ಬೆಂಗಳೂರು: ಪೆಟ್ರೋಲ್, ಡೀಸೆಲ್, ವಿದ್ಯುತ್ ದರ ಏರಿಕೆ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ವಿರೋಧಿಸಿ ಜೆಡಿಎಸ್ ಜೂನ್ 28ರಂದು ಪ್ರತಿಭಟನೆ ನಡೆಸಲು ನಿರ್ಧರಿಸಿದೆ. ಪಕ್ಷದ ಕಚೇರಿ ಜೆಪಿ ಭವನದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಜೆಡಿಎಸ್ ಬೆಂಗಳೂರು ಘಟಕದ ಅಧ್ಯಕ್ಷ ಆರ್. ಪ್ರಕಾಶ್ ಅವರು, ಪೆಟ್ರೋಲ್, ಡೀಸಲ್, ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆಯನ್ನು ಸೋಮವಾರ ಹಮ್ಮಿಕೊಂಡಿದ್ದೇವೆ ಎಂದು ತಿಳಿಸಿದರು.
ಪಕ್ಷದ ಕಚೇರಿ ಜೆಪಿ ಭವನದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಯಲಿದ್ದು, ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗುವುದು ಎಂದು ಹೇಳಿದರು. ಮಾಜಿ ಮುಖ್ಯಮಂತ್ರಿ, ಶಾಸಕಾಂಗ ಪಕ್ಷದ ನಾಯಕ ಹೆಚ್ ಡಿ ಕುಮಾರಸ್ವಾಮಿ, ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಕೆ ಕುಮಾರಸ್ವಾಮಿ, ವಿಧಾನ ಪರಿಷತ್ ಸದಸ್ಯರಾದ ತಿಪ್ಪೇಸ್ವಾಮಿ, ರಮೇಶ್ ಗೌಡ, ಮಾಜಿ ಸದಸ್ಯ ಟಿ ಎ ಶರವಣ ಸೇರಿದಂತೆ ಪಕ್ಷದ ಮುಖಂಡರು, ಸಾವಿರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.