ಬೆಂಗಳೂರು:ಕೊರೊನಾರೋಗ ಲಕ್ಷಣವಿಲ್ಲದ ಅಥವಾ ಅತ್ಯಂತ ಕಡಿಮೆ ಜ್ವರದ ಲಕ್ಷಣಗಳಿದ್ದರೆ, ಅವರನ್ನು ಮನೆಯಲ್ಲಿಯೇ ಪ್ರತ್ಯೇಕವಾಗಿರಿಸಿ (ಹೋಮ್ ಐಸೋಲೇಷನ್) ಅವರ ಆರೋಗ್ಯದ ಮೇಲೆ ನಿಗಾ ಇಡುವುದು ಸೂಕ್ತ. ಇದರಿಂದ ಆಸ್ಪತ್ರೆಗಳ ಮೇಲೆ ಒತ್ತಡ ತಡೆಯಬಹುದಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಕೋವಿಡ್ -19 ನಿರ್ವಹಣೆ ಕುರಿತು ತಜ್ಞ ವೈದ್ಯರೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋವಿಡ್ ಚಿಕಿತ್ಸೆಗೆ ಹಾಗೂ ನಿರ್ವಹಣೆಗೆ ಅಳವಡಿಸಬೇಕಾದ ಮಾರ್ಗಸೂಚಿಗಳನ್ನು ನಿಗದಿ ಪಡಿಸುವ ಕುರಿತು ಚರ್ಚಿಸಲಾಯಿತು. ಕಡಿಮೆ ರೋಗ ಲಕ್ಷಣ ಇದ್ದರೆ ಹೋಂ ಕ್ವಾರಂಟೈನ್ ಮಾಡುವುದು ಸೂಕ್ತ. ತೀವ್ರ ಸೋಂಕಿನ ಲಕ್ಷಣಗಳು ಹೊಂದಿರುವವರು ಹಾಗೂ ಇತರ ಆರೋಗ್ಯ ಸಮಸ್ಯೆಗಳಿರುವವರು ಸೋಂಕಿತರಾದಲ್ಲಿ, ಅವರಿಗೆ ಉತ್ತಮ ಚಿಕಿತ್ಸೆ ನೀಡಲು ಆದ್ಯತೆ ನೀಡಬೇಕು ಎಂದು ತಜ್ಞರು ಸಲಹೆ ಮಾಡಿದ್ದಾರೆ ಎಂದು ವಿವರಿಸಿದರು.
ಬಳ್ಳಾರಿ ಘಟನೆಯನ್ನು ನಾನು ಖಂಡಿಸುತ್ತೇನೆ. ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ. ಈಗಾಗಲೇ ಆರು ಮಂದಿಯನ್ನು ಸಸ್ಪೆಂಡ್ ಮಾಡಲಾಗಿದೆ. ಇನ್ನು ಮುಂದೆ ಅಂತಹ ಘಟನೆಗಳು ನಡೆಯದಂತೆ ನೋಡಿಕೊಳ್ಳುತ್ತೇವೆ ಎಂದು ಸಿಎಂ ಆಶ್ವಾಸನೆ ನೀಡಿದರು.