ಬೆಂಗಳೂರು: ವಿಧಾನಪರಿಷತ್ ಚುನಾವಣೆ ದಿನಾಂಕ ಘೋಷಣೆಯಾದ ಹಿನ್ನೆಲೆಯಲ್ಲಿ ಶಾಸಕರು ಹಾಗೂ ಮುಖಂಡರ ಅಭಿಪ್ರಾಯ ಸಂಗ್ರಹಿಸಲು ಜೆಡಿಎಸ್ ಸೋಮವಾರ ಶಾಸಕಾಂಗ ಪಕ್ಷದ ಸಭೆ ಕರೆದಿದೆ.
ಪಕ್ಷದ ಕಚೇರಿ ಜೆಪಿ ಭವನದಲ್ಲಿ ಜೂ.15ರಂದು ಮಧ್ಯಾಹ್ನ 12.30ಕ್ಕೆ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಶಾಸಕಾಂಗ ಸಭೆಯನ್ನು ಕರೆಯಲಾಗಿದೆ. ಶಾಸಕರು, ವಿಧಾನಪರಿಷತ್ ಸದಸ್ಯರು ಹಾಗೂ ಜೆಡಿಎಸ್ ಪಕ್ಷದ ಮುಖಂಡರು ಸೇರಿದಂತೆ ಸುಮಾರು 90 ಮಂದಿ ಭಾಗವಹಿಸಲಿದ್ದಾರೆ ಎಂದು ತಿಳಿದು ಬಂದಿದೆ.
ತೀವ್ರ ಲಾಬಿ:
ಮೇಲ್ಮನೆ ಚುನಾವಣೆಗೆ ದಿನಾಂಕ ಘೋಷಣೆಯಾಗುತ್ತಿದ್ದಂತೆ ಜೆಡಿಎಸ್‌ನಲ್ಲಿ ಆಕಾಂಕ್ಷಿಗಳು ತೀವ್ರ ಲಾಬಿ ನಡೆಸುತ್ತಿದ್ದು, ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ನೇತೃತ್ವದಲ್ಲಿ ನಡೆಯಲಿರುವ ಸಭೆಯಲ್ಲಿ ಪಕ್ಷದ ಅಭ್ಯರ್ಥಿಯ ಆಯ್ಕೆ ಕುರಿತು ಸಮಾಲೋಚನೆ ನಡೆಯಲಿದೆ. ಹಾಲಿ ವಿಧಾನಪರಿಷತ್ ಸದಸ್ಯ ಟಿ.ಎ. ಶರವಣ ಮತ್ತೊಂದು ಅವಧಿಗೆ ಮುಂದುವರೆಯಲು ತೀವ್ರ ಕಸರತ್ತು ನಡೆಸುತ್ತಿದ್ದಾರೆ. ರಾಜ್ಯಸಭೆಯಿಂದ ನಿವೃತ್ತಿಯಾಗುತ್ತಿರುವ ಕುಪ್ಪೇಂದ್ರ ರೆಡ್ಡಿ ಸಹ ಪರಿಷತ್‌ಗೆ ಪ್ರವೇಶಿಸಲು ತೆರೆಮರೆಯಲ್ಲಿ ಕಸರತ್ತು ನಡೆಸುತ್ತಿದ್ದಾರೆ. ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರಿಗೆ ಆಪ್ತವಾಗಿರುವ ಕುಪೇಂದ್ರ ರೆಡ್ಡಿ ಅವರ ಬಗ್ಗೆ ಒಲವಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.
ಇದಲ್ಲದೇ, ಜೆಡಿಎಸ್‌ನ ಬೆಂಗಳೂರು ನಗರ ಘಟಕ ಅಧ್ಯಕ್ಷ ಆರ್. ಪ್ರಕಾಶ್ ಸಹ ಪರಿಷತ್ ಸ್ಥಾನದ ಮೇಲೆ ಕಣ್ಣಿಟ್ಟಿದ್ದು, ತೀವ್ರ ಲಾಬಿ ನಡೆಸುತ್ತಿದ್ದಾರೆ. ಈ ಹಿಂದೆ ಹಲವು ಬಾರಿ ವಿಧಾನಸಭೆ ಚುನಾವಣೆಗೆ ಟಿಕೆಟ್ ಮತ್ತು ಪರಿಷತ್ ಸ್ಥಾನ ಸಿಗದೆ ವಂಚಿತರಾಗಿದ್ದು, ಪಕ್ಷಕ್ಕೆ ನಿಷ್ಠಾವಂತನಾಗಿದ್ದೇನೆ. ಹೀಗಾಗಿ ತಮಗೆ ಟಿಕೆಟ್ ನೀಡಬೇಕು ಎಂಬ ಬೇಡಿಕೆಯನ್ನು ವರಿಷ್ಠರ ಮುಂದೆ ಇಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಈ ಮೂವರು ಆಕಾಂಕ್ಷಿಗಳಲ್ಲದೇ ಕೋನರೆಡ್ಡಿ ಮತ್ತಿತರರು ಸಹ ಮೇಲ್ಮನೆ ಪ್ರವೇಶಿಸಿಸಲು ತೀವ್ರ ಪೈಪೋಟಿ ನಡೆಸುತ್ತಿದ್ದಾರೆ. ಚುನಾವಣೆಗೆ ಈಗಾಗಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದ್ದು, ಜೂ. 18 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ನಾಮಪತ್ರ ಸಲ್ಲಿಕೆಗೆ ಇನ್ನೂ ಕಾಲಾವಕಾಶ ಇರುವ ಕಾರಣ ವರಿಷ್ಠರು ಅಭ್ಯರ್ಥಿಯ ಆಯ್ಕೆ ಕುರಿತು ಚರ್ಚೆ ನಡೆಸುತ್ತಿದ್ದಾರೆ ಎನ್ನಲಾಗಿದೆ.