿದ್ದರು.
ಈ ಹಿಂದೆ ರಾಜ್ಯ ಪೊಲೀಸ್ ಮುಖ್ಯಸ್ಥರಾಗಿದ್ದ ಪ್ರವೀಣ್ ಸೂದ್ ಅವರು ಕೇಂದ್ರೀಯ ತನಿಖಾ ದಳದ (ಸಿಬಿಐ) ನಿರ್ದೇಶಕರಾಗಿ ನೇಮಕಗೊಂಡ ಬಳಿಕ ರಾಜ್ಯ ಸರ್ಕಾರ ಹಿರಿಯ ಐಪಿಎಸ್ ಅಧಿಕಾರಿಯಾಗಿರುವ ಡಾ.ಅಲೋಕ್ ಮೋಹನ್ ಅವರಿಗೆ ಹೆಚ್ಚುವರಿ ಹೊಣೆಯಾಗಿ ರಾಜ್ಯ ಪೊಲೀಸ್ ಮುಖ್ಯಸ್ಥರಾಗಿ ನೇಮಕ ಮಾಡಿತ್ತು. ಇದೀಗ ಅದೇ ಹುದ್ದೆಯನ್ನು ಮುಂದುವರೆಸಿ ರಾಜ್ಯ ಸರ್ಕಾರ ಆದೇಶಿಸಿದೆ.
ಇದನ್ನೂ ಓದಿ :ಕುಮಾರಸ್ವಾಮಿ ಹೇಳಿದ್ದಕ್ಕೆಲ್ಲಾ ಉತ್ತರ ಕೊಡಲು ಸಾಧ್ಯವಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್