ಬೆಂಗಳೂರು:ಬಜೆಟ್ ಅಧಿವೇಶನದ ಹಿನ್ನೆಲೆಯಲ್ಲಿ ಜೆಡಿಎಸ್ ವಿಧಾನಮಂಡಲದಲ್ಲಿ ಅನುಸರಿಸಬೇಕಾದ ಕಾರ್ಯತಂತ್ರಗಳನ್ನು ರೂಪಿಸಿದ್ದು, ಈ ಬಗ್ಗೆ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರೂ ಆಗಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಚರ್ಚೆ ನಡೆದಿದೆ.
ವಿಧಾನಸಭೆ ಹಾಗೂ ವಿಧಾನಪರಿಷತ್ತಿನ ಜೆಡಿಎಸ್ ಎಲ್ಲಾ ಸದಸ್ಯರಿಗೆ ಕುಮಾರಸ್ವಾಮಿ ಅವರು ಕೆಲವು ಮಹತ್ವದ ಸೂಚನೆಗಳನ್ನು ನೀಡಿದ್ದಾರೆ. ಮುಖ್ಯವಾಗಿ ಮೇಕೆದಾಟು ಯೋಜನೆ ಬಗ್ಗೆ ಅನುಸರಿಸಬೇಕಾದ ಕಾರ್ಯತಂತ್ರ ಹಾಗೂ ಅಧಿವೇಶನದಲ್ಲಿ ಪ್ರಸ್ತಾಪ ಮಾಡಬೇಕಿರುವ ವಿಷಯಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಗಿದೆ.
ಎಲ್ಲರೂ ಕಡ್ಡಾಯವಾಗಿ ಕಲಾಪದಲ್ಲಿ ಹಾಜರು ಇರಬೇಕು. ತಮ್ಮ ಕ್ಷೇತ್ರದ ಹಾಗೂ ರಾಜ್ಯದ ಸಮಸ್ಯೆಗಳನ್ನು ಪ್ರಸ್ತಾಪ ಮಾಡಿ, ಆ ಬಗ್ಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಪ್ರಯತ್ನ ಮಾಡಬೇಕು. ಕಲಾಪದಲ್ಲಿ ಪಕ್ಷದ ನಿಲುವುಗಳನ್ನು ಪ್ರಬಲವಾಗಿ ಪ್ರತಿಪಾದಿಸಬೇಕು ಎಂದು ಹೆಚ್ಡಿಕೆ ಶಾಸಕರಿಗೆ ತಿಳಿಸಿದ್ದಾರೆ ಎನ್ನಲಾಗಿದೆ.