ಬೆಂಗಳೂರು: ಕರ್ನಾಟಕದಲ್ಲಿ ಬಿಜೆಪಿ ಅಧಿಕಾರ ಕಳೆದುಕೊಳ್ಳಲು ಚೆನ್ನಗಿರಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ ಕೆ.ಮಾಡಾಳು ವಿರೂಪಾಕ್ಷಪ್ಪ ವಿರುದ್ಧದ ಲಂಚ ಪ್ರಕರಣ ಪ್ರಮುಖ ಕಾರಣವಾಗಿದ್ದು, ಕ್ಷುಲ್ಲಕ ಲೋಪದಿಂದ ಅವರ ವಿರುದ್ಧದ ಪ್ರಕರಣ ರದ್ದಾಗಿದ್ದು ಮರು ತನಿಖೆಗೆ ತಕ್ಷಣ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ನೀಡಬೇಕು ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ. ಸದಂ ಆಗ್ರಹಿಸಿದರು.
ನಗರದ ಆಮ್ ಆದ್ಮಿ ಪಕ್ಷದ ಕಚೇರಿಯಲ್ಲಿಂದು ಮಾತನಾಡಿದ ಅವರು, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಪರಮಾಪ್ತರಾಗಿದ್ದ ಕೆ.ಮಾಡಾಳು ವಿರೂಪಾಕ್ಷಪ್ಪ ಶಾಸಕರು ಮತ್ತು ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ (ಕೆಎಸ್‌ಡಿಎಲ್) ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ಅವರ ಮೇಲೆ ನಡೆದ ಲೋಕಾಯುಕ್ತ ದಾಳಿ ಇಡೀ ದೇಶದ ಗಮನ ಸೆಳೆದಿತ್ತು. ಕರ್ನಾಟಕ ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ಈ ಘಟನೆ ಆನಂತರ ರಾಜ್ಯದಲ್ಲಿ ಬಿಜೆಪಿ ಹೀನಾಯವಾಗಿ ಸೋಲಲು ಪ್ರಮುಖ ಕಾರಣವಾಯಿತು ಎಂದು ಹೇಳಿದರು.
ಸುಗಂಧ ದ್ರವ್ಯಕ್ಕೆ ಸಂಬಂಧಪಟ್ಟ ಕಚ್ಛಾ ವಸ್ತುಗಳನ್ನು ಮಾರಾಟ ಮಾಡಲು ಗುತ್ತಿಗೆ ನೀಡುವ ವಿಚಾರದಲ್ಲಿ ಮಾಡಾಳ್ ವಿರೂಪಾಕ್ಷಪ್ಪ ಲಂಚ ಕೇಳಿದ್ದಾಗಿ ಶ್ರೇಯಸ್ ಕಶ್ಯಪ್ ಎನ್ನುವವರು ಲೋಕಾಯುಕ್ತರಿಗೆ ದೂರು ನೀಡಿದ್ದರು. ಮಾಡಾಳ್ ಅವರ ಪುತ್ರ ಕೆಎಎಸ್ ಅಧಿಕಾರಿ ಪ್ರಶಾಂತ್ ಮಾಡಾಳ್ ತಂದೆಯ ಪರವಾಗಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದರು. ಅವರನ್ನು ಬಂಧಿಸಲಾಗಿತ್ತು. ತದ ನಂತರ ಮಾಡಾಳ್ ವಿರೂಪಾಕ್ಷಪ್ಪ ಅವರ ಮನೆ ಮೇಲೆ ಲೋಕಾಯುಕ್ತ ದಾಳಿ ಸಂದರ್ಭದಲ್ಲಿ ಕೂಡ 8 ಕೋಟಿ ರೂಪಾಯಿ ಹಣ ಪತ್ತೆಯಾಗಿತ್ತು.
ಆದರೆ ಅಡಿಕೆ ಮಾರಿದ ಹಣ ಎಂದು ಸಮಜಾಯಿಷಿ ನೀಡಿದ್ದರು. ಕೊನೆಗೆ ಅವರಿಗೆ ಬಿಜೆಪಿ ಟಿಕೆಟ್ ಕೊಡದೆ, ಅವರ ಮಗ ಚುನಾವಣೆಯಲ್ಲಿ ಸ್ಪರ್ಧಿಸಿದರೂ ಸೋತರು. ಇಷ್ಟೆಲ್ಲಾ ದೊಡ್ಡ ಹಗರಣ ಆದ ಬಳಿಕ ಮಾಡಾಳ್ ವಿರೂಪಾಕ್ಷಪ್ಪ ಮತ್ತು ಅವರ ಮಗನಿಗೆ ತಕ್ಕ ಶಿಕ್ಷೆ ಆಗಲಿದೆ ಎಂದು ನಿರೀಕ್ಷೆ ಮಾಡಿದ್ದೆವು. ಆದರೆ ಈ ಪ್ರಕರಣದಲ್ಲಿ ಸ್ಪೀಕರ್ ಪ್ರಾಸಿಕ್ಯೂಷನ್ ಅನುಮತಿ ಪಡೆದಿರಲಿಲ್ಲ ಎಂದು ಕಾರಣ ನೀಡಿ ಮೂರು ದಿನಗಳ ಹಿಂದೆ ಹೈಕೋರ್ಟ್ ಪ್ರಕರಣ ವಜಾ ಮಾಡಿದೆ ಎಂದು ಅವರು ಹೇಳಿದರು.