ಬೆಂಗಳೂರು: ಕರ್ನಾಟಕ ಭೂ ಸುಧಾರಣೆ ಕಾಯ್ದೆ, ಎಪಿಎಂಸಿ ಕಾಯ್ದೆ ತಿದ್ದುಪಡಿ ಜಾರಿ ಹಾಗೂ ರೈತ ಮತ್ತು ಕಾರ್ಮಿಕ ವಿರೋಧಿ ನೀತಿ ವಿರುದ್ಧ ಹೋರಾಟ ನಡೆಸುವ ಹಿನ್ನೆಲೆಯಲ್ಲಿ ಹೋರಾಟದ ರೂಪುರೇಷೆ ಕುರಿತು ಚರ್ಚಿಸಲು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ನೇತೃತ್ವದಲ್ಲಿ ಆಗಸ್ಟ್ 4 ರಂದು ಸಭೆ ಕರೆಯಲಾಗಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಕೆ. ಕುಮಾರಸ್ವಾಮಿ ತಿಳಿಸಿದ್ದಾರೆ.
ಪಕ್ಷದ ಕಚೇರಿ ಜೆ.ಪಿ.ಭವನದಲ್ಲಿ ಆ.4 ರಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಸಭೆ ನಡೆಯಲಿದ್ದು, ಪಕ್ಷದ ಶಾಸಕರು, ಜಿಲ್ಲಾ, ತಾಲೂಕು ಘಟಕದ ಅಧ್ಯಕ್ಷರು ಸೇರಿದಂತೆ ಇತರೆ ನಾಯಕರು ಸಭೆಯಲ್ಲಿ ಭಾಗವಹಿಸಬೇಕು. ಸಭೆಯಲ್ಲಿ ಹೋರಾಟದ ಕುರಿತು ಸಲಹೆಗಳನ್ನು ನೀಡಬೇಕು. ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಿಜೆಪಿ ಸರ್ಕಾರ ಒಂದು ವರ್ಷ ಕಾರ್ಯಾವಧಿಯಲ್ಲಿ ಪ್ರಗತಿಪರ, ರೈತಪರ, ಕಾರ್ಮಿಕಪರ ಇರುವ ಕಾಯ್ದೆಗಳಿಗೆ ರೈತ ಮತ್ತು ಕಾರ್ಮಿಕ ವಿರೋಧಿ ತಿದ್ದುಪಡಿಗಳನ್ನು ಸುಗ್ರೀವಾಜ್ಞೆ ಮೂಲಕ ಅವರನ್ನು ಬೀದಿಪಾಲು ಮಾಡಲು ಹೊರಟಿದೆ. ಇದರ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ. ಹೀಗಾಗಿ ಸಭೆಯಲ್ಲಿ ಶಾಸಕರು, ಕಳೆದ ವಿಧಾನಸಭೆ ಚುನಾವಣೆಯಲ್ಲಿ ಭಾಗವಹಿಸಿದ್ದ ಅಭ್ಯರ್ಥಿಗಳು, ಜಿಲ್ಲಾ, ತಾಲೂಕು ಘಟಕದ ಅಧ್ಯಕ್ಷರು ಭಾಗಿಯಾಗಿ ಹೋರಾಟದ ಕುರಿತು ತಮ್ಮ ಸಲಹೆಗಳನ್ನು ನೀಡಬೇಕು ಎಂದು ಹೇಳಿದ್ದಾರೆ.
ಸುಗ್ರೀವಾಜ್ಞೆ ಮೂಲಕ ತಂದಿರುವ ತಿದ್ದುಪಡಿಗಳನ್ನು ತಕ್ಷಣ ಕೈಬಿಡಬೇಕು ಎಂದು ಒತ್ತಾಯಿಸಿ ಪಕ್ಷದ ವರಿಷ್ಠ ಹೆಚ್.ಡಿ ದೇವೇಗೌಡರು ಈಗಾಗಲೇ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ. ರಾಜ್ಯ ಸರ್ಕಾರ ರೈತ ಮತ್ತು ಕಾರ್ಮಿಕ ವಿರೋಧಿ ತಿದ್ದುಪಡಿ ಕಾಯ್ದೆಗಳನ್ನು ಹಿಂತೆಗೆದುಕೊಳ್ಳಲು ವಿಫಲವಾದರೆ ಸಮಾನ ಮನಸ್ಕರ ಮಿತ್ರ ಪಕ್ಷಗಳೊಂದಿಗೆ ಒಡಗೂಡಿ ರಾಜ್ಯಾದ್ಯಂತ ಪ್ರತಿಭಟನೆ ಮಾಡದೆ ಬೇರೆ ಮಾರ್ಗವಿಲ್ಲ ಎಂದಿದ್ದಾರೆ.
ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಆಹ್ವಾನಿತರನ್ನು ಹೊರತುಪಡಿಸಿ ಇತರರು ಸಭೆಯಲ್ಲಿ ಭಾಗವಹಿಸುವಂತಿಲ್ಲ. ಅಲ್ಲದೇ, ಸಭೆಯಲ್ಲಿ ಭಾಗವಹಿಸುವ ಎಲ್ಲಾ ಆಹ್ವಾನಿತರು ಎನ್-95 ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಡ್ಡಾಯ ಮತ್ತು ವೈಯಕ್ತಿಕ ಸ್ವಚ್ಛತೆ ಕಡೆಗೆ ಗಮನ ಹರಿಸಬೇಕು ಎಂದು ಹೆಚ್.ಕೆ. ಕುಮಾರಸ್ವಾಮಿ ಮನವಿ ಮಾಡಿದ್ದಾರೆ.