ಬೆಂಗಳೂರು :ಬಿಜೆಪಿ ಸರ್ಕಾರದ ಆಡಳಿತ ಅವಧಿಯಲ್ಲಿ ನಡೆದಿದ್ದ ಸಹಾಯಕ ಸರ್ಕಾರಿ ಅಭಿಯೋಜಕರು, ಸಹಾಯಕ ಸರ್ಕಾರಿ ವಕೀಲರ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಆರೋಪ ಕೇಳಿ ಬಂದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ತನಿಖೆಗೆ ಆದೇಶಿಸಿದ್ದಾರೆ. ಕಳೆದ ವರ್ಷ ಜುಲೈ 23 ಮತ್ತು 24 ರಂದು ನಡೆದ ಸಹಾಯಕ ಸರ್ಕಾರಿ ಅಭಿಯೋಜಕರು, ಸಹಾಯಕ ಸರ್ಕಾರಿ ವಕೀಲರ ನೇಮಕಾತಿ ಪರೀಕ್ಷೆಯಲ್ಲಿ ಭ್ರಷ್ಟಾಚಾರ, ಅಕ್ರಮ ನಡೆದಿರುವ ಕುರಿತು ವ್ಯಾಪಕ ದೂರುಗಳು ಕೇಳಿ ಬಂದಿದ್ದವು. ಈ ಕುರಿತು ಸಲ್ಲಿಸಿದ್ದ ದೂರುಗಳನ್ನು ಆಧರಿಸಿ ಇಲಾಖಾ ತನಿಖೆ ನಡೆಸಿ ತಪ್ಪಿತಸ್ಥರ ವಿವರಗಳೊಂದಿಗೆ 10 ದಿನದೊಳಗೆ ವರದಿ ಸಲ್ಲಿಸುವಂತೆ ಮುಖ್ಯ ಕಾರ್ಯದರ್ಶಿ (ಸಿಎಸ್) ಗೆ ಸೂಚನೆ ನೀಡಿದ್ದಾರೆ.
ಬಿಜೆಪಿ ಸರ್ಕಾರದ ಅವಧಿಯಲ್ಲಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಗೆ ನೀಡಲಾಗಿದ್ದ 3 ಸಾವಿರ ಕೋಟಿ ರೂ. ಅನುದಾನವನ್ನು ದುರ್ಬಳಕೆ ಮಾಡಲಾಗಿದೆ ಎಂಬ ದೂರುಗಳಿದ್ದವು. ಈ ಹಿನ್ನೆಲೆಯಲ್ಲಿ ಇತ್ತೀಚೆಗಷ್ಟೇ ಸಿದ್ದರಾಮಯ್ಯ ಇಲಾಖಾ ತನಿಖೆಗೆ ಆದೇಶಿಸಿದ್ದರು.
ಪಿಎಸ್ಐ ಹಗರಣ:ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಕೆಲವರು ಪಿಎಸ್ಐ ಹಗರಣದಲ್ಲಿ ನನ್ನ ಹೆಸರನ್ನೂ ಸಹ ತೇಲಿಬಿಟ್ಟಿದ್ದರು. ಅಂದು ವಿರೋಧ ಪಕ್ಷ ಕಾಂಗ್ರೆಸ್ ಪಿಎಸ್ಐ ಹಗರಣದ ಬಗ್ಗೆ ಭಾರಿ ಸದ್ದು ಮಾಡಿತ್ತು. ಇದೀಗ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತ ಪಡೆದು ಅಧಿಕಾರ ಹಿಡಿದಿದೆ. ಹೀಗಾಗಿ ಪಿಎಸ್ಐ ಹಗರಣದ ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಿ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಹಾಗು ಶಾಸಕ ಬಿ.ವೈ. ವಿಜಯೇಂದ್ರ ಮೈಸೂರಿನಲ್ಲಿ ಕಳೆದ ಎರಡು ದಿನಗಳ ಹಿಂದೆ ಹೇಳಿದ್ದರು.