ಬೆಂಗಳೂರು: ಕಾಂಗ್ರೆಸ್ ಮತ್ತು ಜೆಡಿಎಸ್ನಿಂದ ಅನರ್ಹಗೊಂಡಿರುವ 17 ಶಾಸಕರಿಂದ ತೆರವಾಗಿರುವ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಶೀಘ್ರ ನಡೆಯುವ ಹಿನ್ನೆಲೆಯಲ್ಲಿ ಜೆಡಿಎಸ್ ಸಿದ್ಧತೆ ಮಾಡಿಕೊಳ್ಳುತ್ತಿದೆ.
ಪ್ರಮುಖವಾಗಿ ರಾಜಧಾನಿ ಮೇಲೆ ಕಣ್ಣಿಟ್ಟಿರುವ ಜೆಡಿಎಸ್ ವರಿಷ್ಠರು, ಸರಣಿ ಸಭೆಗಳನ್ನು ನಡೆಸುವ ಮೂಲಕ ಕಾರ್ಯಕರ್ತರನ್ನು ಒಗ್ಗೂಡಿಸುತ್ತಿದ್ದಾರೆ. ಈ ಸಂಬಂಧ ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ಮುಖಂಡರು ಹಾಗೂ ಕಾರ್ಯಕರ್ತರ ಸಭೆಯನ್ನು ಪಕ್ಷದ ಕಚೇರಿ ಜೆಪಿ ಭವನದಲ್ಲಿ ನಡೆಸಲಾಯಿತು.
ಮಹಾಲಕ್ಷ್ಮಿ ಲೇಔಟ್ ಕ್ಷೇತ್ರದಲ್ಲಿ ಜೆಡಿಸ್ ಸಭೆ ಬೆಂಗಳೂರು ನಗರ ಘಟಕದ ಅಧ್ಯಕ್ಷ ಆರ್. ಪ್ರಕಾಶ್, ರಾಜ್ಯ ಪ್ರಧಾನ ಕಾರ್ಯದರ್ಶಿ ಆರ್.ವಿ. ಹರೀಶ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ, ಹಲವು ಯುವಕರು ಪಕ್ಷಕ್ಕೆ ಸೇರ್ಪಡೆಗೊಂಡರು. ಅದೇ ರೀತಿ ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ಹಲವು ವಾರ್ಡ್ವಾರು ಉಪಾಧ್ಯಕ್ಷರು ಹಾಗೂ ಕಾರ್ಯದರ್ಶಿಗಳನ್ನು ನೇಮಕ ಮಾಡಲಾಯಿತು.
ಮುಂಬರುವ ಉಪ ಚುನಾವಣೆಗೆ ಸಿದ್ಧರಾಗುವಂತೆ ಕರೆ ನೀಡಿದ ಜೆಡಿಎಸ್ ಮುಖಂಡರು, ಕಾರ್ಯಸೂಚಿ ಕುರಿತು ಕಾರ್ಯಕರ್ತರೊಂದಿಗೆ ಚರ್ಚೆ ನಡೆಸಿದರು. ಮಹಾಲಕ್ಷ್ಮಿ ಲೇಔಟ್ ಕ್ಷೇತ್ರಕ್ಕೆ ಅಭ್ಯರ್ಥಿಯನ್ನು ವರಿಷ್ಠರು ಘೋಷಿಸಲಿದ್ದಾರೆ. ಹಾಗಾಗಿ, ಯಾರೇ ಅಭ್ಯರ್ಥಿಯಾದರೂ ಒಗ್ಗೂಡಿ ಕೆಲಸ ಮಾಡುವಂತೆ ಕರೆ ನೀಡಿದರು.