ಬೆಂಗಳೂರು: ರಾಜ್ಯದ ನೀರಾವರಿ ಯೋಜನೆಗಳ ಸಂಬಂಧ ತಾರತಮ್ಯ ಮಾಡದೇ ಕೂಡಲೇ ಅಗತ್ಯ ಅನುಮೋದನೆ ನೀಡುವಂತೆ ಆಗ್ರಹಿಸಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್ ಶಾಸಕರು ವಿಧಾನಸೌಧದಿಂದ ರಾಜಭವನಕ್ಕೆ ಪಾದಯಾತ್ರೆ ಮೂಲಕ ತೆರಳಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.
ನೀರಾವರಿ ಯೋಜನೆಗಳಲ್ಲಿ ತಾರತಮ್ಯ: ಕೇಂದ್ರದ ವಿರುದ್ಧ ರಾಜ್ಯಪಾಲರಿಗೆ ಜೆಡಿಎಸ್ ಮನವಿ
ಮೇಕೆದಾಟು, ಕೃಷ್ಣಾ ಮೇಲ್ದಂಡೆ ಹಾಗು ಮಹದಾಯಿ ಯೋಜನೆ ಅನುಮೋದನೆಗಾಗಿ ಆಗ್ರಹಿಸಿ ವಿಧಾನಸೌಧದ ಗಾಂಧಿ ಪ್ರತಿಮೆಯ ಮುಂದೆ ಜೆಡಿಎಸ್ ಶಾಸಕರು ಮತ್ತು ಮುಖಂಡರು ಪ್ರತಿಭಟನೆ ನಡೆಸಿದರು.
ಮಾಜಿ ಸಿಎಂ ಹೆಚ್. ಡಿ. ಕುಮಾರಸ್ವಾಮಿ ಮಾತನಾಡಿ, ರಾಜ್ಯಪಾಲರನ್ನು ಭೇಟಿ ಮಾಡಿ ರಾಜ್ಯದ ನದಿ ವಿಚಾರದಲ್ಲಿ ಕೇಂದ್ರದ ತಾರತಮ್ಯದ ಬಗ್ಗೆ ಮನವಿ ಸಲ್ಲಿಸಲಿದ್ದೇವೆ. ತಮಿಳುನಾಡಿಗೆ ಕೇಂದ್ರ ಸರ್ಕಾರ ರಾಜ್ಯದ ಹೆಚ್ಚುವರಿ ನೀರನ್ನು ಉಪಯೋಗಿಸಲು ಅವಕಾಶ ನೀಡಿದೆ. ಮಹದಾಯಿ ಯೋಜನೆಯ ಕುರಿತಾದ ಪ್ರಾಧಿಕಾರದ ತೀರ್ಪಿನ ಹಿನ್ನೆಲೆಯಲ್ಲಿ ಗೆಜೆಟ್ ನೋಟಿಫಿಕೇಷನ್ ಮಾಡಲು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್ನಲ್ಲಿರುವ ಅರ್ಜಿಯ ಕಾರಣ ಕೊಡುತ್ತಿದೆ. ಕೃಷ್ಣಾ ಮೇಲ್ದಂಡೆ ಯೋಜನೆಯಡಿಯಲ್ಲಿ ರಾಜ್ಯಕ್ಕೆ ಹಂಚಿಕೆಯಾಗಿರುವ 130 ಟಿಎಂಸಿ ನೀರು ಉಪಯೋಗ ಮಾಡಲು ಗೆಜೆಟ್ ನೋಟಿಫಿಕೇಷನ್ ಮಾಡಲು ಸುಪ್ರೀಂಕೋರ್ಟ್ನಲ್ಲಿ ತೆಲಂಗಾಣದ ಅರ್ಜಿಯ ಸಬೂಬು ನೀಡಿ ನೀರನ್ನು ಉಪಯೋಗ ಮಾಡಲು ಅವಕಾಶ ತಡೆ ಹಿಡಿಯಲಾಗಿದೆ ಎಂದು ಆರೋಪಿಸಿದರು.
ಈ ಎಲ್ಲ ವಿಚಾರದಲ್ಲಿ ರಾಜ್ಯಕ್ಕೆ ಆಗಿರುವ ಅನ್ಯಾಯದ ವಿರುದ್ಧ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಿದ್ದೇವೆ. ಎರಡನೇ ಹಂತದಲ್ಲಿ ದೇವೇಗೌಡರ ನೇತೃತ್ವದಲ್ಲಿ ಪ್ರಧಾನಿ ಭೇಟಿ ಮಾಡಿ ಈ ಸಂಬಂಧ ಮನವಿ ಮಾಡಲಾಗುವುದು. ಈ ಮೂಲಕ ನಮ್ಮ ರಾಜ್ಯಕ್ಕೆ ಆಗಿರುವ ಅನ್ಯಾಯದ ವಿರುದ್ಧ ಹೋರಾಟ ನಡೆಸಲಾಗುವುದು. ನೂತನ ಸಿಎಂ ಬಸವರಾಜ ಬೊಮ್ಮಾಯಿಗೆ ಈ ಕುರಿತಾದ ಅರಿವು ಇದೆ. ಪ್ರಧಾನ ಮಂತ್ರಿ ಮೋದಿ ಹಾಗೂ ಜಲಸಂಪನ್ಮೂಲ ಸಚಿವರನ್ನು ಭೇಟಿ ಮಾಡಿ ಅಗತ್ಯ ಅನುಮತಿ ಪಡೆದುಕೊಳ್ಳಬೇಕು ಎಂದು ಆಗ್ರಹಿಸಿದರು.