ಬೆಂಗಳೂರು: ಪಕ್ಷ ಸಂಘಟನೆ, ಮುಂಬರುವ ಚುನಾವಣೆಗೆ ಸಿದ್ಧತೆ, ಪದಾಧಿಕಾರಿಗಳ ಬದಲಾವಣೆ ಸೇರಿದಂತೆ ಹಲವು ಮಹತ್ವದ ವಿಚಾರಗಳ ಬಗ್ಗೆ ಸಮಾಲೋಚನೆ ನಡೆಸಲು ಇಂದಿನಿಂದ ಮತ್ತೆ ಜೆಡಿಎಸ್ ಜಿಲ್ಲಾವಾರು ಸಭೆಗಳನ್ನು ನಡೆಸುತ್ತಿದೆ.
ಕಳೆದ ಆಗಸ್ಟ್ ತಿಂಗಳಿನಲ್ಲಿ 13 ಜಿಲ್ಲೆಗಳ ಸಭೆ ನಡೆಸಿದ ಜೆಡಿಎಸ್, ಪಕ್ಷದ ಕಚೇರಿ ಜೆಪಿ ಭವನದಲ್ಲಿ ಇಂದಿನಿಂದ ಸೆಪ್ಟೆಂಬರ್ 20ರವರೆಗೆ ಮತ್ತೆ 17 ಜಿಲ್ಲೆಗಳ ಜಿಲ್ಲಾವಾರು ಸಭೆಗಳನ್ನು ನಡೆಸುತ್ತಿದೆ. ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಕೆ.ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ನಡೆಯುವ ಸಭೆಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಭಾಗವಹಿಸಲಿದ್ದು, ಜಿಲ್ಲಾವಾರು ಮುಖಂಡರು, ಪದಾಧಿಕಾರಿಗಳು, ಮಾಜಿ ಸಚಿವರು, ಮಾಜಿ ಸಂಸದರು, ಶಾಸಕರು, ಮಾಜಿ ಶಾಸಕರು, ಲೋಕಸಭೆ, ವಿಧಾನಸಭೆ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಅಭ್ಯರ್ಥಿಗಳನ್ನು ಸಭೆಗೆ ಆಹ್ವಾನಿಸಲಾಗಿದೆ.