ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರ ಮೂರು ವರ್ಷ, ಬೊಮ್ಮಾಯಿ ನೇತೃತ್ವದ ಸರ್ಕಾರ ಒಂದು ವರ್ಷ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 8 ರಂದು ದೊಡ್ಡಬಳ್ಳಾಪುರದಲ್ಲಿ ಆಯೋಜಿಸಿರುವ ಜನೋತ್ಸವ ಕಾರ್ಯಕ್ರಮದ ಸಿದ್ಧತೆ ಕುರಿತು ರಾಜ್ಯ ಬಿಜೆಪಿ ನಾಯಕರ ಸಭೆ ನಡೆಯುತ್ತಿದೆ.
ಮಲ್ಲೇಶ್ವರಂನಲ್ಲಿರುವ ಪಕ್ಷದ ಕಚೇರಿ ಜಗನ್ನಾಥ ಭವನದಲ್ಲಿ ನಡೆಯುತ್ತಿರುವ ಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೇರಿದಂತೆ ರಾಜ್ಯ ಬಿಜೆಪಿಯ ಹಿರಿಯ ನಾಯಕರು ಭಾಗಿಯಾಗಿದ್ದು, ಜನೋತ್ಸವ ಸಮಾರಂಭದ ಸಿದ್ದತೆ ಕುರಿತು ಪರಿಶೀಲನೆ ನಡೆಸುತ್ತಿದ್ದಾರೆ. ಜನೋತ್ಸವ ಯಶಸ್ಸಿನ ಕುರಿತು ಮಾತುಕತೆ ನಡೆಸುತ್ತಿದ್ದಾರೆ.
ಮಂಗಳೂರಿನಲ್ಲಿ ನಡೆದ ಮೋದಿ ಕಾರ್ಯಕ್ರಮ ಯಶಸ್ವಿಯಾಗಿದ್ದು, ಅದಕ್ಕೂ ದೊಡ್ಡ ಮಟ್ಟದ ಯಶಸ್ಸು ಸರ್ಕಾರದ ಸಾಧನಾ ಸಮಾವೇಶಕ್ಕೆ ಸಿಗಬೇಕು. ಅದಕ್ಕೆ ಬೇಕಾದ ಸಿದ್ಧತೆಗಳ ಕುರಿತು ಮಾತುಕತೆ ನಡೆಸಲಾಯಿತು. ಬರುವ ಜನರಿಗೆ ವ್ಯವಸ್ಥೆ ಕಲ್ಪಿಸುವಲ್ಲಿ ಲೋಪವಾಗದಂತೆ ನೋಡಿಕೊಳ್ಳುವ ಕುರಿತು ಚರ್ಚಿಸಲಾಯಿತು. ಸಮಾರಂಭ ಯಾವ ರೀತಿ ನಡೆಸಬೇಕು, ಯಾವ ರೀತಿಯ ಸಂದೇಶಗಳನ್ನು ಸಮಾವೇಶದ ಮೂಲಕ ರವಾನಿಸಬೇಕು ಎನ್ನುವ ಕುರಿತು ಮಾತುಕತೆ ನಡೆಸಿ ನಾಯಕರ ಅಭಿಪ್ರಾಯ ಸಂಗ್ರಹ ಮಾಡಲಾಗುತ್ತಿದೆ ಎನ್ನಲಾಗಿದೆ.
ಕೇವಲ ಸರ್ಕಾರದ ಜನೋತ್ಸವ ಸಮಾವೇಶ ಮಾತ್ರವಲ್ಲದೆ ಅನೇಕ ಮಹತ್ವದ ವಿಚಾರಗಳ ಕುರಿತು ಚರ್ಚೆ ನಡೆಯುತ್ತಿದೆ. ಬಿಜೆಪಿ ನಾಯಕರ ರಾಜ್ಯಪ್ರವಾಸದ ಬಗ್ಗೆ ಕೂಡ ಸಭೆಯಲ್ಲಿ ಚರ್ಚೆ ನಡೆಯಲಿದ್ದು, ಬಿಜೆಪಿಯ ಮುಂದಿನ 6 ಬೃಹತ್ ಸಮಾವೇಶಗಳ ಬಗ್ಗೆ, ವಿವಿಧ ಮೋರ್ಚಾಗಳ ಬೃಹತ್ ಸಮಾವೇಶಗಳ ಆಯೋಜನೆ ಕುರಿತು ಇಂದಿನ ಮಹತ್ವದ ಸಭೆಯಲ್ಲಿ ಸಮಾಲೋಚನೆ ನಡೆಯಲಿದೆ.
ಸಿಎಂ ಬೊಮ್ಮಾಯಿ ತವರು ಜಿಲ್ಲಾ ಪ್ರವಾಸ:ಜನೋತ್ಸವ ಸಿದ್ದತಾ ಸಭೆ ಮುಗಿಸಿ ಇಂದು ತವರು ಜಿಲ್ಲೆಯಾದ ಹುಬ್ಬಳ್ಳಿ-ಧಾರವಾಡಕ್ಕೆ ಸಿಎಂ ಬೊಮ್ಮಾಯಿ ಪ್ರವಾಸ ಮಾಡಲಿದ್ದಾರೆ. ವಿವಿಧ ಕಾರ್ಯಕ್ರಮಗಳಲ್ಲಿ ಅವರು ಭಾಗಿಯಾಗುವರು. ಮಧ್ಯಾಹ್ನ 2 ಗಂಟೆಗೆ ಹೆಚ್ಎಎಲ್ನಿಂದ ವಿಶೇಷ ವಿಮಾನದಲ್ಲಿ ಹುಬ್ಬಳ್ಳಿಗೆ ಪ್ರಯಾಣಿಸಲಿದ್ದು, 3.30ಕ್ಕೆ ಹುಬ್ಬಳಿಯಲ್ಲಿ ಕಸಬಾ ಪೊಲೀಸ್ ಠಾಣೆ ನೂತನ ಕಟ್ಟಡದ ಉದ್ಘಾಟನೆ, 4 ಗಂಟೆಗೆ ದಕ್ಷಿಣ ಸಂಚಾರಿ ಪೊಲೀಸ್ ನೂತನ ಕಟ್ಟಡ ಉದ್ಘಾಟನೆ, 4.30 ಕ್ಕೆ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಸಂಜೆ 6 ಗಂಟೆಗೆ ಹುಬ್ಬಳ್ಳಿ-ಧಾರವಾಡ ನಗರದ ಕುಡಿಯುವ ನೀರಿನ ಯೋಜನೆಯ ಬಗ್ಗೆ ಅಧಿಕಾರಿಗಳೊಂದಿಗೆ ಸಭೆ ನಡೆಸಲಿರುವ ಸಿಎಂ, ಇಂದು ರಾತ್ರಿ ಹುಬ್ಬಳಿಯಲ್ಲೇ ವಾಸ್ತವ್ಯ ಹೂಡಲಿದ್ದಾರೆ. ಸೋಮವಾರ ಬೆಳಗ್ಗೆ 9ಕ್ಕೆ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ.
ಇದನ್ನೂ ಓದಿ:ಸೆಪ್ಟೆಂಬರ್ 8ರ ಬಿಜೆಪಿ ಜನೋತ್ಸವ ಕಾರ್ಯಕ್ರಮಕ್ಕೆ 3 ಲಕ್ಷ ಜನ: ಸಚಿವ ಡಾ.ಕೆ.ಸುಧಾಕರ್