ಬೆಂಗಳೂರು : ರಾಜರಾಜೇಶ್ವರಿ ನಗರ ಕ್ಷೇತ್ರದ ಉಪಚುನಾವಣೆಗೆ ಜೆಡಿಎಸ್ನಿಂದ ಅಭ್ಯರ್ಥಿ ಆಯ್ಕೆ ಇಂದೂ ಕೂಡ ಅಂತಿಮಗೊಂಡಿಲ್ಲ.
ಬಿಜೆಪಿ ತನ್ನ ಅಭ್ಯರ್ಥಿ ಹೆಸರನ್ನು ಘೋಷಣೆ ಮಾಡದ ಹಿನ್ನೆಲೆಯಲ್ಲಿ ಜೆಡಿಎಸ್ ಕಾದು ನೋಡುವ ತಂತ್ರ ಅನುಸರಿಸಿದೆ ಎಂದು ಹೇಳಲಾಗುತ್ತಿದೆ. ಟಿಕೆಟ್ ನೀಡುವ ಕುರಿತು ಪಕ್ಷದ ಕಚೇರಿ ಜೆಪಿ ಭವನದಲ್ಲಿ ಶುಕ್ರವಾರ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಪಕ್ಷದ ಮುಖಂಡರ ಜೊತೆ ಎರಡನೇ ಸುತ್ತಿನ ಮಾತುಕತೆ ನಡೆಸಿದರು.
ಸಭೆ ಬಳಿಕ ಸುದ್ದಿಗಾರರಿಗೆ ಮಾಹಿತಿ ನೀಡಿದ ಅವರು, ಇಂದು ಎರಡನೇ ಸುತ್ತಿನ ಮಾತುಕತೆ ಮುಗಿದಿದೆ. ಮೂವರು ಟಿಕೆಟ್ ಆಕಾಂಕ್ಷಿಗಳು ಇದ್ದಾರೆ. ನಾಳೆ ಮಧ್ಯಾಹ್ನದ ಒಳಗೆ ಒಂದು ನಿರ್ಧಾರಕ್ಕೆ ಬರುತ್ತವೆ. ಈ ಬಗ್ಗೆ ಚರ್ಚೆ ಮಾಡುವುದಾಗಿ ಮೂವರೂ ಆಕಾಂಕ್ಷಿಗಳಿಗೆ ತಿಳಿಸಿದ್ದೇವೆ. ಭಾನುವಾರ ತಮ್ಮ ತೀರ್ಮಾನ ತಿಳಿಸಲು ಮೂವರು ಅಭ್ಯರ್ಥಿಗಳಿಗೆ ಸೂಚಿಸಿದ್ದೇನೆ ಎಂದರು.
ಇದಕ್ಕೂ ಮುನ್ನ ವಿಧಾನಪರಿಷತ್ನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಜೊತೆ ಸುದೀರ್ಘ ಸಮಾಲೋಚನೆ ನಡೆಸಿದ ಹೆಚ್ಡಿಕೆ, ಅಭ್ಯರ್ಥಿ ಗೆಲುವಿಗೆ ಕೆಲ ಸಲಹೆ, ಸೂಚನೆಗಳನ್ನು ನೀಡಿದರು.