ಬೆಂಗಳೂರು :ಕೈಗಾರಿಕಾ ಸಂಘ-ಸಂಸ್ಥೆಗಳ ನೇತೃತ್ವದಲ್ಲಿ ಕಾರ್ಮಿಕರಿಗೆ ಲಸಿಕೆ ನೀಡುವ ಕಾರ್ಯ ವೇಗ ಪಡೆದಿರುವುದು ಸಂತಸದ ಸಂಗತಿ. ಲಸಿಕೆ ಪಡೆದ ಕಾರ್ಮಿಕರೊಂದಿಗೆ ಕೈಗಾರಿಕೆಗಳನ್ನು ಪ್ರಾರಂಭಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರೊಂದಿಗೆ ಚರ್ಚೆ ನಡೆಸುವುದಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ.
ಇಂದು ನಗರದಲ್ಲಿ ಎಫ್ಐಸಿಸಿಐ ವತಿಯಿಂದ ಆಯೋಜಿಸಿದ್ದ ವೆಬಿನಾರ್ನಲ್ಲಿ ಭಾಗವಹಿಸಿ ಕೈಗಾರಿಕೋದ್ಯಮಿಗಳೊಂದಿಗೆ ಸಮಾಲೋಚನೆ ನಡೆಸಿ ಲಾಕ್‌ಡೌನ್‌ನಿಂದಾಗಿ ಕೈಗಾರಿಕೆಗಳ ಮೇಲೆ ಆಗಿರುವ ಸಮಸ್ಯೆಗಳನ್ನು ಆಲಿಸಿದರು. ನಂತರ ಅವರು ಮಾತನಾಡಿ, ಕೋವಿಡ್ 2ನೇ ಅಲೆಯಿಂದಾಗಿ ರಾಜ್ಯದ ಪರಿಸ್ಥಿತಿ ಬಹಳ ಬಿಗಡಾಯಿಸಿತ್ತು. ಈ ಹಿನ್ನೆಲೆ ಲಾಕ್‌ಡೌನ್ನಂತಹ ಕಠಿಣ ನಿರ್ಧಾರಗಳನ್ನು ಕೈಗೊಳ್ಳಬೇಕಾಯಿತು ಎಂದರು.
ಮುಖ್ಯಮಂತ್ರಿಗಳೊಂದಿಗೆ ಚರ್ಚೆ :ಲಾಕ್‌ಡೌನ್‌ನಿಂದಾಗಿ ಕೋವಿಡ್ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಅಲ್ಲದೆ, ದೇಶಾದ್ಯಂತ ಲಸಿಕಾ ಕಾರ್ಯ ವೇಗ ಪಡೆಯುತ್ತಿದೆ. ಕೈಗಾರಿಕಾ ಸಂಸ್ಥೆಗಳು ತಮ್ಮ ಕಾರ್ಮಿಕರು ಮತ್ತು ಅವಲಂಬಿತರಿಗೆ ಲಸಿಕೆ ದೊರಕಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಇದು ಶ್ಲಾಘನೀಯ ಕಾರ್ಯವಾಗಿದೆ. ಲಸಿಕೆಯನ್ನು ಪಡೆದುಕೊಂಡಿರುವ ಕಾರ್ಮಿಕರೊಂದಿಗೆ ಕೈಗಾರಿಕೆಗಳನ್ನು ಪ್ರಾರಂಭಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳೊಂದಿಗೆ ನಾಳೆ ಚರ್ಚೆ ನಡೆಸುವುದಾಗಿ ತಿಳಿಸಿದರು.