ಬೆಂಗಳೂರು: ಮುಂಬರುವ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆ, ಬಿಬಿಎಂಪಿ ಹಾಗೂ ಲೋಕಸಭೆ ಚುನಾವಣೆಗಾಗಿ ಪಕ್ಷವನ್ನು ನಗರದಲ್ಲಿ ಸಂಘಟನೆ ಮಾಡುವುದು ಹಾಗೂ ಸದಸ್ಯತ್ವ ಅಭಿಯಾನವನ್ನು ದೊಡ್ಡ ಪ್ರಮಾಣದಲ್ಲಿ ಕೈಗೊಳ್ಳುವ ಬಗ್ಗೆ ಜೆಡಿಎಸ್ ಪಕ್ಷದ ಕಚೇರಿ ಜೆಪಿ ಭವನದಲ್ಲಿ ಬುಧವಾರ ವಿಸ್ತೃತವಾಗಿ ಚರ್ಚೆ ನಡೆಸಲಾಯಿತು.
ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ.ದೇವೇಗೌಡರು ಹಾಗೂ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಅವರ ಸೂಚನೆಯ ಮೇರೆಗೆ ಪಕ್ಷದ ಕಚೇರಿ ಜೆಪಿ ಭವನದಲ್ಲಿ ಇಂದು ಸಭೆ ಕರೆದಿದ್ದ ನಗರ ಘಟಕದ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯ ಹೆಚ್.ಎಂ.ರಮೇಶ್ ಗೌಡ ಅವರು, ಹಲವು ವಿಷಯಗಳ ಬಗ್ಗೆ ಸಮಾಲೋಚನೆ ನಡೆಸಿದರು. ವಿಧಾನ ಪರಿಷತ್ ಸದಸ್ಯರಾದ ಕೆ.ಎ.ತಿಪ್ಪೇಸ್ವಾಮಿ, ಟಿ.ಎ.ಶರವಣ, ಗೊಟ್ಟಿಗೆರೆ ಮಂಜಣ್ಣ ಸೇರಿದಂತೆ ಅನೇಕ ಹಿರಿಯ ಮುಖಂಡರು ಭಾಗಿಯಾಗಿದ್ದ ಈ ಸಭೆಯಲ್ಲಿ, ನಗರದ ಎಲ್ಲಾ ವಿಧಾನಸಭೆ ಕ್ಷೇತ್ರಗಳಲ್ಲಿ ಬೃಹತ್ ಪ್ರಮಾಣದಲ್ಲಿ ಸದಸ್ಯತ್ವ ಅಭಿಯಾನ ಕೈಗೊಳ್ಳುವ ಬಗ್ಗೆ ನಿರ್ಧಾರ ಕೈಗೊಳ್ಳಲಾಯಿತು.
ಬಹುಮುಖ್ಯವಾಗಿ ಮುಂಬರುವ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆಯ ಸಿದ್ಧತೆ ಹಾಗೂ ಪಕ್ಷದ ಅಭ್ಯರ್ಥಿಗಳನ್ನು ಉತ್ತಮ ಅಂತರದಲ್ಲಿ ಗೆಲ್ಲಿಸಿಕೊಳ್ಳುವ ಬಗ್ಗೆ ಸಭೆಯಲ್ಲಿ ಸುದೀರ್ಘವಾಗಿ ಚರ್ಚಿಸಲಾಯಿತು. ಮಾಜಿ ಕಾರ್ಪೊರೇಟರ್ ತಿಮ್ಮೇಗೌಡ, ಪಕ್ಷದ ಕಾನೂನು ಘಟಕದ ರಾಜ್ಯಾಧ್ಯಕ್ಷ ಎ.ಪಿ.ರಂಗನಾಥ್, ಎಲ್ಲಾ ವಿಧಾನಸಭೆ ಕ್ಷೇತ್ರಗಳ ಅಧ್ಯಕ್ಷರು, ವಿವಿಧ ಘಟಕಗಳ ಅಧ್ಯಕ್ಷರು, ವಾರ್ಡ್ ಮುಖಂಡರು ಸೇರಿ ವಿವಿಧ ನಾಯಕರು ಸಭೆಯಲ್ಲಿ ಉಪಸ್ಥಿತರಿದ್ದರು. ಇದೇ ವೇಳೆ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಘಟಕದ ಅಧ್ಯಕ್ಷರನ್ನಾಗಿ ಎಂ.ನಾಗೇಂದ್ರ ಪ್ರಸಾದ್ (ಬಾಬು) ಅವರನ್ನು ನೇಮಕ ಮಾಡಲಾಗಿದ್ದು, ಸಭೆಯಲ್ಲಿ ಅವರಿಗೆ ಅಭಿನಂದನೆ ಸಲ್ಲಿಸಲಾಯಿತು.