ಕರ್ನಾಟಕ

karnataka

ETV Bharat / state

ಕನ್ನಡಿಗರು ಅಮುಲ್ ಉತ್ಪನ್ನ ಖರೀದಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಬೇಕು: ಸಿದ್ದರಾಮಯ್ಯ - ಗೃಹ ಸಚಿವ ಅಮಿತ್​ ಶಾ

ಕೆಎಂಎಫ್-​ಅಮುಲ್​ ವಿಲೀನ ವಿಚಾರ ಹಾಗು ರಾಜ್ಯದಲ್ಲಿ ಅಮುಲ್ ಉತ್ಪನ್ನಗಳ ಮಾರಾಟದ ಬಗ್ಗೆ ಸಿದ್ದರಾಮಯ್ಯ ಟೀಕಾ ಸಮರ ನಡೆಸಿದ್ದಾರೆ.

ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ
ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ

By

Published : Apr 7, 2023, 2:53 PM IST

Updated : Apr 8, 2023, 11:58 AM IST

ಬೆಂಗಳೂರು: ಕನ್ನಡಿಗರು ಒಮ್ಮತದಿಂದ ಅಮುಲ್ ಉತ್ಪನ್ನಗಳನ್ನು ಖರೀದಿಸುವುದಿಲ್ಲ ಎಂಬ ಪ್ರತಿಜ್ಞೆ ಮಾಡಬೇಕು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಕ್ಷಣ ಮಧ್ಯಪ್ರವೇಶಿಸಿ ಹಿಂಬಾಗಿಲಿನಿಂದ ಪ್ರವೇಶಿಸುತ್ತಿರುವ ಅಮುಲ್ ಸಂಸ್ಥೆಯನ್ನು ತಡೆಯಬೇಕು. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ರಾಜ್ಯದ ಜನಾಭಿಪ್ರಾಯವನ್ನು ಗಮನಕ್ಕೆ ತಂದು ದ್ರೋಹ ಚಿಂತನೆ ನಿಲ್ಲಿಸಬೇಕು ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಸರಣಿ ಟ್ವೀಟ್ ಮಾಡಿರುವ ಅವರು, ರಾಜ್ಯ ಬಿಜೆಪಿಯ ದುರ್ಬಲ ನಾಯಕತ್ವದಿಂದಾಗಿ ನಾಡಿನ ಲಕ್ಷಾಂತರ ಹೈನುಗಾರಿಕೆ ಕುಟುಂಬಗಳ ಜೀವನಾಧಾರವಾಗಿರುವ ಕೆಎಂಎಫ್ ಅನ್ನು ಬಲಿ ಪಡೆಯುವ ಪ್ರಯತ್ನಗಳು ಆರಂಭವಾಗಿವೆ. ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸಹಕಾರ ಸಚಿವ ಅಮಿತ್ ಶಾ ನೇರ ಕಾರಣ ಎಂದು ಆಕ್ರೋಶ ಹೊರಹಾಕಿದ್ದಾರೆ. ಕರ್ನಾಟಕದಲ್ಲಿ ನಮ್ಮ ಹಿರಿಯರು ಕಟ್ಟಿ ಬೆಳೆಸಿದ್ದ ಬ್ಯಾಂಕುಗಳನ್ನು ತಿಂದು ಮುಕ್ಕಿದ್ದಾಯಿತು. ಈಗ ರೈತರ ಪಾಲಿನ ಸಂಜೀವಿನಿ ನಂದಿನಿಯನ್ನು ಆಪೋಶನ ತೆಗೆದುಕೊಳ್ಳಲು ನರೇಂದ್ರ ಮೋದಿ ಮತ್ತು ಅಮಿತ್ ಶಾ ಸಂಚು ಹೂಡಿದ್ದಾರೆ ಎಂದಿದ್ದಾರೆ.

ಕೆಎಂಎಫ್ ಮತ್ತು ಅಮುಲ್ ಸಂಸ್ಥೆಗಳ ವಿಲೀನದ ಬಗ್ಗೆ ಅಮಿತ್ ಶಾ ಪ್ರಸ್ತಾಪ ಮಾಡಿದ ದಿನದಿಂದ ರಾಜ್ಯದ ಹೈನು ಉದ್ಯಮಕ್ಕೆ ಗರ ಬಡಿದಿದೆ ಎಂದು ಹೇಳಿದ್ದಾರೆ. ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ನಂದಿನಿ ಹಾಲು ಮತ್ತು ಮೊಸರು ಮಾರುಕಟ್ಟೆಯಿಂದ ಮಾಯವಾಗುತ್ತಿದೆ. ಅಮುಲ್ ಉತ್ಪನ್ನಗಳ ಮಾರಾಟ ಭರದಿಂದ ಸಾಗುತ್ತಿದೆ. ಅಮಿತ್ ಶಾ ನೇರ ಉಸ್ತುವಾರಿಯಲ್ಲಿಯೇ ಇವೆಲ್ಲ ನಡೆಯುತ್ತಿದೆ ಎನ್ನುವುದು ನಿಸ್ಸಂಶಯ. ಗುಜರಾತ್ ಮೂಲದ ಅಮುಲ್ ಹಾಲು ಮತ್ತು ಮೊಸರು ಮಾರಾಟದ ಮೂಲಕ ಕರ್ನಾಟಕದ ಮಾರುಕಟ್ಟೆ ಪ್ರವೇಶಿಸಲು ಹಿಂದೆಯೂ ಪ್ರಯತ್ನಿಸಿತ್ತು. ಅದಕ್ಕೆ ನಾವು ಅವಕಾಶ ಕೊಡಲಿಲ್ಲ. ಈಗ ಬಿಜೆಪಿ ಕೆಂಪುಕಂಬಳಿ ಹಾಸಿ ಸ್ವಾಗತಿಸಿದೆ ಎಂದು ಟೀಕಿಸಿದ್ದಾರೆ.

ಬಿಜೆಪಿ ಆಡಳಿತಾವಧಿಯಲ್ಲಿ ಕೆಎಂಎಫ್​ನಲ್ಲಿ ಹಾಲಿನ ಸಂಗ್ರಹ ಕಡಿಮೆಯಾಗುತ್ತಿದೆ. ದಿನಕ್ಕೆ 99 ಲಕ್ಷ ಲೀಟರ್ ಹಾಲು ಸಂಗ್ರಹವಾಗಬೇಕಾಗಿದ್ದ ಕಡೆ ಕೇವಲ 71 ಲಕ್ಷ ಲೀಟರ್ ಹಾಲು ಸಂಗ್ರಹವಾಗುತ್ತಿದೆ. ಇದು ಕೆಎಂಎಫ್ ವಿರುದ್ಧದ ಷಡ್ಯಂತ್ರವೇ?. ನಮ್ಮ ಸರ್ಕಾರವು ಹಾಲಿಗೆ ನೀಡುವ ಸಹಾಯಧನವನ್ನು ಲೀಟರ್​ಗೆ 5 ರೂ.ಗಳಷ್ಟು ಹೆಚ್ಚಿಸಿತ್ತು. ಇದರಿಂದಾಗಿ 2012-13 ರಲ್ಲಿ 45 ಲಕ್ಷ ಲೀಟರ್ ಉತ್ಪಾದನೆಯಾಗುತ್ತಿದ್ದ ಹಾಲಿನ ಪ್ರಮಾಣವು 2017 ರ ವೇಳೆಗೆ 73 ಲಕ್ಷ ಲೀಟರ್​ಗೆ ಏರಿಕೆಯಾಗಿತ್ತು. ಈಗ ಕಡಿಮೆಯಾಗಲು ಕಾರಣವೇನು?. ನಮ್ಮ ಸರ್ಕಾರ ಐದು ವರ್ಷಗಳಲ್ಲಿ 1,356 ಕೋಟಿ ರೂಪಾಯಿಗಳನ್ನು ಹಾಲಿನ ಸಹಾಯಧನಕ್ಕಾಗಿ ರೈತರಿಗೆ ಕೊಟ್ಟಿದ್ದೆವು. ಆದರೆ ಬಿಜೆಪಿ ಸರ್ಕಾರ 2020 -21 ರಲ್ಲಿ 1,186 ಕೋಟಿ ಖರ್ಚು ಮಾಡಿದ್ದರೆ 2023-24ಕ್ಕೆ ಕೇವಲ 1,200 ಕೋಟಿ ರೂಪಾಯಿಗಳನ್ನು ಬಜೆಟ್​ನಲ್ಲಿ ಒದಗಿಸಿ ರೈತರಿಗೆ ಅನ್ಯಾಯ ಮಾಡಿದೆ ಎಂದು ಟೀಕಾ ಸಮರ ನಡೆಸಿದ್ದಾರೆ.

ಕರ್ನಾಟಕದ ಬಿಜೆಪಿ ನಾಯಕತ್ವ ಎಷ್ಟೊಂದು ದುರ್ಬಲವಾಗಿದೆಯೆಂದರೆ ಒಂದೆಡೆ ಬೆಳಗಾವಿ ಗಡಿಪ್ರದೇಶದಲ್ಲಿ ಮಹಾರಾಷ್ಟ್ರ ಸರ್ಕಾರ ನೇರವಾಗಿ ತನ್ನ ಆಡಳಿತವನ್ನು ಸ್ಥಾಪಿಸಲು ಪ್ರಯತ್ನಿಸುತ್ತಿದೆ. ಇನ್ನೊಂದೆಡೆ ಗುಜರಾತ್ ರಾಜ್ಯ ಅಮುಲ್ ಮೂಲಕ ಇಲ್ಲಿನ ರೈತರನ್ನು ಬೀದಿಗೆ ತಳ್ಳುವ ಪ್ರಯತ್ನ ಮಾಡುತ್ತಿದೆ. ಹಿಂದಿ ಹೇರಿಕೆಯ ಮೂಲಕ ನಡೆಸುತ್ತಿರುವ ಭಾಷಾದ್ರೋಹ ಮತ್ತು ರಾಜ್ಯದ ಗಡಿಯೊಳಗೆ ಅತಿಕ್ರಮಿಸುವ ಮೂಲಕ ನಡೆಸುತ್ತಿರುವ ನೆಲದ್ರೋಹದ ಜೊತೆಗೆ ಈಗ ಕೆಎಂಎಫ್ ಅನ್ನು ಮುಚ್ಚಿಸುವ ಮೂಲಕ ರೈತದ್ರೋಹ ಮಾಡಲು ಬಿಜೆಪಿ ಸರ್ಕಾರ ಹೊರಟಿದೆ ಎಂದಿದ್ದಾರೆ. ನಾಡಿನ ರೈತರ ಹಿತರಕ್ಷಣೆಗಾಗಿ ಕಟ್ಟಿರುವ ಕೆಎಂಎಫ್​ ಕಬಳಿಕೆಯ ವಿರುದ್ಧ ಕನ್ನಡಿಗರೆಲ್ಲರೂ ಒಮ್ಮತದಿಂದ ವಿರೋಧಿಸಬೇಕು. ಅಮುಲ್ ಉತ್ಪನ್ನಗಳನ್ನು ಖರೀದಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಬೇಕು ಎಂದು ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

ಇದನ್ನೂ ಓದಿ:ನಂದಿನಿ ಬ್ರ್ಯಾಂಡ್​ ಬೆಳೆಯಬೇಕು, ಅಮುಲ್ ಆನ್​ಲೈನ್ ಖರೀದಿ ಜನರಿಗೆ ಬಿಟ್ಟದ್ದು: ಶೋಭಾ ಕರಂದ್ಲಾಜೆ

Last Updated : Apr 8, 2023, 11:58 AM IST

ABOUT THE AUTHOR

...view details