ಬೆಂಗಳೂರು :ದಕ್ಷಿಣ ಕರ್ನಾಟಕ ಪ್ರದೇಶದಲ್ಲಿ ತನ್ನ ನೆಲೆ ಭದ್ರಪಡಿಸಿಕೊಳ್ಳಲು ಬಿಜೆಪಿಯು ಮುಂಬರುವ ವಿಧಾನಸಭಾ ಚುನಾವಣೆಗೆ ಮುನ್ನ ಸಂಸದೆ ಸುಮಲತಾ ಅಂಬರೀಶ್ ಅವರನ್ನು ರಾಜ್ಯ ರಾಜಕಾರಣಕ್ಕೆ ಕರೆತರಲು ಚಿಂತನೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ. ಪ್ರಮುಖವಾಗಿ ಜೆಡಿಎಸ್ ಭದ್ರಕೋಟೆ ಎಂದು ಪರಿಗಣಿಸಲಾದ ಮಂಡ್ಯ ಜಿಲ್ಲೆಯನ್ನು ವಶಪಡಿಸಿಕೊಳ್ಳಲು ಬಿಜೆಪಿ ಶತಾಯಗತಾಯ ಪ್ರಯತ್ನಿಸುತ್ತಿದೆ ಎನ್ನಲಾಗಿದೆ.
ಮಂಡ್ಯ ವಿಧಾನಸಭಾ ಕ್ಷೇತ್ರದಿಂದ ನಟಿ ಹಾಗೂ ರಾಜಕಾರಣಿ ಸುಮಲತಾರನ್ನು ಕಣಕ್ಕಿಳಿಸಲು ಕೇಸರಿ ಪಕ್ಷ ಮುಂದಾಗಿದೆ ಎಂದು ಬಿಜೆಪಿಯೊಳಗಿನ ಮೂಲಗಳು ತಿಳಿಸಿವೆ. ಮೇ 10ರಂದು ನಡೆಯಲಿರುವ ಚುನಾವಣೆಯಲ್ಲಿ ಸ್ಪರ್ಧಿಸುವುದು ಮಾತ್ರವಲ್ಲದೆ ಜಿಲ್ಲೆಯ ಇತರ ಆರು ವಿಧಾನಸಭಾ ಕ್ಷೇತ್ರಗಳಲ್ಲಿ ಅವರು ಸ್ಟಾರ್ ಪ್ರಚಾರಕಿಯಾಗಿಯೂ ಕೆಲಸ ಮಾಡಲಿದ್ದಾರೆ. ಸುಮಲತಾ ಅವರು ಇತ್ತೀಚೆಗೆ ಬಿಜೆಪಿ ಸೇರಿದ್ದಾರೆ. ಇವರು 2019 ರ ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಗೆದ್ದಿದ್ದರು.
2019ರ ಲೋಕಸಭಾ ಚುನಾವಣೆಯಲ್ಲಿ ಸುಮಲತಾರಿಗೆ ಬಿಜೆಪಿ ಬೆಂಬಲ ಘೋಷಿಸಿತ್ತು. 2019 ರ ಚುನಾವಣೆಯಲ್ಲಿ ಅವರು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಅವರನ್ನು ಸೋಲಿಸಿದ್ದರು. ನಿಖಿಲ್ ವಿರುದ್ಧ ಅವರು ಒಂದು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಸುಮಲತಾ ಅವರು ಕನ್ನಡದ ದಿವಂಗತ ನಟ ಅಂಬರೀಶ್ ಪತ್ನಿ. ನಟ ಅಂಬರೀಷ್ ಒಕ್ಕಲಿಗ ಸಮುದಾಯದ ಪ್ರಭಾವಿ ವ್ಯಕ್ತಿ ಎಂದು ಪರಿಗಣಿಸಲ್ಪಟ್ಟಿದ್ದರು. ಅಂಬರೀಶ್ ಅವರು ಸುಮಾರು ಮೂರು ದಶಕಗಳ ಕಾಲ ರಾಜಕೀಯ ವೃತ್ತಿಜೀವನದಲ್ಲಿದ್ದು, ಅಪಾರ ಸಂಖ್ಯೆಯ ಬೆಂಬಲಿಗರು ಮತ್ತು ಅಭಿಮಾನಿಗಳ ಬಳಗವನ್ನು ಹೊಂದಿದ್ದರು. ಅಂಬರೀಷ್ ಮೂಲತಃ ಮಂಡ್ಯದವರು ಎಂಬುದು ಗಮನಾರ್ಹ.