ಬೆಂಗಳೂರು: ಹಿಂದಿನ ವಿಧಾನಸಭೆ ಚುನಾವಣೆಯಲ್ಲಿ ಸೋಲಿನ ಕಹಿ ಅನುಭವದ ಬಳಿಕ ಎಚ್ಚೆತ್ತುಕೊಂಡಿರುವ ಜೆಡಿಎಸ್, ಪಕ್ಷದ ಬಲವರ್ಧನೆಗೆ ಹೆಚ್ಚಿನ ಒತ್ತು ನೀಡುತ್ತಿದೆ. ಲೋಕಸಭೆ ಚುನಾವಣೆ ಹಾಗೂ ಮುಂದಿನ ಚುನಾವಣೆಗಳನ್ನು ಸಮರ್ಥವಾಗಿ ಎದುರಿಸುವುದು, ಪಕ್ಷವನ್ನು ಸದೃಢಗೊಳಿಸುವುದು ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚಿಸುವ ಕುರಿತಾಗಿ ಆಗಸ್ಟ್ 18 ರಂದು ಜೆಡಿಎಸ್ ಕೋರ್ ಕಮಿಟಿ ಸಭೆ ಕರೆದಿದೆ.
ಮಾಜಿ ಸಚಿವ ಶಾಸಕ ಜಿ.ಟಿ.ದೇವೇಗೌಡ ಅಧ್ಯಕ್ಷತೆಯಲ್ಲಿ ನಡೆಯಲಿರುವ ಮೊದಲ ಸಭೆಯಲ್ಲಿ ಕೋರ್ ಕಮೀಟಿ ಸದಸ್ಯರ ಹೆಸರನ್ನು ಪ್ರಕಟಿಸಲಾಗುತ್ತದೆ. ಮಾಜಿ ಸಚಿವ ಬಂಡೆಪ್ಪ ಕಾಶೆಂಪೂರ್, ಸಾ ರಾ ಮಹೇಶ್ ಸೇರಿದಂತೆ ಹಲವು ಮುಖಂಡರಿಗೆ ಸಮಿತಿಯಲ್ಲಿ ಅವಕಾಶ ನೀಡಲು ತೀರ್ಮಾನಿಸಲಾಗಿದೆ.
ಮಾಜಿ ಪ್ರಧಾನಿ, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಪಕ್ಷದ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಸಹ ಸಭೆಯಲ್ಲಿ ಉಪಸ್ಥಿತರಿದ್ದು, ಸದಸ್ಯರ ಹೆಸರನ್ನು ಪ್ರಕಟಿಸುವರು. ಪೂರ್ಣ ಪ್ರಮಾಣದಲ್ಲಿ ಸಮಿತಿ ರಚನೆ ಬಳಿಕ ಪಕ್ಷದ ಸಂಘಟನೆ ಕುರಿತು ಸುದೀರ್ಘವಾಗಿ ಚರ್ಚೆ ನಡೆಸಲಾಗುತ್ತದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಮುಂದಿನ ಬಿಬಿಎಂಪಿ, ಜಿಲ್ಲಾ ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗಳಿಸುವ ನಿಟ್ಟಿನಲ್ಲಿ ಜೆಡಿಎಸ್ ಕಾರ್ಯತಂತ್ರ ರೂಪಿಸಲು ಮುಂದಾಗಿದೆ. ವಿಧಾನಸಭೆ ಚುನಾವಣೆಯಲ್ಲಿ ಸೋಲನುಭವಿಸಿದ ನಂತರ ಪಕ್ಷದ ಕಾರ್ಯಕರ್ತರು ಕುಗ್ಗಿದ್ದಾರೆ. ತಳಮಟ್ಟದ ನಾಯಕರು ಸಹ ಪಕ್ಷದ ಮೇಲೆ ವಿಶ್ವಾಸ ಕಡಿಮೆಯಾಗಿದೆ. ಈ ಹಿನ್ನೆಲೆಯಲ್ಲಿ ಪಕ್ಷವನ್ನು ಸಂಘಟಿಸಿ ಕಾರ್ಯಕರ್ತರ ಮನೋಸ್ಥೈರ್ಯ ಹೆಚ್ಚಿಸಬೇಕಾಗಿದೆ. ತಳಮಟ್ಟದ ನಾಯಕರ ವಿಶ್ವಾಸವನ್ನು ಹೆಚ್ಚಿಸಬೇಕಾಗಿದೆ. ಈ ನಿಟ್ಟಿನಲ್ಲಿ ಪಕ್ಷದ ಮುಂಚೂಣಿ ಸ್ಥಾನದಲ್ಲಿರುವ ಮುಖಂಡರು ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳುವ ಕುರಿತಾಗಿ ಸಭೆಯಲ್ಲಿ ಈ ಬಗ್ಗೆ ವಿಸ್ತೃತವಾಗಿ ಚರ್ಚಿಸಲಾಗುತ್ತದೆ ಎಂದು ಪಕ್ಷದ ಮುಖಂಡರು ತಿಳಿಸಿದ್ದಾರೆ.
ಪ್ರವಾಸದ ಕಾರ್ಯಕ್ರಮ ರೂಪಿಸುವ ಕುರಿತು ಸಭೆಯಲ್ಲಿ ಸಮಾಲೋಚನೆ ನಡೆಸಲಾಗುತ್ತದೆ. ಸೋಲಿನ ಹತಾಶೆಯಿಂದ ಹೊರಬಂದು ಪಕ್ಷದ ಸಂಘಟಿಸಿ ಸದೃಢಗೊಳಿಸುವ ನಿಟ್ಟಿನಲ್ಲಿ ಕಾರ್ಯತಂತ್ರಗಳನ್ನು ರೂಪಿಸಲಾಗುತ್ತದೆ. ಶ್ರಾವಣ ಮಾಸದಲ್ಲಿ ಜೆಡಿಎಸ್ ವರಿಷ್ಠರು ಪ್ರವಾಸ ಕೈಗೊಳ್ಳಲು ತೀರ್ಮಾನಿಸಿದ್ದರು. ಅದರಂತೆ ತಂಡಗಳನ್ನು ರಚಿಸಿ ಪ್ರವಾಸ ಕೈಗೊಳ್ಳಲು ಮುಖಂಡರಿಗೆ ಸೂಚನೆ ನೀಡಲಾಗುತ್ತದೆ. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಮತ್ತು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಆಡಳಿತಾವಧಿಯಲ್ಲಿ ರಾಜ್ಯಕ್ಕೆ ನೀಡಿರುವ ಕೊಡುಗೆಗಳ ಬಗ್ಗೆ ಜನತೆಗೆ ಮನದಟ್ಟು ಮಾಡಿಕೊಟ್ಟು, ಪಕ್ಷದತ್ತ ಸೆಳೆಯುವ ಕುರಿತು ಚರ್ಚೆಗಳು ನಡೆಯಲಿವೆ ಎಂದು ಪಕ್ಷದ ಮೂಲಗಳು ಮಾಹಿತಿ ನೀಡಿವೆ.
ಇದನ್ನೂಓದಿ:ಸಿಎಂ ನೇತೃತ್ವದಲ್ಲಿ ಬೆಂಗಳೂರು ಶಾಸಕರ ಸಭೆ; ಶೀಘ್ರ ಕಾಮಗಾರಿ ಬಿಲ್ ಬಿಡುಗಡೆಗೆ ಮನವಿ