ಬೆಂಗಳೂರು: ಇಂದು ಕಾಂಗ್ರೆಸ್ ಸೇರ್ಪಡೆಯಾದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹುಬ್ಬಳ್ಳಿ- ಧಾರವಾಡ ಕೇಂದ್ರ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಬಿ ಫಾರಂ ಸಹ ಸ್ವೀಕರಿಸಿದ್ದಾರೆ. ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಇಂದು ಸೇರ್ಪಡೆ ಸಮಾರಂಭ ಹಾಗೂ ಸುದ್ದಿಗೋಷ್ಠಿ ನಡೆಯಿತು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಹಾಗೂ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾದ ಶೆಟ್ಟರ್ ಸಮಾರಂಭದ ಬಳಿಕ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಮೂಲಕ ಬಿ ಫಾರಂ ಸ್ವೀಕರಿಸಿದರು.
ಹುಬ್ಬಳ್ಳಿ ಧಾರವಾಡ ಕೇಂದ್ರ ವಿಧಾನಸಭೆ ಕ್ಷೇತ್ರದಿಂದ ಸತತ ಆರು ಬಾರಿ ಆಯ್ಕೆಯಾಗಿದ್ದ ಶೆಟ್ಟರ್ ರಾಜ್ಯ ಬಿಜೆಪಿ ರಾಜಕಾರಣದಲ್ಲಿ ವಿವಿಧ ಹುದ್ದೆಗಳನ್ನು ಅನುಭವಿಸಿದ್ದರು. ಸಚಿವ, ಪ್ರತಿಪಕ್ಷ ನಾಯಕ, ಮುಖ್ಯಮಂತ್ರಿ ಪದವಿಯನ್ನು ಅಲಂಕರಿಸಿದ್ದ ಶೆಟ್ಟರ್ ಈ ಸಾರಿ ಹೈಕಮಾಂಡ್ ತಮಗೆ ಟಿಕೆಟ್ ನಿರಾಕರಿಸಿದ್ದರಿಂದ ಬೇಸರಗೊಂಡು ಪಕ್ಷದ ಶಾಸಕ ಸ್ಥಾನ ಹಾಗೂ ಬಿಜೆಪಿ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಇದೀಗ ಕಾಂಗ್ರೆಸ್ನ ಅಧಿಕೃತ ಅಭ್ಯರ್ಥಿಯಾಗಿ ಬಿ ಫಾರಂ ಸ್ವೀಕರಿಸಿದ್ದು, 7ನೇ ಬಾರಿಗೆ ಹುಬ್ಬಳ್ಳಿ-ಧಾರವಾಡ ಕೇಂದ್ರ ವಿಧಾನಸಭೆ ಕ್ಷೇತ್ರದ ಶಾಸಕರಾಗುವ ಸಿದ್ಧತೆ ಆರಂಭಿಸಿದ್ದಾರೆ.
ಕಾಂಗ್ರೆಸ್ ಪಕ್ಷ ತನ್ನ ಮೂರು ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಇನ್ನೂ 15 ಅಭ್ಯರ್ಥಿಗಳ ಕೊನೆಯ ಪಟ್ಟಿ ಬಿಡುಗಡೆ ಮಾಡುವುದು ಬಾಕಿ ಉಳಿದಿದೆ. ಜಗದೀಶ್ ಶೆಟ್ಟರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂಬ ಮಾಹಿತಿ ತಿಳಿಯುತ್ತಿದ್ದಂತೆ ಹುಬ್ಬಳ್ಳಿ- ಧಾರವಾಡ ಕೇಂದ್ರ ವಿಧಾನಸಭೆ ಕ್ಷೇತ್ರದ ಅಭ್ಯರ್ಥಿಯ ಆಯ್ಕೆಯನ್ನು ಸಹ ತಡೆಹಿಡಿದಿತ್ತು. ಇಂದು ಕಾಂಗ್ರೆಸ್ ಸೇರ್ಪಡೆ ಆಗುತ್ತಿದ್ದಂತೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಜಗದೀಶ್ ಶೆಟ್ಟರ್ ಅವರಿಗೆ ಬಿ ಫಾರಂ ನೀಡಿದ್ದಾರೆ. ಕಳೆದ ಆರು ಅವಧಿಗೆ ಬಿಜೆಪಿ ಶಾಸಕರಾಗಿ ಆಯ್ಕೆಯಾಗಿದ್ದ ಶೆಟ್ಟರ್, ಅದೇ ಕ್ಷೇತ್ರದಿಂದ ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಯಾಗಿ ತಮ್ಮ ಅದೃಷ್ಟ ಪರೀಕ್ಷೆಗೆ ಮುಂದಾಗಲಿದ್ದಾರೆ.